ಮಡಿಕೇರಿ: ಕ್ರೀಡೆ ವಿದ್ಯಾರ್ಥಿಗಳ ಶಾರೀರಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿ ಎಂದು ಡಿಡಿಪಿಐ ಪಿ.ಎಸ್.ಮಚ್ಚಾಡೋ ಅಭಿಪ್ರಾಯಪಟ್ಟರು.
ವಿರಾಜಪೇಟೆ ಕೊಡವ ಸಮಾಜದ ಅಧೀನದಲ್ಲಿ ಗುರುವಾರ ವಿರಾಜಪೇಟೆ ತ್ರಿವೇಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಕ್ರೀಡೋತ್ಸವದಲ್ಲಿ ಕ್ರೀಡಾಜ್ಯೋತಿ ಬೆಳಗಿಸಿ ಮಾತನಾಡಿದರು.
ಮಾರ್ಚ್ ತಿಂಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚಿನ ಗಮನ ಹರಿಸಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕಠಿಣ ಪರಿಶ್ರಮದಿಂದ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ. ಶಾಲೆಗೆ ಸತತವಾಗಿ ಶೇ. 100ರಷ್ಟು ಫಲಿತಾಂಶ ಬರುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಮುಂದಿನ ದಿನಗಳಲ್ಲೂ ಇದೇ ಫಲಿತಾಂಶ ಬರುವಂತಾಗಲಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಜಿಲ್ಲಾ ಪಂಚಾಯತಿ ಸ್ಥಾಯಿ ಸಮಿತಿ ಸದಸ್ಯರಾದ ಮೂಕಂಡ ಶಶಿಸುಬ್ರಮಣಿ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಕ್ರೀಡೆ ಸಹಕಾರಿಯಾಗಲಿದೆ. ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಹೇಳಿದರು.
ಕೊಡವ ಸಮಾಜದ ಅಧ್ಯಕ್ಷ ವಾಂಚೀರ ನಾಣಯ್ಯ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಹೆಚ್ಚು ಭಾಗವಹಿಸಿ, ಹೆಸರು ಗಳಿಸುವಂತಾಗಬೇಕು ಎಂದರು.
ಕ್ರೀಡೋತ್ಸವದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಎನ್.ಕಾರ್ಯಪ್ಪ ವಹಿಸಿದ್ದರು. ಕ್ರೀಡಾಕೂಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಈ ಸಂದರ್ಭ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಅಮ್ಮಣಿಚಂಡ ಗಂಗಮ್ಮ, ಶಾಲಾ ಮುಖ್ಯ ಶಿಕ್ಷಕಿಯಾದ ಕವಿತಾ ಶೆಟ್ಟಿ, ಕೊಡವ ಸಮಾಜದ ಕಾರ್ಯದರ್ಶಿ, ಸದಸ್ಯರು, ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪಾಲಕರು ಇದ್ದರು.