ಬೆಂಗಳೂರು: ನೈಸ್ ರಸ್ತೆಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ನಿಯಂತ್ರಿಸಲು ವಾಹನಗಳಿಗೆ ವೇಗದ ಮಿತಿ ನಿಗದಿಪಡಿಸಿದೆ. ಜತೆಗೆ ರಾತ್ರಿ 10 ರಿಂದ ಬೆಳಗಿನ ಜಾವ 5 ಗಂಟೆ ನಡುವೆ ದ್ವಿಚಕ್ರ ವಾಹನಗಳ ಸಂಚಾರವನ್ನು ನಿಷೇಧಿಸಿ ಬೆಂಗಳೂರು ನಗರ ಪೊಲೀಸ್ ಆದೇಶ ಹೊರಡಿಸಿದೆ.
ಕೆಂಗೇರಿ, ಕಾಮಾಕ್ಷಿಪಾಳ್ಯ, ಜ್ಞಾನಭಾರತಿ ಮತ್ತು ಬ್ಯಾಟರಾಯನಪುರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ 23.5 ಕಿಲೋಮೀಟರ್ ಹಾಗೂ ತಲಘಟ್ಟಪುರ, ಕೆ.ಎಸ್. ಲೇಔಟ್, ಹುಳಿಮಾವು ಮತ್ತು ಎಲೆಕ್ಟ್ರಾನಿಕ್ಸ್‌ಸಿಟಿ ಠಾಣೆ ವ್ಯಾಪ್ತಿಯಲ್ಲಿ 21 ಕಿಲೋಮೀಟರ್ ನೈಸ್ ರಸ್ತೆ ಇದೆ. ಈ ರಸ್ತೆಯಲ್ಲಿ ಚಲಿಸುವ ವಾಹನ ಚಾಲಕ ಮತ್ತು ಸವಾರರ ನಿರ್ಲಕ್ಷ್ಯತೆ, ಅತಿ ವೇಗ, ಪಥ ಶಿಸ್ತು ಪಾಲನೆ ಮಾಡದೆ ಇರುವುದು ಮತ್ತು ಅಜಾಗರೂಕತೆಯ ಚಾಲನೆಯಿಂದ ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ.
ಅಪಘಾತ ತಡೆಗಟ್ಟಲು ಹಲವು ಸುಧಾರಣಾ ಕ್ರಮಗಳನ್ನು ಕೈಗೊಂಡರೂ ಪ್ರಯೋಜನವಾಗಿಲ್ಲ. ಆದ್ದರಿಂದ ನೈಸ್ ರಸ್ತೆಯಲ್ಲಿ ಸಂಚರಿಸುವ ಎಲ್ಲ ವಾಹನಗಳಿಗೆ ವೇಗದ ಮಿತಿ ನಿಗದಿಗೊಳಿಸಿರುವುದಾಗಿ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ. ಅದೇ ರೀತಿಯಾಗಿ ರಾತ್ರಿ 10 ರಿಂದ ಬೆಳಗಿನ ಜಾವ 5 ಗಂಟೆ ನಡುವೆ ದ್ವಿಚಕ್ರ ವಾಹನಗಳ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಿದ್ದು, ಶುಕ್ರವಾರದಿಂದಲೇ (ಆ.2) ಜಾರಿಗೆ ಬರಲಿದೆ ಎಂದು ಉಲ್ಲೇಖಿಸಿದ್ದಾರೆ.