
ಸಿರವಾರ: ಡೆಂಗೆ ಜ್ವರ ಸೊಳ್ಳೆಗಳಿಂದ ಹರಡುವುದರಿಂದ ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕಿದೆ ಎಂದು ಆರೋಗ್ಯ ನಿರೀಕ್ಷಣಾಧಿಕಾರಿ ಯಲ್ಲಾಲಿಂಗ ಪೂಜಾರಿ ಹೇಳಿದರು.
ರಾಷ್ಟ್ರೀಯ ಡೆಂಗೆ ದಿನದ ಅಂಗವಾಗಿ ಪಟ್ಟಣದ 14ನೇ ವಾರ್ಡ್‌ನಲ್ಲಿ ಶುಕ್ರವಾರ ಆಯೋಜಿಸಿದ್ದ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಹೊಸ ರೋಗಗಳು ಪತ್ತೆಯಾಗುತ್ತಿವೆ. ಇದರ ಬಗ್ಗೆ ಪ್ರತಿಯೊಬ್ಬರೂ ಎಚ್ಚರಿಕೆ ವಹಿಸಬೇಕು.
ತೀವ್ರ ಜ್ವರ, ತಲೆನೋವು, ಕಣ್ಣುಗಳ ಹಿಂಭಾಗ, ಮಾಂಸ ಮತ್ತು ಕೀಲುಗಳಲ್ಲಿ ವಿಪರೀತ ನೋವು, ಬಾಯಿ, ಮೂಗು ಮತ್ತು ಒಸಡುಗಳಿಂದ ರಕ್ತಸ್ರಾವ, ಚರ್ಮದ ಮೇಲೆ ಅಲ್ಲಲ್ಲಿ ರಕ್ತ ಸ್ರಾವದ ಗುರುತುಗಳು ಈ ರೋಗದ ಮುಖ್ಯ ಲಕ್ಷಣಗಳಾಗಿದ್ದು ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿ, ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದರು.
ಮನೆಯಲ್ಲಿ ಬ್ಯಾರೆಲ್, ಸಿಮೆಂಟ್ ತೊಟ್ಟಿ, ಮಣ್ಣಿನ ಮಡಕೆ, ಡ್ರಮ್, ಫ್ರಿಜ್, ಏರ್‌ಕೂಲರ್ ಇತ್ಯಾದಿಗಳನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಒಣಗಿಸಿ ಮತ್ತೆ ಭರ್ತಿ ಮಾಡಬೇಕು. ತೆಂಗಿನ ಚಿಪ್ಪು , ಟಯರ್, ಒಡೆದ ಬಾಟಲಿ ಮುಂತಾದವುಗಳಲ್ಲಿ ಸೂಕ್ತ ವಿಲೇವಾರಿ ಮಾಡುವುದು.
ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆ ನಿರೋಧಕ ಹಾಗೂ ಸೊಳ್ಳೆ ಪರದೆಯನ್ನು ಬಳಸುವುದು, ಯಾವುದೇ ಜ್ವರ ಇರಲಿ ರಕ್ತ ಪರೀಕ್ಷೆ ಮಾಡಿಸಬೇಕು. ಮನೆಯ ಸುತ್ತ-ಮುತ್ತ ಕಲುಷಿತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಎಂದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀದೇವಿ, ಪ್ರಾಥಮಿಕ ಸುರಕ್ಷಾಧಿಕಾರಿ ನೀಲಮ್ಮ, ಶುಶ್ರೂಷಕಿ ರಂಗಮ್ಮ, ಪ್ರಮುಖರಾದ ರಾಕೇಶ, ಜರಿನಾ, ಲೀಲಾವತಿ ಇತರರಿದ್ದರು.