

ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೊಲ್ಕತಾ ನೈಟ್ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಕ್ರಿಕೆಟ್ ದಿಗ್ಗಜ ಸಚಿನ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಮುಂಬೈ ಇಂಡಿಯನ್ಸ್ ಪರ ಐಪಿಎಲ್ಗೆ ಪದಾರ್ಪಣೆ ಮಾಡಿದ್ದಾರೆ. ಈ ಮೂಲಕ ಸುದೀರ್ಘ ಎರಡು ವರ್ಷಗಳ ಕಾಯುವಿಕೆ ಕೊನೆಗೊಂಡಿದೆ.
2021ರ ಐಪಿಎಲ್ ಹರಾಜಿನಲ್ಲಿ ಅರ್ಜುನ್ ತೆಂಡೂಲ್ಕರ್ ಮುಂಬೈ ಇಂಡಿಯನ್ಸ್ ತಂಡದ ಪಾಲಾಗಿದ್ದರು. ಆಲ್ರೌಂಡರ್ ಆಗಿರುವ ಅರ್ಜುನ್ ತೆಂಡೂಲ್ಕರ್ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಅವರಿಂದ ಕ್ಯಾಪ್ ಸ್ವೀಕರಿಸಿದ್ದು, ತಮ್ಮ ಚೊಚ್ಚಲ ಪಂದ್ಯದಲ್ಲಿ ಎರಡು ಓವರ್ ಬೌಲಿಂಗ್ ಮಾಡಿದ್ದಾರೆ.
ಚೊಚ್ಚಲ ಪಂದ್ಯದಲ್ಲೇ ಅರ್ಜುನ್ ತೆಂಡೂಲ್ಕರ್ ವಿಶಿಷ್ಟ ದಾಖಲೆಯೊಂದನ್ನು ನಿರ್ಮಾಣ ಮಾಡಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ತಂದೆ ಮತ್ತು ಮಗ ಒಂದೇ ಫ್ರಾಂಚೈಸಿಗಾಗಿ ಆಡಿರುವ ಹೆಗ್ಗಳಿಕೆ ಪಾತ್ರರಾಗಿದ್ದಾರೆ.
10 ವರ್ಷಗಳ ಅಂತರದಲ್ಲಿ ಒಂದೇ ಫ್ರಾಂಚೈಸ್‌ಗಾಗಿ ತಂದೆ ಮತ್ತು ಮಗ ಆಡುತ್ತಿದ್ದಾರೆ. ಇದು ಐಪಿಎಲ್ ಇತಿಹಾಸದಲ್ಲೇ ಮೊದಲು. ಅರ್ಜುನ್ ತೆಂಡೂಲ್ಕರ್ಗೆ ಶುಭವಾಗಲಿ ಎಂದು ಭಾರತದ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಟ್ವೀಟ್ ಮಾಡಿದ್ದಾರೆ. (ಏಜೆನ್ಸೀಸ್)