ಬೆಂಗಳೂರನ್ನು ಪ್ರಮುಖ ಬಾಸ್ಕೆಟ್‌ಬಾಲ್ ಕ್ರೀಡಾ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಸರ್ಕಾರ ಬದ್ಧ: ಡಾ. ಜಿ. ಪರಮೇಶ್ವರ

ಅಕ್ಟೋಬರ್ 20ರಿಂದ 25ರವರೆಗೆ ಬೆಂಗಳೂರಿನಲ್ಲಿ ಫಿಬಾ ಮಹಿಳಾ ಬಾಸ್ಕೆಟ್‌ಬಾಲ್ ಲೀಗ್ ಏಷ್ಯಾ–2026 ಆಯೋಜನೆ
basketball
ಡಾ. ಜಿ. ಪರಮೇಶ್ವರ, ಡಾ.‌ ಕೆ.ಗೋವಿಂದರಾಜು, ಬಿ.ದಯಾನಂದ್,
Published on: 

ಬೆಂಗಳೂರು: ಬೆಂಗಳೂರನ್ನು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಪ್ರಮುಖ ಬಾಸ್ಕೆಟ್‌ಬಾಲ್ ಕ್ರೀಡಾ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ನಮ್ಮ ಸರ್ಕಾರ ಬದ್ಧವಾಗಿದ್ದು, ಕ್ರೀಡೆಯ ಉತ್ತೇಜನಕ್ಕೆ ಅಗತ್ಯವಿರುವ ಎಲ್ಲ ರೀತಿಯ ಸಹಕಾರವನ್ನು ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ಜಿ. ಪರಮೇಶ್ವರ ಅವರು ತಿಳಿಸಿದರು.

ಸೋಮವಾರ ಬೆಂಗಳೂರಿನ ಕರ್ನಾಟಕ ಒಲಿಂಪಿಕ್ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಅಕ್ಟೋಬರ್ 20ರಿಂದ 25ರವರೆಗೆ ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಪ್ರತಿಷ್ಠಿತ ‘ಫಿಬಾ ಮಹಿಳಾ ಬಾಸ್ಕೆಟ್‌ಬಾಲ್ ಲೀಗ್ ಏಷ್ಯಾ–2026’ ಅಂತಾರಾಷ್ಟ್ರೀಯ ಪಂದ್ಯಾವಳಿ ನಡೆಯಲಿದೆ. ಏಷ್ಯಾದ ಆರು ಪ್ರಮುಖ ಮಹಿಳಾ ಬಾಸ್ಕೆಟ್‌ಬಾಲ್ ಕ್ಲಬ್ ತಂಡಗಳು ಈ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಲಿವೆ ಎಂದು ಹೇಳಿದರು.

ಕರ್ನಾಟಕ ರಾಜ್ಯ ಬಾಸ್ಕೆಟ್‌ಬಾಲ್ ಸಂಸ್ಥೆಯು (KSBA), ಭಾರತೀಯ ಬಾಸ್ಕೆಟ್‌ಬಾಲ್ ಒಕ್ಕೂಟದ (BFI) ಆಶ್ರಯದಲ್ಲಿ, ರಾಜ್ಯ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಅಂತಾರಾಷ್ಟ್ರೀಯ ಬಾಸ್ಕೆಟ್‌ಬಾಲ್ ಒಕ್ಕೂಟದ (FIBA) ಬೆಂಬಲದೊಂದಿಗೆ ಈ ಪಂದ್ಯಾವಳಿಯನ್ನು ಆಯೋಜಿಸುತ್ತಿದೆ ಎಂದು ತಿಳಿಸಿದರು.

ಫಿಬಾ ಮಹಿಳಾ ಬಾಸ್ಕೆಟ್‌ಬಾಲ್ ಲೀಗ್ ಏಷ್ಯಾ–2026 ಪಂದ್ಯಾವಳಿಯನ್ನು ಬೆಂಗಳೂರಿನಲ್ಲಿ ಆಯೋಜಿಸುತ್ತಿರುವುದು ಕರ್ನಾಟಕಕ್ಕೆ ಹೆಮ್ಮೆಯ ಸಂಗತಿಯಾಗಿದೆ. ಕ್ರೀಡೆಗೆ ಉತ್ತೇಜನ ನೀಡುವುದು ಹಾಗೂ ನಮ್ಮ ಕ್ರೀಡಾಪಟುಗಳಿಗೆ ಅತ್ಯುನ್ನತ ಮಟ್ಟದಲ್ಲಿ ಸ್ಪರ್ಧಿಸುವ ಅವಕಾಶಗಳನ್ನು ಕಲ್ಪಿಸುವ ಸರ್ಕಾರದ ಬದ್ಧತೆಗೆ ಈ ಪಂದ್ಯಾವಳಿ ಸಾಕ್ಷಿಯಾಗಲಿದೆ ಎಂದು ಹೇಳಿದರು.

ಈ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪಂದ್ಯಾವಳಿಯನ್ನು ಬೆಂಗಳೂರಿಗೆ ತರುವಲ್ಲಿ ವಿಶೇಷ ಪ್ರಯತ್ನ ನಡೆಸಿದ ಫಿಬಾ ಏಷ್ಯಾ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಬಾಸ್ಕೆಟ್‌ಬಾಲ್ ಸಂಸ್ಥೆಯ ಕಾರ್ಯದರ್ಶಿ ಡಾ. ಕೆ. ಗೋವಿಂದರಾಜ್ ಅವರಿಗೆ ಕೃತಜ್ಞತೆ ಸಲ್ಲಿಸಿದರು.

ಕ್ರೀಡಾಭಿಮಾನಿ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪರವಾಗಿ ಡಾ. ಕೆ. ಗೋವಿಂದರಾಜ್ ಅವರಿಗೆ ಅಭಿನಂದನೆ ಸಲ್ಲಿಸಿದ ಅವರು, ಗೋವಿಂದರಾಜು ಅವರ ವಿಶೇಷ ಆಸಕ್ತಿ ಹಾಗೂ ಪ್ರಯತ್ನದಿಂದ ಬೆಂಗಳೂರಿಗೆ ಈ ಮಹತ್ವದ ಅಂತಾರಾಷ್ಟ್ರೀಯ ಪಂದ್ಯಾವಳಿಯ ಆತಿಥ್ಯ ವಹಿಸುವ ಅವಕಾಶ ದೊರೆತಿದೆ ಎಂದು ತಿಳಿಸಿದರು.

ಈ ಹಿಂದೆಯೂ ಬೆಂಗಳೂರಿನಲ್ಲಿ ಆಹ್ವಾನಿತ ತಂಡಗಳ ಚಾಂಪಿಯನ್‌ಶಿಪ್ ಸೇರಿದಂತೆ ಹಲವು ಬಾಸ್ಕೆಟ್‌ಬಾಲ್ ಪಂದ್ಯಾವಳಿಗಳನ್ನು ಆಯೋಜಿಸಲಾಗಿದೆ. ಇದೀಗ ನಡೆಯಲಿರುವ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪಂದ್ಯಾವಳಿಯು ಪ್ರಮುಖ ಕ್ರೀಡಾ ತಾಣವಾಗಿ ಬೆಂಗಳೂರಿನ ಸ್ಥಾನವನ್ನು ಮತ್ತಷ್ಟು ಬಲಪಡಿಸಲಿದೆ ಎಂದು ಅಭಿಪ್ರಾಯಪಟ್ಟರು.

ಈ ಚಾಂಪಿಯನ್‌ಶಿಪ್‌ನಲ್ಲಿ ಜಪಾನ್‌ನ ಡೆನ್ಸೊ ಐರಿಸ್ (Denso Iris), ದಕ್ಷಿಣ ಕೊರಿಯಾದ ಚಿಯಾಂಗ್ಜು ಕೆಬಿ ಸ್ಟಾರ್ಸ್ (Cheongju KB Stars), ಚೀನಾದ ಸಿಚುವಾನ್ ಯುವಾಂಡಾ ಮೈಲೆ (Sichuan Yuanda Meile), ಫಿಲಿಪ್ಪೀನ್ಸ್‌ನ ಅಕಾರಿ ಸ್ಪಾರ್ಕ್ಸ್ (Akari Sparks), ಚೈನೀಸ್ ತೈಪೆಯ ಕ್ಯಾಥೆ ಲೈಫ್ ಟೈಗರ್ಸ್ (Cathay Life Tigers) ಹಾಗೂ ರಾಷ್ಟ್ರೀಯ ಚಾಂಪಿಯನ್ ಭಾರತೀಯ ರೈಲ್ವೇಸ್‌ (Indian Railways) ತಂಡಗಳು ಭಾಗವಹಿಸಲಿವೆ ಎಂದು ತಿಳಿಸಿದರು.

ಪಂದ್ಯಾವಳಿಯ ವಿಶೇಷತೆಯ ಕುರಿತು ಮಾತನಾಡಿದ ಡಾ. ಜಿ. ಪರಮೇಶ್ವರ ಅವರು, ಭಾಗವಹಿಸುವ ಪ್ರತಿಯೊಂದು ತಂಡದಲ್ಲಿಯೂ ಇಬ್ಬರು ಅಮೆರಿಕದ ಆಟಗಾರ್ತಿಯರು ಇರಲಿದ್ದು, ಎನ್‌ಬಿಎ (NBA) ಆಟಗಾರ್ತಿಯರೂ ಈ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು. ಅಂತಾರಾಷ್ಟ್ರೀಯ ಮಟ್ಟದ ಅನುಭವಿ ಆಟಗಾರ್ತಿಯರ ಉಪಸ್ಥಿತಿಯು ಬಾಸ್ಕೆಟ್‌ಬಾಲ್ ಕ್ರೀಡಾಭಿಮಾನಿಗಳು ಹಾಗೂ ಯುವ ಕ್ರೀಡಾಪಟುಗಳಿಗೆ ವಿಶೇಷ ಆಕರ್ಷಣೆಯಾಗಲಿದೆ ಎಂದು ತಿಳಿಸಿದರು.

ಭಾರತದ ಮಹಿಳಾ ಬಾಸ್ಕೆಟ್‌ಬಾಲ್ ಕ್ರೀಡೆಗೆ ಉತ್ತಮ ಅವಕಾಶ

ಈ ಅಂತಾರಾಷ್ಟ್ರೀಯ ಚಾಂಪಿಯನ್‌ಶಿಪ್ ಕರ್ನಾಟಕ ಸೇರಿದಂತೆ ದೇಶದ ಯುವ ಬಾಸ್ಕೆಟ್‌ಬಾಲ್ ಕ್ರೀಡಾಪಟುಗಳಿಗೆ ಉತ್ತಮ ಅವಕಾಶವಾಗಲಿದೆ. ವಿಶ್ವದರ್ಜೆಯ ಆಟಗಾರ್ತಿಯರ ಆಟವನ್ನು ನೇರವಾಗಿ ವೀಕ್ಷಿಸಿ, ಅವರ ಕೌಶಲ್ಯ, ಆಟದ ತಂತ್ರಗಳು ಹಾಗೂ ಸ್ಪರ್ಧಾತ್ಮಕ ಮನೋಭಾವವನ್ನು ಅರಿತುಕೊಳ್ಳಲು ಸಾಧ್ಯವಾಗಲಿದೆ ಎಂದು ಡಾ. ಜಿ. ಪರಮೇಶ್ವರ ಅವರು ಹೇಳಿದರು.

ವಿಶೇಷವಾಗಿ ದೇಶದಲ್ಲಿ ಮತ್ತು ಕರ್ನಾಟಕದಲ್ಲಿ ಮಹಿಳಾ ಬಾಸ್ಕೆಟ್‌ಬಾಲ್ ಕ್ರೀಡೆಯನ್ನು ಉತ್ತೇಜಿಸಲು ಈ ಪಂದ್ಯಾವಳಿ ಮಹತ್ವದ ಪಾತ್ರ ವಹಿಸಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಯುವತಿಯರು ಬಾಸ್ಕೆಟ್‌ಬಾಲ್ ಕ್ರೀಡೆಯನ್ನು ಗಂಭೀರವಾಗಿ ಪರಿಗಣಿಸಿ, ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಈ ಚಾಂಪಿಯನ್‌ಶಿಪ್ ಸ್ಫೂರ್ತಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ಭಾರತೀಯ ರೈಲ್ವೇಸ್‌ ತಂಡದ ಭಾಗವಹಿಸುವಿಕೆಯನ್ನು ವಿಶೇಷವಾಗಿ ಪ್ರಸ್ತಾಪಿಸಿದ ಅವರು, ಭಾರತದ ರಾಷ್ಟ್ರೀಯ ಚಾಂಪಿಯನ್ ತಂಡವಾಗಿರುವ ರೈಲ್ವೆಗೆ ಏಷ್ಯಾದ ಬಲಿಷ್ಠ ಕ್ಲಬ್ ತಂಡಗಳ ವಿರುದ್ಧ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಸ್ಪರ್ಧಿಸುವ ಅಪರೂಪದ ಅವಕಾಶ ದೊರೆತಿದೆ ಎಂದು ತಿಳಿಸಿದರು.

ಸಾಮಾನ್ಯವಾಗಿ ನಮ್ಮ ತಂಡಗಳಿಗೆ ಅಂತಾರಾಷ್ಟ್ರೀಯ ಚಾಂಪಿಯನ್‌ಶಿಪ್‌ಗಳಲ್ಲಿ ಭಾಗವಹಿಸುವ ಅವಕಾಶಗಳು ಸುಲಭವಾಗಿ ದೊರೆಯುವುದಿಲ್ಲ. ಈ ಪಂದ್ಯಾವಳಿಯ ಮೂಲಕ ಭಾರತೀಯ ರೈಲ್ವೆ ತಂಡಕ್ಕೆ ಅಂತಹ ಅವಕಾಶ ಲಭಿಸಿದ್ದು, ನಮ್ಮ ಆಟಗಾರ್ತಿಯರು ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಯ ಅನುಭವ ಪಡೆಯಲು ಸಹಕಾರಿಯಾಗಲಿದೆ ಎಂದು ಹೇಳಿದರು.

ಬಾಸ್ಕೆಟ್‌ಬಾಲ್ ಕ್ರೀಡೆಯ ಅಭಿವೃದ್ಧಿಗೆ ಸರ್ಕಾರದ ನಿರಂತರ ಬೆಂಬಲ

ಈ ಅಂತಾರಾಷ್ಟ್ರೀಯ ಪಂದ್ಯಾವಳಿಯ ಆಯೋಜನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಬಲ ನೀಡಿದ್ದಾರೆ. ಮುಂದಿನ ದಿನಗಳಲ್ಲಿಯೂ ಇಂತಹ ಪ್ರಮುಖ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಿಗೆ ಕರ್ನಾಟಕ ಸರ್ಕಾರ ಅಗತ್ಯ ಸಹಕಾರ ನೀಡಲಿದೆ ಎಂದು ಡಾ. ಜಿ. ಪರಮೇಶ್ವರ ಅವರು ಭರವಸೆ ನೀಡಿದರು.

ಕರ್ನಾಟಕವನ್ನು ದೇಶದ ಪ್ರಮುಖ ಬಾಸ್ಕೆಟ್‌ಬಾಲ್ ಕ್ರೀಡಾ ಕೇಂದ್ರವನ್ನಾಗಿ ರೂಪಿಸುವುದು ಸರ್ಕಾರದ ಉದ್ದೇಶವಾಗಿದೆ. ಅದರಲ್ಲಿಯೂ ಬೆಂಗಳೂರನ್ನು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಪ್ರಮುಖ ಬಾಸ್ಕೆಟ್‌ಬಾಲ್ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಕೈಗೊಳ್ಳುವ ಎಲ್ಲ ಪ್ರಯತ್ನಗಳಿಗೆ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ತಿಳಿಸಿದರು.

ಆರು ದಿನಗಳ ಕಾಲ ನಡೆಯಲಿರುವ ಈ ಪ್ರತಿಷ್ಠಿತ ಪಂದ್ಯಾವಳಿಯಲ್ಲಿ ಭಾಗವಹಿಸಲು ಕರ್ನಾಟಕಕ್ಕೆ ಆಗಮಿಸುತ್ತಿರುವ ಎಲ್ಲ ತಂಡಗಳನ್ನು ಸ್ವಾಗತಿಸಿದ ಅವರು, ಕ್ರೀಡಾ ಶ್ರೇಷ್ಠತೆ, ಮಹಿಳಾ ಬಾಸ್ಕೆಟ್‌ಬಾಲ್ ಹಾಗೂ ಅಂತಾರಾಷ್ಟ್ರೀಯ ಸ್ಪರ್ಧಾತ್ಮಕತೆಯನ್ನು ಸಂಭ್ರಮಿಸುವ ಸ್ಮರಣೀಯ ಕ್ರೀಡಾಕೂಟವಾಗಿ ಈ ಚಾಂಪಿಯನ್‌ಶಿಪ್ ಮೂಡಿಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

14 ಜಿಲ್ಲೆಗಳಲ್ಲಿ ಸಿಂಥೆಟಿಕ್‌ ಟ್ರ್ಯಾಕ್‌

ರಾಜ್ಯದಲ್ಲಿ ಕ್ರೀಡಾ ಚಟುವಟಿಕೆಗಳನ್ನು ಉತ್ತೇಜಿಸುವುದರ ಜೊತೆಗೆ ಕ್ರೀಡಾಪಟುಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಲು ಸರ್ಕಾರ ನಿರಂತರವಾಗಿ ಪ್ರಯತ್ನಿಸುತ್ತಿದೆ. ನಾನೂ ಹಿಂದೆ ಕ್ರೀಡಾಪಟುವಾಗಿದ್ದವನು. ಇಂದು ರಾಜ್ಯದ ಕ್ರೀಡಾ ಸಚಿವನಾಗಿ ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವುದು ಹಾಗೂ ಅವರ ಪ್ರತಿಭೆಯನ್ನು ಪ್ರೋತ್ಸಾಹಿಸುವುದು ನನ್ನ ಪ್ರಮುಖ ಆದ್ಯತೆಯಾಗಿದೆ. ರಾಜ್ಯದ ಎಲ್ಲ ಭಾಗಗಳಲ್ಲಿಯೂ ಕ್ರೀಡಾ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದರು.

ರಾಜ್ಯದ ಸುಮಾರು 14 ಜಿಲ್ಲೆಗಳಲ್ಲಿ ಕ್ರೀಡಾಂಗಣಗಳಲ್ಲಿ ಸಿಂಥೆಟಿಕ್ ಟ್ರ್ಯಾಕ್‌ಗಳನ್ನು ನಿರ್ಮಿಸಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಜಿಲ್ಲೆಗಳಿಗೆ ಈ ಸೌಲಭ್ಯವನ್ನು ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು. ಕ್ರೀಡಾಂಗಣಗಳ ಅಭಿವೃದ್ಧಿಯ ಜೊತೆಗೆ ವೈಯಕ್ತಿಕ ಕ್ರೀಡಾಪಟುಗಳಿಗೂ ಅಗತ್ಯ ಪ್ರೋತ್ಸಾಹ ಹಾಗೂ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದರು.

ಇತ್ತೀಚೆಗೆ ಏಷ್ಯನ್ ಗೇಮ್ಸ್ ನಲ್ಲಿ 85 ಜನ ಕ್ರೀಡಾಪಟುಗಳು ಪದಕಗಳನ್ನು ಪಡೆದು ರಾಷ್ಟ್ರಕ್ಕೆ ಕೀರ್ತಿ ತಂದಿದ್ದಾರೆ. ಅದರಲ್ಲಿ ಕರ್ನಾಟಕದ 8 ಜನ ವಿವಿಧ ಕ್ರೀಡೆಗಳಲ್ಲಿ ಪದಕಗಳನ್ನು ಪಡೆದಿದ್ದಾರೆ‌. ಎಲ್ಲಾ ಕ್ರೀಡಾಪಟುಗಳ ಸಾಧನೆ ಶ್ಲಾಘನೀಯವಾಗಿದೆ ಎಂದ ಅವರು ಪದಕ ವಿಜೇತ ಸಾಧಕರಿಗೆ ಅಭಿನಂದನೆ ಸಲ್ಲಿಸಿದರು.

ಕ್ರೀಡಾಪಟುಗಳ ಸಾಧನೆಗೆ ಪೂರಕವಾದ ತರಬೇತಿ, ಮೂಲಸೌಕರ್ಯ ಹಾಗೂ ವೈಯಕ್ತಿಕ ಪ್ರೋತ್ಸಾಹ ನೀಡುವ ಮೂಲಕ ಕರ್ನಾಟಕದಲ್ಲಿ ಕ್ರೀಡಾ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಸರ್ಕಾರ ಪ್ರಯತ್ನಿಸಲಿದೆ ಎಂದು ಹೇಳಿದರು.

ಕರ್ನಾಟಕದಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಮಾಧ್ಯಮಗಳು ಹಾಗೂ ಸಾರ್ವಜನಿಕರು ನಿರಂತರವಾಗಿ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಈ ಅಂತಾರಾಷ್ಟ್ರೀಯ ಪಂದ್ಯಾವಳಿಯ ಯಶಸ್ಸಿಗೂ ಮಾಧ್ಯಮಗಳ ಸಹಕಾರ ಅತ್ಯಂತ ಮುಖ್ಯವಾಗಿದೆ ಎಂದು ಡಾ. ಜಿ. ಪರಮೇಶ್ವರ ಅವರು ಹೇಳಿದರು.

ಈ ಸಂದರ್ಭದಲ್ಲಿ ಫಿಬಾ ಏಷ್ಯಾ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯ ಡಾ.‌ ಕೆ.ಗೋವಿಂದರಾಜು, ಕರ್ನಾಟಕ ರಾಜ್ಯ ಬ್ಯಾಸ್ಕೆಟ್‌ಬಾಲ್ ಸಂಸ್ಥೆಯ ಅಧ್ಯಕ್ಷ ಬಿ.ದಯಾನಂದ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಆಯುಕ್ತ ಎಂ.ಎನ್.ಅನುಚೇತ್ ಅವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net