More

    ಸರ್ಕಾರ ತಿಂಗಳಿಗೆ 10 ಸಾವಿರ ರೂ. ನೀಡಲಿ

    ಶಿರಸಿ: ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಒದಗಿಸಿರುವುದರಿಂದ ಆಟೋ ಚಾಲಕರು, ಮಾಲೀಕರು ಹಾಗೂ ಎಲ್ಲ ಚಾಲಕ ವರ್ಗಕ್ಕೆ ತೊಂದರೆಯಾಗುತ್ತಿದೆ. ಹೀಗಾಗಿ, ನಮ್ಮ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ಒತ್ತಾಯಿಸಿ ಆಟೋ ಚಾಲಕರು, ಮಾಲೀಕರು ನಗರದಲ್ಲಿ ಟಯರ್‌ಗೆ ಬೆಂಕಿ ಹಚ್ಚಿ ಮಂಗಳವಾರ ಪ್ರತಿಭಟನೆ ನಡೆಸಿದರು.
    ಶಿರಸಿ ನಗರ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷ ಉಪೇಂದ್ರ ಪೈ ಮಾತನಾಡಿ, ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡಿರುವುದರಿಂದ ಆಟೋ ರಿಕ್ಷಾದವರಿಗೆ ಬಾಡಿಗೆ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಸರ್ಕಾರ ಆಟೋ ಚಾಲಕರಿಗೆ ಪ್ರತಿ ತಿಂಗಳು 10 ಸಾವಿರ ರೂಪಾಯಿ ನೀಡಬೇಕು. ಕಾಂಗ್ರೆಸ್ ಸರ್ಕಾರ ಆಟೋ ಚಾಲಕರು ಹಾಗೂ ಮಾಲೀಕರ ಬದುಕಿಗೆ ಮಾರಕವಾಗಿದೆ. ಒಂದು ತಿಂಗಳೊಳಗೆ ಆಟೋ ಚಾಲಕರು, ಮಾಲೀಕರ ಖಾತೆಗೆ ಹಣ ಹಾಕಬೇಕು. ಇಲದಿದ್ದರೆ ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
    ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸಂಘ ಹುಬ್ಬಳ್ಳಿಯ ಅಧ್ಯಕ್ಷ ಶೇಖರಯ್ಯ ಮಠಪತಿ, ರಾಜ್ಯ ಸರ್ಕಾರ ನಮ್ಮ ಸಮಸ್ಯೆಗೆ ಸ್ಪಂದಿಸದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
    ಉತ್ತರ ಕನ್ನಡ ಜಿಲ್ಲಾ ಆಟೋ ಚಾಲಕ ಮಾಲಕರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಶಿವರಾಜ ಮೇಸ್ತಾ, ಶಶಿಭೂಷಣ ಹೆಗಡೆ ದೊಡ್ಮನೆ ಮಾತನಾಡಿ, ಆಟೋ ಚಾಲಕರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಬೇಕು. ಅಧಿವೇಶನ ಮುಗಿಯುವುದರೊಳಗೆ ಸಮಸ್ಯೆಗೆ ಪರಿಹಾರ ನೀಡಬೇಕು ಎಂದರು.
    ನಗರದ ಹಳೇ ಬಸ್ ನಿಲ್ದಾಣ ವೃತ್ತದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆಯು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಝೂ ವೃತ್ತದ ಬಳಿ ಟಯರ್‌ಗಳಿಗೆ ಬೆಂಕಿ ಹಚ್ಚಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ನಂತರ ಶಿರಸಿ ಉಪವಿಭಾಗಾಧಿಕಾರಿ ದೇವರಾಜ ಆರ್. ಅವರಿಗೆ ಮನವಿ ಸಲ್ಲಿಸಿದರು. ನಗರಸಭೆ ಮಾಜಿ ಉಪಾಧ್ಯಕ್ಷೆ ವೀಣಾ ಶೆಟ್ಟಿ, ಉಷಾ ಹೆಗಡೆ, ಮಾರಿಕಾಂಬಾ ಟ್ಯಾಕ್ಸಿ ಯೂನಿಯನ್ ಅಧ್ಯಕ್ಷ ರಾಘು ಗೌಳಿ, ಮಾರಿಕಾಂಬಾ ಆಟೋ ಚಾಲಕ- ಮಾಲೀಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ, ಉದಯ ನಾಯ್ಕ ಕಾರವಾರ, ಬಸವರಾಜ ಅವರಳ್ಳಿ, ರಾಬರ್ಟ್ ಲೋಬೋ ಮುಂಡಗೋಡ, ಕೃಷ್ಣ ನಾಯ್ಕ ಶಿರಸಿ, ವಿಜಯ ಕಲ್ಮನೆ ಗದಗ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts