

ಬೆಳ್ತಂಗಡಿ: ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಯನ್ನು ವ್ಯಕ್ತಿಗತ ದಿನಚರಿಯ ಭಾಗವಾಗಿಸಿಕೊಂಡರೆ ಮಾನಸಿಕ ಸ್ಥೈರ್ಯ, ಬೌದ್ಧಿಕ ಬೆಳವಣಿಗೆ ಮತ್ತು ಭಾವನಾತ್ಮಕ ಸಮತೋಲನದ ಪ್ರಜ್ಞೆಯೊಂದಿಗೆ ವ್ಯಕ್ತಿತ್ವ ಸಮಗ್ರಗೊಳಿಸಿಕೊಳ್ಳಬಹುದು. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯಮಟ್ಟದಲ್ಲಿ ಕ್ರೀಡಾ ಸಾಧನೆಗೈಯ್ಯುವುದಕ್ಕೆ ಪೂರಕ ಸ್ಫೂರ್ತಿದಾಯಕ ವಾತಾವರಣ ಎಸ್.ಡಿ.ಎಂ. ಕಾಲೇಜಿನಿಂದ ದೊರಕುತ್ತಿದೆ ಎಂದು ಉಜಿರೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್. ಹೇಳಿದರು.
ಗುರುವಾರ ಇಂದ್ರಪ್ರಸ್ಥ ಸಭಾಂಗಣದಲ್ಲಿ ಮಂಗಳೂರು ವಿಶ್ವವಿದ್ಯಾಲಯ ಮತ್ತು ಉಜಿರೆಯ ಎಸ್.ಡಿ.ಎಂ. ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಂಗಳೂರು ವಿಶ್ವವಿದ್ಯಾಲಯದ ಅಂತರ್‌ಕಾಲೇಜು ಪುರುಷರ ಕಬಡ್ಡಿ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು.
ಪ್ರಾಂಶುಪಾಲ ಪ್ರೊ.ವಿಶ್ವನಾಥ ಪಿ. ಅಧ್ಯಕ್ಷತೆ ವಹಿಸಿ ಮಾತನಾಡಿ, ಕಬಡ್ಡಿಯಂತಹ ತಂಡ ಸ್ಫೂರ್ತಿಯ ಆಟಗಳು ಆಟಗಾರನಲ್ಲಿ ತಂಡದ ನಿರ್ವಹಣೆ, ನಾಯಕತ್ವದ ಗುಣ ಹಾಗೂ ಸಂವಹನ ಕಲೆ ಅಭಿವೃದ್ಧಿಗೊಳಿಸುತ್ತವೆ. ಇತ್ತೀಚಿನ ದಿನಗಳಲ್ಲಿ ಕ್ರೀಡೆಯಲ್ಲಿ ಭಾಗವಹಿಸುವವರ ಸಂಖ್ಯೆ ಕಡಿಮೆಯಾಗಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಕೂಡ ಪಾಲ್ಗೊಳ್ಳಲು ಇಂತಹ ಕ್ರೀಡಾಕೂಟಗಳು ಪ್ರೋತ್ಸಾಹಿಸುತ್ತವೆ. ಎಸ್‌ಡಿಎಂ ಶಿಕ್ಷಣ ಸಂಸ್ಥೆಯು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಸಮಾನ ಅವಕಾಶವನ್ನು ಪ್ರಾರಂಭದಿಂದಲೂ ನೀಡುತ್ತಾ ಬಂದಿದೆ ಎಂದರು.
ದೈಹಿಕ ಶಿಕ್ಷಣ ನಿರ್ದೆಶಕರಾದ ರಮೇಶ್ ಎಚ್, ಶಾರದಾ, ಮಂಗಳೂರು ವಿವಿ ದೈಹಿಕ ಶಿಕ್ಷಣ ನಿರ್ದೇಶಕ ರಾಧಾಕೃಷ್ಣ ಉಪಸ್ಥಿತರಿದ್ದರು. ಡಾ.ಸುವೀರ್ ಜೈನ್ ನಿರೂಪಿಸಿದರು.