

Champions Trophy : ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸುವ ಮೂಲಕ ಟ್ರೋಫಿ ಎತ್ತಿಹಿಡಿದು ಇತಿಹಾಸ ಬರೆದಿದೆ. ಭಾನುವಾರ (ಮಾರ್ಚ್ 09) ದುಬೈನಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ನಾಲ್ಕು ವಿಕೆಟ್‌ಗಳಿಂದ ಜಯಗಳಿಸಿತು. ಇದರೊಂದಿಗೆ 12 ವರ್ಷಗಳ ನಂತರ ಟೀಮ್ ಇಂಡಿಯಾ ಮತ್ತೆ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಂಡಿದೆ. ಇದರ ಬೆನ್ನಲ್ಲೇ ಪಾಕಿಸ್ತಾನದ ಮಾಜಿ ವೇಗಿ ಶೋಯೆಬ್ ಅಖ್ತರ್, ಟೀಮ್ ಇಂಡಿಯಾವನ್ನು ಅಭಿನಂದಿಸಿದ್ದಾರೆ. ಅಲ್ಲದೆ, ತಮ್ಮ ಪಾಕ್ ಕ್ರಿಕೆಟ್ ಮಂಡಳಿಯ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.
ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವಿನ ನಂತರ ಶೋಯೆಬ್ ಅಖ್ತರ್ ವಿಡಿಯೋ ಸಂದೇಶವನ್ನು ಬಿಡುಗಡೆ ಮಾಡಿದರು. ಅದರಲ್ಲಿ, ಭಾರತೀಯ ತಂಡದ ಗೆಲುವಿನ ಕುರಿತು ಅಖ್ತರ್ ಪ್ರಮುಖ ಕಾಮೆಂಟ್‌ಗಳನ್ನು ಮಾಡಿದ್ದಾರೆ. ಕಳೆದ 10 ವರ್ಷಗಳಲ್ಲಿ ಟೀಮ್ ಇಂಡಿಯಾ ಐಸಿಸಿ ಟೂರ್ನಮೆಂಟ್‌ಗಳಲ್ಲಿ ಅತ್ಯುತ್ತಮ ತಂಡವಾಗಿ ಹೊರಹೊಮ್ಮಿದೆ. ಕಳೆದ ವರ್ಷವೂ ಟಿ20 ವಿಶ್ವಕಪ್ ಗೆದ್ದಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಅದ್ಭುತಗಳನ್ನು ಮಾಡಿದೆ. ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮ ಅವರ ಬ್ಯಾಟಿಂಗ್ ಶೈಲಿ ಉತ್ತಮವಾಗಿತ್ತು. 2025 ರ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದಿದ್ದಕ್ಕಾಗಿ ಭಾರತ ತಂಡಕ್ಕೆ ಅಭಿನಂದನೆಗಳು. ಭಾರತ ತಂಡವು ಟೂರ್ನಿಯಲ್ಲಿ ಒಂದೇ ಒಂದು ಪಂದ್ಯವನ್ನು ಸೋತಿಲ್ಲ. ಈ ಚಾಂಪಿಯನ್ಸ್ ಟ್ರೋಫಿಗೆ ಟೀಮ್ ಇಂಡಿಯಾ ಅರ್ಹವಾಗಿದೆ ಎಂದು ಅಖ್ತರ್ ಹೇಳಿದ್ದಾರೆ.
ಇನ್ನೊಂದು ವಿಡಿಯೋದಲ್ಲಿ ಅಖ್ತರ್, ತಮ್ಮ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ನಡವಳಿಕೆಯನ್ನು ಟೀಕಿಸಿದ್ದಾರೆ. ಭಾರತ ತಂಡ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದಿದೆ. ಆದಾಗ್ಯೂ, ನಾನು ಇಲ್ಲಿ ಒಂದು ವಿಷಯವನ್ನು ಗಮನಿಸಿದೆ. ಪಾಕಿಸ್ತಾನ ಆತಿಥೇಯ ದೇಶ. ಆದರೆ, ಟ್ರೋಫಿ ಪ್ರದಾನ ಸಮಾರಂಭದಲ್ಲಿ ಪಾಕಿಸ್ತಾನದ ಪ್ರತಿನಿಧಿ ಇಲ್ಲದಿರುವುದು ಆಶ್ಚರ್ಯಕರವಾಗಿತ್ತು. ಈ ರೀತಿ ಏಕೆ ಮಾಡಿದರು ಎಂಬುದು ನನಗೆ ಅರ್ಥವಾಗುತ್ತಿಲ್ಲ. ಪಿಸಿಬಿಯಿಂದ ಯಾರೊಬ್ಬರು ಏಕೆ ಇಲ್ಲ? ನಾವು ಇದರ ಬಗ್ಗೆ ಯೋಚಿಸಲೇಬೇಕಿದೆ. ಇದು ಐಸಿಸಿ ಕಾರ್ಯಕ್ರಮ. ಆದರೆ ಪಿಸಿಬಿ ಸದಸ್ಯರಿಲ್ಲ. ಅದನ್ನು ನೋಡಲು ತುಂಬಾ ದುಃಖವಾಗುತ್ತದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ ಪ್ರತಿನಿಧಿಯನ್ನು ಏಕೆ ಕಳುಹಿಸಲಿಲ್ಲ? ಎಂದು ಅಖ್ತರ್ ಕೇಳಿದರು. ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ಪಾಕ್ ಕ್ರಿಕೆಟ್ ಮಂಡಳಿ ವಿರುದ್ಧ ಟೀಕೆಗಳು ಕೇಳಿಬರುತ್ತಿವೆ.
ಇನ್ನು ಪಂದ್ಯದ ವಿಚಾರಕ್ಕೆ ಬರುವುದಾದರೆ, ಎಂಟು ವರ್ಷಗಳ ಬಳಿಕ ಪುನರಾರಂಭಗೊಂಡ ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಯಲ್ಲಿ ಭಾರತ ತಂಡ ಅಜೇಯವಾಗಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ನಾಯಕ ರೋಹಿತ್ ಶರ್ಮ (76 ರನ್, 83 ಎಸೆತ, 7 ಬೌಂಡರಿ, 3 ಸಿಕ್ಸರ್) ಬಿರುಸಿನ ಆಟ ಹಾಗೂ ನಾಲ್ವರು ಸ್ಪಿನ್ನರ್‌ಗಳ ಬಿಗಿ ಬೌಲಿಂಗ್ ದಾಳಿಯ ನೆರವಿನಿಂದ ಭಾರತ ತಂಡ ಫೈನಲ್‌ನಲ್ಲಿ ನ್ಯೂಜಿಲೆಂಡ್ ಎದುರು 4 ವಿಕೆಟ್‌ಗಳ ರೋಚಕ ಗೆಲುವು ಒಲಿಸಿಕೊಂಡಿದೆ. ಇದರೊಂದಿಗೆ ರೋಹಿತ್ ಶರ್ಮ ಸಾರಥ್ಯದಲ್ಲಿ 12 ವರ್ಷಗಳ ಬಳಿಕ ಭಾರತ ತಂಡ ‘ಮಿನಿ ವಿಶ್ವಕಪ್’ ಗೆದ್ದುಕೊಂಡಿದೆ. ಒಟ್ಟಾರೆ ಮೂರನೇ ಬಾರಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ, ಈ ಸಾಧನೆ ಮಾಡಿದ ಮೊದಲ ತಂಡ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ಮುಖ್ಯ ಕೋಚ್ ಗೌತಮ್ ಗಂಭೀರ್ ಹಾಗೂ ರೋಹಿತ್ ಶರ್ಮ ಕಾಂಬಿನೇಷನ್‌ನಲ್ಲಿ ಗೆದ್ದ ಮೊದಲ ಐಸಿಸಿ ಟೂರ್ನಿ ಇದಾಗಿದೆ.
ದುಬೈ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪ್ರಶಸ್ತಿ ಕಾದಾಟದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಭಾರತೀಯ ಸ್ಪಿನ್ನರ್‌ಗಳ ಕಡಿವಾಣದ ನಡುವೆ ಬ್ಯಾಟರ್ ಡೆರಿಲ್ ಮಿಚೆಲ್ (63 ರನ್, 101 ಎಸೆತ, 3 ಬೌಂಡರಿ) ಹಾಗೂ ಮಿಚೆಲ್ ಬ್ರೇಸ್‌ವೆಲ್ (53* ರನ್, 40 ಎಸೆತ, 3 ಬೌಂಡರಿ, 2 ಸಿಕ್ಸರ್) ಅರ್ಧಶತಕಗಳ ನೆರವಿನಿಂದ ನ್ಯೂಜಿಲೆಂಡ್ 7 ವಿಕೆಟ್‌ಗೆ 251 ರನ್‌ಗಳ ಪೈಪೋಟಿಯುತ ಮೊತ್ತ ಕಲೆಹಾಕಿತು. ಪ್ರತಿಯಾಗಿ ರೋಹಿತ್ ಶರ್ಮ ಹಾಗೂ ಶುಭಮಾನ್ ಗಿಲ್ (31) ಒದಗಿಸಿದ ಬಿರುಸಿನ ಆರಂಭದ ನಡುವೆಯೂ 17 ರನ್‌ಗಳ ಅಂತರದಲ್ಲಿ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆಗ ಶ್ರೇಯಸ್ ಅಯ್ಯರ್ (48 ರನ್, 62 ಎಸೆತ, 2 ಬೌಂಡರಿ, 2 ಸಿಕ್ಸರ್) ಹಾಗೂ ಆಲ್ರೌಂಡರ್ ಅಕ್ಷರ್ ಪಟೇಲ್ (29) ಚೇಸಿಂಗ್ ಜೀವಂತವಿಟ್ಟರು. ಕೊನೆಯಲ್ಲಿ ಕನ್ನಡಿಗ ಕೆಎಲ್ ರಾಹುಲ್ (34* ರನ್, 33 ಎಸೆತ, 1 ಬೌಂಡರಿ, 1 ಸಿಕ್ಸರ್) ಉಪಯುಕ್ತ ಆಟದ ನೆರವಿನಿಂದ 49 ಓವರ್‌ಗಳಲ್ಲಿ 6 ವಿಕೆಟ್‌ಗೆ 254 ಭಾರತಕ್ಕೆ ಗೆಲುವು ತಂದುಕೊಟ್ಟರು. ಕೊನೆಯವರೆಗೂ ಪಂದ್ಯದಲ್ಲಿ ಹೋರಾಡಿದ ನ್ಯೂಜಿಲೆಂಡ್ ರನ್ನರ್ ಅಪ್‌ಗೆ ಸಮಾಧಾನ ಕಂಡಿದೆ.
ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದ ಭಾರತ ತಂಡ 2.24 ಮಿಲಿಯನ್ ಅಮೆರಿಕನ್ ಡಾಲರ್‌ಗಳನ್ನು ಬಹುಮಾನದ ಹಣವಾಗಿ ಪಡೆಯಲಿದೆ. ಇದು ಭಾರತೀಯ ಕರೆನ್ಸಿಯಲ್ಲಿ 19.52 ಕೋಟಿ ರೂಪಾಯಿ. ರನ್ನರ್ ಅಪ್ ತಂಡವು 1.12 ಮಿಲಿಯನ್ ಡಾಲರ್‌ಗಳನ್ನು ಪಡೆಯಲಿದೆ. ಇದು ಭಾರತೀಯ ಕರೆನ್ಸಿಯಲ್ಲಿ 9.76 ಕೋಟಿ ರೂಪಾಯಿ. ಸೆಮಿಫೈನಲ್‌ನಲ್ಲಿ ಸೋತ ಪ್ರತಿ ತಂಡವು 4.88 ಕೋಟಿ ರೂ. ಪಡೆಯಲಿದೆ. ಐದನೇ ಮತ್ತು ಆರನೇ ಸ್ಥಾನ ಪಡೆದ ತಂಡಗಳು ತಲಾ 3.05 ಕೋಟಿ ರೂ. ಮತ್ತು ಏಳನೇ ಮತ್ತು ಎಂಟನೇ ಸ್ಥಾನ ಪಡೆದ ತಂಡಗಳು 1.22 ಕೋಟಿ ರೂ. ಪಡೆಯಲಿವೆ. (ಏಜೆನ್ಸೀಸ್)