

ಕಾರ್ಕಳ: ಕ್ರೀಡೆ ಮಾನಸಿಕ ಹಾಗೂ ದೈಹಿಕವಾಗಿ ಅತ್ಯಂತ ಪ್ರಯೋಜನಕಾರಿಯಾಗಿದ್ದು ನಮ್ಮ ದೈನಂದಿನ ಜೀವನದಲ್ಲಿ ಕ್ರೀಡೆಗಾಗಿ ಸಮಯ ನೀಡಬೇಕು. ಕ್ರೀಡೆಯಲ್ಲಿ ತೊಡಗಿಸಿಕೊಂಡಾಗ ದೇಹಕ್ಕೂ ಸರಿಯಾದ ವ್ಯಾಯಾಮ ದೊರೆಯುತ್ತದೆ ಹೀಗಾಗಿ ಆರೋಗ್ಯವಂತ ಜೀವನವನ್ನು ಕಾಣಬಹುದಾಗಿದೆ ಎಂದು ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್ ಹೇಳಿದರು.
ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಎರಡು ದಿನ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಮಂಗಳೂರು ವಲಯ ಮಟ್ಟದ ತಾಂತ್ರಿಕ ಮಹಾವಿದ್ಯಾಲಯಗಳ ಪುರುಷರ ವಾಲಿಬಾಲ್ ಪಂದ್ಯಾವಳಿಯ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಮಾರಂಭದಲ್ಲಿ ಸಂಸ್ಥೆಯ ಉಪ ಪ್ರಾಂಶುಪಾಲ ಡಾ.ಗಣೇಶ್ ಐತಾಳ್, ಡೀನ್‌ಗಳು, ವಿವಿಧ ವಿಭಾಗದ ಮುಖ್ಯಸ್ಥರು, ದೈಹಿಕ ಶಿಕ್ಷಣ ನಿರ್ದೇಶಕರು ಮತ್ತು ವಿವಿಧ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರು ಉಪಸ್ಥಿತರಿದ್ದರು.
ಪಂದ್ಯಾವಳಿಯಲ್ಲಿ ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ತಂಡ ಪ್ರಥಮ ಸ್ಥಾನ, ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ತಂಡ ದ್ವಿತೀಯ ಹಾಗೂ ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳ ತಂಡ ತೃತೀಯ ಸ್ಥಾನ ಪಡೆದವು. ವಿಜೇತ ತಂಡಗಳಿಗೆ ಬಹುಮಾನ ಮತ್ತು ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.