

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆಯಾಗಿದ್ದಾರೆ.
ಸ್ವತಃ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಖ್ಯ ಕಾರ್ಯದರ್ಶಿ ಜಯ್ ಷಾ ಅವರು ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿದ್ದು, ನೂತನ ಕೋಚ್ ಗೌತಮ್ ಗಂಭೀರ್ ಅವರಿಗೆ ಸ್ವಾಗತ ಎಂದು ಬರೆದುಕೊಂಡಿದ್ದಾರೆ.
ವೆಸ್ಟ್ ಇಂಡೀಸ್ ಮತ್ತು ಅಮೆರಿಕದ ಜಂಟಿ ಆತಿಥ್ಯದಲ್ಲಿ ನಡೆಯಲಿರುವ 2024ರ ಸಾಲಿನ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿ ಬಳಿಕ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಮುಗಿದಿದ್ದು, ಇದೀಗ ನೂತನ ಕೋಚ್ ಟೀಮ್ ಇಂಡಿಯಾಗೆ ಎರಡು ವಿಶ್ವಕಪ್ ಗೆದ್ದುಕೊಟ್ಟ ಆಟಗಾರ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡದ ಹಾಲಿ ಮೆಂಟರ್ ಗೌತಮ್ ಗಂಭೀರ್ ಆಯ್ಕೆಯಾಗಿದ್ದಾರೆ.
ಟೀಂ ಇಂಡಿಯಾದ ನೂತನ ಕೋಚ್ ಗೌತಮ್ ಗಂಭೀರ್ ಅವರನ್ನು ನಾನು ಹೃದಯಪೂರ್ವಕವಾಗಿ ಸ್ವಾಗತಿಸುತ್ತೇನೆ. ಆಧುನಿಕ ಕ್ರಿಕೆಟ್ ಬಹಳ ವೇಗವಾಗಿ ಬದಲಾಗುತ್ತಿದ್ದು ಗೌತಮ್ ಅವರು ಈ ಬದಲಾವಣೆಯನ್ನು ಬಹಳ ಹತ್ತಿರದಿಂದ ಗಮನಿಸಿದ್ದಾರೆ. ತಮ್ಮ ವೃತ್ತಿಜೀವನದುದ್ದಕ್ಕೂ ಹಲವು ಪಾತ್ರಗಳನ್ನು ನಿರ್ವಹಿಸಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಹೀಗಾಗಿ ಟೀಂ ಇಂಡಿಯಾವನ್ನು ಮುನ್ನಡೆಸಲು ಅವರು ಸೂಕ್ತ ವ್ಯಕ್ತಿಯಾಗಿದ್ದಾರೆ ಎಂಬ ವಿಶ್ವಾಸ ನನಗಿದೆ. ಹೊಸ ಪ್ರಯಾಣವನ್ನು ಪ್ರಾರಂಭಿಸುತ್ತಿರುವ ಗೌತಮ್ ಗಂಭೀರ್ ಅವರಿಗೆ ಬಿಸಿಸಿಐ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು (ಬಿಸಿಸಿಐ) ಮುಖ್ಯ ಕಾರ್ಯದರ್ಶಿ ಜಯ್ ಷಾ ಅವರು ಎಕ್ಸ್‌ನಲ್ಲಿ ತಿಳಿಸಿದ್ದಾರೆ.
ಅಂದಹಾಗೆ ಭಾರತ ತಂಡದ ಭವಿಷ್ಯದ ಮುಖ್ಯ ಕೋಚ್ ರೇಸ್‌ನಲ್ಲಿ ಮಾಜಿ ಕ್ರಿಕೆಟಿಗರಾದ ವಿವಿಎಸ್ ಲಕ್ಷ್ಮಣ್, ನ್ಯೂಜಿಲೆಂಡ್‌ನ ಸ್ಟೀಫನ್ ಫ್ಲೆಮಿಂಗ್ ಮತ್ತು ಆಸ್ಟ್ರೇಲಿಯಾದ ಟಾಮ್ ಮೂಡಿ ಮತ್ತು ಜಸ್ಟಿನ್ ಲ್ಯಾಂಗರ್ ಅವರ ಹೆಸರು ಮುಂಚೂಣಿಯಲ್ಲಿ ಇತ್ತು. ಇದೀಗ ಇತ್ತೀಚಿನ ಬೆಳವಣಿಗೆ ಎಂಬಂತೆ ಕೋಚ್ ಸ್ಥಾನಕ್ಕೆ ಗೌತಮ್ ಗಂಭೀರ್ ಹೆಸರನ್ನು ಅಂತಿಮಗೊಳಿಸಿದೆ.