ನಂಜನಗೂಡು: ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಗೊಳ್ಳುವುದರ ಜತೆಗೆ, ಸಮಾನತೆಯ ಮನೋಭಾವ ಬೆಳೆಸುತ್ತದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.
ತಾಲೂಕಿನ ಗೀಕಹಳ್ಳಿ ಸಮೀಪವಿರುವ ಸಮುದ್ರ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಣ ಇಲಾಖೆಯಿಂದ ಮಂಗಳವಾರ ಏರ್ಪಡಿಸಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿಭಾಗಗಳ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.
ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿರುವ ಕ್ರೀಡಾ ಪ್ರತಿಭೆಯನ್ನು ಅನಾವರಣಗೊಳಿಸಲು ಇದು ಉತ್ತಮ ವೇದಿಕೆಯಾಗಿದೆ. ಸ್ಪರ್ಧಿಗಳು ಉತ್ತಮ ಪ್ರದರ್ಶನ ನೀಡಿ ನಿಮ್ಮ ಪ್ರತಿಭೆ ಪ್ರದರ್ಶನಕ್ಕೆ ಮುಂದಾಗಬೇಕು. ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಮುಖ್ಯವಾಗಿ ಕ್ರೀಡಾಸ್ಫೂರ್ತಿ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಶಿವಲಿಂಗಯ್ಯ ಮಾತನಾಡಿ, ಜಿಲ್ಲೆಯ 8 ತಾಲೂಕುಗಳಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳು ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದಾರೆ ಎಂದರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕುರಹಟ್ಟಿ ಮಹೇಶ್, ಸಿ.ಎಂ.ಶಂಕರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಧರ್ಮರತ್ನಾಕರ, ಕಾರ್ಯದರ್ಶಿ ರಂಗನಾಥ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವಣ್ಣ, ಕಾರ್ಯದರ್ಶಿ ಕಾರಯ್ಯ, ರಮೇಶ್, ಮಲ್ಲಿಕಾರ್ಜುನ್, ಮುಖಂಡರಾದ ರಾಜೇಶ್ ನಟರಾಜು, ಕುಮಾರ್ ಉಪಸ್ಥಿತರಿದ್ದರು.