

ಬೆಂಗಳೂರು: ಬಿಹಾರದಲ್ಲಿ ಜಾತಿಗಣತಿ ವರದಿ ನಿನ್ನೆ ಬಿಡುಗಡೆ ಆಗಿದ್ದು, ಅದರ ಬೆನ್ನಿಗೇ ಕರ್ನಾಟಕದಲ್ಲೂ ವರದಿಯೊಂದರ ಬಿಡುಗಡೆಗೆ ಇಲ್ಲಿನ ಸರ್ಕಾರ ಸಜ್ಜಾಗುತ್ತಿರುವಂತೆ ಕಾಣುತ್ತಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಮಾಹಿತಿಯೊಂದನ್ನು ಇಂದು ಹಂಚಿಕೊಂಡಿದ್ದಾರೆ.
ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಬೇಕೆಂದು ಹಿಂದಿನ ನಮ್ಮ ಸರ್ಕಾರದ ಅವಧಿಯಲ್ಲಿ ಆದೇಶಿಸಿದ್ದೆ. ಆಗ ಕಾಂತರಾಜು ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದರು. ಆಗ ನಮ್ಮ ಸರ್ಕಾರದ ಅವಧಿಯಲ್ಲಿ ವರದಿ ಪೂರ್ಣವಾಗಿರಲಿಲ್ಲ ಎಂದು ಸಿಎಂ ತಿಳಿಸಿದ್ದಾರೆ.
ಈ ಕುರಿತಂತೆ ಇನ್ನಷ್ಟು ಮಾಹಿತಿ ಹಂಚಿಕೊಂಡಿರುವ ಅವರು, ನಮ್ಮ ನಂತರ ಸಮ್ಮಿಶ್ರ ಸರ್ಕಾರ ಬಂದಿದ್ದು ಅಂದಿನ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ವರದಿ ಸ್ವೀಕರಿಸಲಿಲ್ಲ. ನಂತರ ಆಯೋಗಕ್ಕೆ ಜಯಪ್ರಕಾಶ್ ಹೆಗ್ಡೆಯವರನ್ನು ಬಿಜೆಪಿ ಸರ್ಕಾರ ನೇಮಿಸಿತ್ತು. ಅವರಿಗೆ ವರದಿ ಸಲ್ಲಿಸುವಂತೆ ತಿಳಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಲ್ಲಿಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ಈಗಾಗಲೇ ತಿಳಿಸಲಾಗಿದ್ದು, ಆ ವರದಿ ಕೈಸೇರಿದ ಬಳಿಕ ಪರಿಶೀಲಿಸಲಾಗುವುದು ಎಂದಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸದ್ಯದಲ್ಲೇ ಬಿಡುಗಡೆ ಆಗಲಿದೆಯೇ ಎಂಬ ಕುತೂಹಲ ಮೂಡಿದೆ.