ಭರಮಸಾಗರ: ಸರ್ಕಾರ ಕ್ರೀಡೆಗೆ ಅಗತ್ಯ ಪ್ರೋತ್ಸಾಹ ನೀಡುತ್ತಿದ್ದರೂ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಿರೀಕ್ಷೆಯಂತೆ ಪದಕಗಳು ಬಾರದೆ ಇರುವುದು ನಿಜಕ್ಕೂ ಬೇಸರ ತಂದಿದೆ ಎಂದು ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.
ಭರಮಸಾಗರದ ಅಕ್ಕಮಹಾದೇವಿ ಪ್ರೌಢಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಹೋಬಳಿ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಕ್ರೀಡೆಯಲ್ಲಿ ಮಕ್ಕಳು, ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವಂತೆ ದೈಹಿಕ ಶಿಕ್ಷಕರು ರೂಪಿಸಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ ಎಂದರು.
ಇತ್ತೀಚೆಗೆ ಮುಕ್ತಾಯವಾದ ಪ್ಯಾರೀಸ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕಿಂತ ಚಿಕ್ಕ ರಾಷ್ಟ್ರ ಅಮೆರಿಕಾ 113 ಕ್ಕಿಂತ ಹೆಚ್ಚು ಪದಕಗಳನ್ನು ಪಡೆದಿದೆ. ಚೀನಾ 77 ಪದಕಗಳನ್ನು ಮುಡಿಗೇರಿಸಿಕೊಂಡಿದೆ. ಭಾರತ ಕೇವಲ ಒಂದು ಬೆಳ್ಳಿ ಐದು ಕಂಚು ಸೇರಿ 6 ಪದಕಕ್ಕೆ ತೃಪ್ತಿಪಟ್ಟಿದೆ ಎಂದು ತಿಳಿಸಿದರು.
ಪ್ರಾಥಮಿಕ ಹಂತದಲ್ಲಿಯೇ ಮಕ್ಕಳನ್ನು ಉತ್ತಮ ಕ್ರೀಡಾಪಟುಗಳನ್ನಾಗಿ ರೂಪಿಸುವಲ್ಲಿ ದೈಹಿಕ ಶಿಕ್ಷಕರ ಪಾತ್ರ ಮುಖ್ಯವಾದುದು. ಹೋಬಳಿ ಮಟ್ಟದ ಕ್ರೀಡೆಯಲ್ಲಿ ಆಡುವ ಮಕ್ಕಳು ರಾಜ್ಯ ಮಟ್ಟಕ್ಕೆ ತೆರಳುವಂತೆ ದೈಹಿಕವಾಗಿ ಸದೃಢರನ್ನಾಗಿ ಮಾಡಬೇಕಿದೆ. ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳಿಗೆ ಸರ್ಕಾರ ಎಲ್ಲ ರೀತಿಯ ಮೂಲ ಸೌಕರ್ಯಗಳನ್ನು ಒದಗಿಸಿದೆ.
ತಾಲೂಕಿನ ಬಡ ಮಕ್ಕಳು ಶಾಲೆಗೆ ಬರಲು ತೊಂದರೆಯಾಗಬಾರದೆನ್ನುವ ಕಾರಣಕ್ಕೆ ಸ್ವಂತ ಖರ್ಚಿನಿಂದ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ರಾಜ್ಯದಲ್ಲಿ ಎಲ್ಲಿಯೂ ಇಂತಹ ಸೌಕರ್ಯವಿಲ್ಲ. ಪಠ್ಯದ ಜತೆ ಮಕ್ಕಳು ಕ್ರೀಡೆಯ ಕಡೆಗೂ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ಗ್ರಾಪಂ ಅಧ್ಯಕ್ಷೆ ರತ್ನಮ್ಮ, ಡಿ.ಎಸ್.ಪ್ರವೀಣ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್, ಕ್ಷೇತ್ರ ಸಮನ್ವಯಾಧಿಕಾರಿ ಸಂಪತ್‌ಕುಮಾರ್, ಚಿದಾನಂದಸ್ವಾಮಿ, ಬಸವರಾಜ್, ಚನ್ನಬಸಪ್ಪ ಇತರರಿದ್ದರು.