ಏಕದಿನ ವಿಶ್ವಕಪ್‌ಗೆ ಬುಮ್ರಾ ಫಿಟ್: ಐರ್ಲೆಂಡ್ ಪ್ರವಾಸಕ್ಕೆಆಯ್ಕೆ ?

bumrha
Published on

ನವದೆಹಲಿ: ಬೆನ್ನು ನೋವಿನ ಸಮಸ್ಯೆಯಿಂದಾಗಿ ಕಳೆದ ವರ್ಷ ಸೆಪ್ಟೆಂಬರ್‌ನಿಂದ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರವುಳಿದಿರುವ ಜಸ್‌ಪ್ರೀತ್ ಬುಮ್ರಾ ಅವರನ್ನು ಐಸಿಸಿ ಏಕದಿನ ವಿಶ್ವಕಪ್ ವೇಳೆಗೆ ತಂಡಕ್ಕೆ ಕರೆತರಲು ಬಿಸಿಸಿಐ ಗಮನಹರಿಸಿದೆ.

ಪ್ರಸ್ತುತ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ಪುನಶ್ಚೇತನ ಶಿಬಿರದಲ್ಲಿರುವ ಟೀಮ್ ಇಂಡಿಯಾ ವೇಗಿ ಗಾಯದ ಸಮಸ್ಯೆಯಿಂದ ಚೇತರಿಸಿಕೊಳ್ಳುತ್ತಿದ್ದು ಬೌಲಿಂಗ್ ಅಭ್ಯಾಸ ಆರಂಭಿಸಿದ್ದಾರೆ. ಏಷ್ಯಾಕಪ್‌ಗೆ ಪೂರ್ವಭಾವಿ ಎನಿಸಿರುವ ಐರ್ಲೆಂಡ್ ವಿರುದ್ಧ 3 ಪಂದ್ಯಗಳ ಟಿ20 ಸರಣಿಗೆ ಬುಮ್ರಾ, ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುವ ಸಾಧ್ಯತೆಗಳಿವೆ. ಸದ್ಯ ಶೇ 70 ರಷ್ಟು ಫಿಟ್ನೆಸ್ ಕಾಯ್ದುಕೊಂಡಿರುವ ಬುಮ್ರಾ, 100ರಷ್ಟು ಫಿಟ್ ಎನಿಸಿದರೆ ಮಾತ್ರ ಐರ್ಲೆಂಡ್ ವಿರುದ್ಧದ ಸರಣಿಯಲ್ಲಿ ಕಣಕ್ಕಿಳಿಯಲಿದ್ದಾರೆ.

ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ದೃಷ್ಟಿಯಿಂದ ಬುಮ್ರಾ ಅವರ ಫಿಟ್ನೆಸ್ ವಿಷಯದಲ್ಲಿ ಅವಸರದ ನಿರ್ಧಾರ ತೆಗೆದುಕೊಳ್ಳಲು ನಿರ್ಧರಿಸಿರುವ ರಾಷ್ಟ್ರೀಯ ತಂಡದ ಆಯ್ಕೆಗಾರರು, ಸದ್ಯ ಎನ್‌ಸಿಎ ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದಾರೆ. ಬುಮ್ರಾ ಅವರ ಫಿಟ್ನೆಸ್ ಹಾಗೂ ಕಾರ್ಯದೋತ್ತಡ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಮಾರ್ಚ್‌ನಲ್ಲಿ ನ್ಯೂಜಿಲೆಂಡ್‌ನಲ್ಲಿ ಜಸ್‌ಪ್ರೀತ್ ಬುಮ್ರಾ ಶಸಚಿಕಿತ್ಸೆಗೆ ಒಳಗಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net