ಸಿರಗುಪ್ಪ: ದುಶ್ಚಟಗಳು ವ್ಯಕ್ತಿಯ ಬದುಕು, ಕುಟುಂಬ ಮಾತ್ರವಲ್ಲದೆ ಸಮಾಜದ ಮೇಲೂ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಪ್ರಥಮ ದರ್ಜೆ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶ ಆರ್.ಎಚ್.ಅಶೋಕ್ ಹೇಳಿದರು.

ಪಟ್ಟಣದ ಎಸ್.ಇ.ಎಸ್.ಪಾಲಿಟೆಕ್ನಿಕ್ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಶಿಕ್ಷಣ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಮಾದಕ ವಸ್ತುಗಳ ಮುಕ್ತ ಸಮಾಜ ಮತ್ತು ಎನ್.ಡಿ.ಪಿ.ಎಸ್ ಕಾಯ್ದೆ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಾದಕ ವಸ್ತುಗಳ ಸೇವನೆಯಿಂದ ಶರೀರದಲ್ಲಿ ಉಂಟಾಗುವ ಬದಲಾವಣೆ ಹಾಗೂ ದುಷ್ಟ ಭಾವವನ್ನು ಸರಳ ಪ್ರಯೋಗದಿಂದ ತಿಳಿಯಬಹುದಾಗಿದೆ. ಆರಂಭದಲ್ಲಿ ಕುತೂಹಲ ಅಥವಾ ಸ್ನೇಹಿತರ ಒತ್ತಡದಿಂದ ರೂಢಿಸಿಕೊಳ್ಳುವ ಮದ್ಯಪಾನ ಅಥವಾ ಪಾನ್ ವಸ್ತುಗಳ ಸೇವನೆ ಕೊನೆಗೆ ಮಾರಕ ಗಾಂಜಾ, ಅಫೀಮು, ಕೊಕೇನ್ ದಾಸರನ್ನಾಗಿಸುತ್ತದೆ. ಮಿದುಳಿನಲ್ಲಿ ಬದಲಾವಣೆ ತಂದು ಇನ್ನಷ್ಟು ಸೇವಿಸುವಂತೆ ಪ್ರೇರೇಪಿಸಿ ಕೊನೆಗೆ ವ್ಯಸನಿಗಳನ್ನಾಗಿಸುತ್ತದೆ. ಅಪರಾಧ ಕೃತ್ಯಗಳಿಗೆ ಪ್ರಚೋದನೆ ನೀಡುವ ವ್ಯಸನ ಅಪಘಾತಗಳಿಗೂ ಕಾರಣವಾಗುವುದು ಎಂದರು.
ಮಾದಕ ದ್ರವ್ಯಗಳನ್ನು ಮಾರಾಟ ಮಾಡುವ ಜಾಲವನ್ನು ಮಟ್ಟಹಾಕಲು ಕಾನೂನಿನೊಂದಿಗೆ ಸಹಕರಿಸಬೇಕು. ಮಾದಕ ವಸ್ತುಗಳನ್ನು ಬಳಸುತ್ತಿರುವವರಿಗೆ ತಿಳಿವಳಿಕೆ ನೀಡಿ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳು, ಯುವಜನತೆ ಮುಂದಾಗಬೇಕು ಎಂದು ನ್ಯಾಯಾಧೀಶ ಆರ್.ಎಚ್.ಅಶೋಕ್ ತಿಳಿಸಿದರು. ವಕೀಲರ ಸಂಘದ ಅಧ್ಯಕ್ಷ ವೆಂಕೋಬ, ಪ್ಯಾನಲ್ ವಕೀಲ ಅಬ್ದುಲ್ ಸಾಬ್ ಇತರರಿದ್ದರು.