More

    ಮೂವತ್ತು ವಿದ್ಯಾರ್ಥಿಗಳಿಗೆ ವಿಶೇಷ ವ್ಯವಸ್ಥೆ; ಇಬ್ಬರು ಕ್ವಾರಂಟೈನ್ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ

    ವಿಶೇಷ ಬೆಂಗಳೂರು ಗ್ರಾಮಾಂತರ: ಗ್ರಾಮಾಂತರ ಜಿಲ್ಲೆಯ 52 ಪರೀಕ್ಷಾ ಕೇಂದ್ರಗಳಲ್ಲಿ ಜೂ.25ರಿಂದ ಪರೀಕ್ಷೆ ನಡೆಯಲಿದ್ದು, 13,192 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

    ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಸೀಲ್‌ಡೌನ್ ಪ್ರದೇಶದ 30 ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಪ್ರತ್ಯೇಕ ಎರಡೆರಡು ಕೊಠಡಿ ಮೀಸಲಿಟ್ಟಿದ್ದು, ವಿದ್ಯಾರ್ಥಿಗಳು ನಿರ್ಭಯವಾಗಿ ಪರೀಕ್ಷೆ ಎದುರಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ವ್ಯವಸ್ಥೆ ಕಲ್ಪಿಸಿದೆ.

    ಜಿಲ್ಲೆಯಲ್ಲಿ ಸೀಲ್‌ಡೌನ್ ಪ್ರದೇಶದಲ್ಲಿರುವ 30 ವಿದ್ಯಾರ್ಥಿಗಳ ಪಟ್ಟಿ ಸಿದ್ಧಪಡಿಸಿದ್ದು, ಇವರಿಗಾಗಿ ವಿಶೇಷ ವ್ಯವಸ್ಥೆ ಕಲ್ಪಿಸಿರುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಂಗಮಾರೇಗೌಡ ‘ವಿಜಯವಾಣಿ’ಗೆ ತಿಳಿಸಿದ್ದಾರೆ.

    ಇಬ್ಬರಿಗೆ ಮರು ಪರೀಕ್ಷೆ: ಜಿಲ್ಲೆಯಲ್ಲಿ ಇದುವರೆಗೆ ಯಾವ ವಿದ್ಯಾರ್ಥಿಗಳಲ್ಲಿ ಪಾಸಿಟಿವ್ ಪ್ರಕರಣ ಕಂಡುಬಂದಿಲ್ಲದಿರುವುದರಿಂದ ಎಲ್ಲ ವಿದ್ಯಾರ್ಥಿಗಳಿಗೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ ಇದರಲ್ಲಿ ಇಬ್ಬರು ವಿದ್ಯಾರ್ಥಿಗಳ ಕುಟುಂಬ ಕ್ಯಾರಂಟೈನ್‌ನಲ್ಲಿರುವ ಕಾರಣ ಅವರಿಗೆ ಮಾತ್ರ ಮರುಪರೀಕ್ಷೆಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

    ಆಗಸ್ಟ್‌ನಲ್ಲಿ ಮರುಪರೀಕ್ಷೆ ನಡೆಸುವಂತೆ ಸರ್ಕಾರ ಸೂಚಿಸಿರುವ ಹಿನ್ನೆಲೆಯಲ್ಲಿ ಅಂಥ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದು. ಈ ಬಗ್ಗೆ ಆತಂಕಪಡಬೇಕಿಲ್ಲ ಎಂದು ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

    ಇಲಾಖೆಯಿಂದಲೇ ವಾಹನ ವ್ಯವಸ್ಥೆ: ಸೀಲ್‌ಡೌನ್ ಪ್ರದೇಶದಲ್ಲಿನ ವಿದ್ಯಾರ್ಥಿಗಳು ಸ್ವಂತ ವಾಹನದಲ್ಲಿ ಪರೀಕ್ಷೆಗೆ ಹಾಜರಾಗುವಂತೆ ಇಲಾಖೆ ಸೂಚನೆ ನೀಡಿದ್ದು, ಸಾಧ್ಯವಾಗದಿದ್ದರೆ ಇಲಾಖೆಯ ವಾಹನ ಅಥವಾ ಖಾಸಗಿ ಶಾಲೆಗಳ ವಾಹನಗಳ ಮೂಲಕ ಕೇಂದ್ರಕ್ಕೆ ಕರೆತರುವ ವ್ಯವಸ್ಥೆ ಮಾಡಲಾಗಿದೆ. ದೈಹಿಕ ಅಂತರ ಕಾಯ್ದುಕೊಂಡು ಸರ್ಕಾರದ ನಿಯಮಗಳ ಪಾಲನೆಯೊಂದಿಗೆ ವಿದ್ಯಾರ್ಥಿಗಳನ್ನು ಕರೆತಂದು, ಪರೀಕ್ಷೆ ಬಳಿಕ ಮತ್ತೆ ಸ್ವ ಸ್ಥಳಗಳಿಗೆ ತಲುಪಿಸುವ ಜವಾಬ್ದಾರಿ ವಹಿಸಿಕೊಂಡಿದೆ.

    ಪೂರ್ವ ಪರಿಶೀಲನೆ: ಇಂದು ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಪೂರ್ವಭಾವಿಯಾಗಿ ಬುಧವಾರ ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದರು. ಪರೀಕ್ಷಾ ಕೇಂದ್ರಗಳಲ್ಲಿ ಸೋಂಕು ನಿವಾರಕ ಸಿಂಪಡಿಸಲಾಗಿದೆ. ದೊಡ್ಡಬಳ್ಳಾಪುರ ತಾಲೂಕು ಕೇಂದ್ರ ಸ್ಥಾನವಾದ ತೂಬಗೆರೆಯಲ್ಲಿ ಕೊಠಡಿಗಳನ್ನು ಸ್ಯಾನಿಟೈಸರ್ ಬಳಸಿ ಸ್ವಚ್ಛ ಮಾಡಲಾಯಿತು.

    ಸೀಲ್‌ಡೌನ್ ಪ್ರದೇಶದಿಂದ ಬರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಿದ್ದರೂ ಇತರ ವಿದ್ಯಾರ್ಥಿಗಳಿಗಾಗಲಿ ಅಥವಾ ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗಾಗಲಿ ಯಾವುದೇ ಅಭದ್ರತೆ, ಆತಂಕ ಕಾಡದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಕರೊನಾ ಮುಂಜಾಗ್ರತೆಯೊಂದಿಗೆ ಎಲ್ಲ ವ್ಯವಸ್ಥೆ ಇರುವುದರಿಂದ ವಿದ್ಯಾರ್ಥಿಗಳು ನಿರಾತಂಕವಾಗಿ ಪರೀಕ್ಷೆ ಎದುರಿಸಬಹುದು.
    ಗಂಗಮಾರೇಗೌಡ, ಉಪನಿರ್ದೇಶಕ, ಸಾರ್ವಜನಿಕ ಶಿಕ್ಷಣ ಇಲಾಖೆ ಬೆಂ.ಗ್ರಾಮಾಂತರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts