

Deepti Sharma : ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ದೀಪ್ತಿ ಶರ್ಮಾ ಅವರನ್ನು ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ) ಆಗಿ ನೇಮಿಸಲಾಗಿದೆ.
ಕ್ರೀಡೆಯಲ್ಲಿ ಭಾರತಕ್ಕೆ ನೀಡಿದ ಸೇವೆಗಾಗಿ ದೀಪ್ತಿ ಶರ್ಮಾ ಅವರನ್ನು ಡಿಎಸ್‌ಪಿಯಾಗಿ ನೇಮಕ ಮಾಡಲಾಗಿದೆ. ಇದರೊಂದಿಗೆ, ದೀಪ್ತಿ ಶರ್ಮಾ ಡಿಎಸ್‌ಪಿಯಾಗಿ ಅಧಿಕಾರ ವಹಿಸಿಕೊಂಡ ಎರಡನೇ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕೆಲವು ದಿನಗಳ ಹಿಂದೆ ಟೀಮ್ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರನ್ನು ತೆಲಂಗಾಣದಲ್ಲಿ ಡಿಎಸ್‌ಪಿಯಾಗಿ ನೇಮಿಸಲಾಯಿತು.
ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ದೀಪ್ತಿ ಶರ್ಮಾ ಅವರು ಕ್ರಿಕೆಟಿಗರಾಗಿ ದೇಶಕ್ಕೆ ನೀಡಿದ ಕೊಡುಗೆಗಾಗಿ ಜನವರಿ 27ರಂದು ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ) ಆಗಿ ನೇಮಿಸಲಾಯಿತು. ಜನವರಿ 29ರ ಬುಧವಾರ ಇನ್‌ಸ್ಟಾಗ್ರಾಮ್‌ನಲ್ಲಿ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ತಮಗೆ ನೀಡಿದ ಗೌರವಕ್ಕಾಗಿ ಉತ್ತರ ಪ್ರದೇಶ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದ್ದಾರೆ.
ಖಾಕಿ ಸಮವಸ್ತ್ರದಲ್ಲಿರುವ ತಮ್ಮ ಕೆಲವು ಚಿತ್ರಗಳನ್ನು ಹಂಚಿಕೊಂಡಿರುವ ದೀಪ್ತಿ ಶರ್ಮಾ, ಈ ಮಹಾನ್ ಮೈಲಿಗಲ್ಲು ಸಾಧಿಸಿದ್ದಕ್ಕಾಗಿ ನಾನು ನನ್ನ ಹೃದಯಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ನನಗೆ ಈ ಅವಕಾಶವನ್ನು ನೀಡಿದ್ದಕ್ಕಾಗಿ ಉತ್ತರ ಪ್ರದೇಶ ಸರ್ಕಾರಕ್ಕೂ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಉತ್ತರ ಪ್ರದೇಶ ಪೊಲೀಸ್ ಇಲಾಖೆಯಲ್ಲಿ ಡಿಎಸ್‌ಪಿಯಾಗಿ ಈ ಹೊಸ ಜವಾಬ್ದಾರಿಯನ್ನು ನಾನು ವಹಿಸಿಕೊಳ್ಳುತ್ತೇನೆ. ಪ್ರಾಮಾಣಿಕತೆ ಮತ್ತು ಸಮಗ್ರತೆಯಿಂದ ಸೇವೆ ಸಲ್ಲಿಸಲು ನಾನು ಸಂಪೂರ್ಣವಾಗಿ ಸಮರ್ಪಿತಳಾಗುತ್ತೇನೆಂದು ಬರೆದಿದ್ದಾರೆ. (ಏಜೆನ್ಸೀಸ್)