

ಲಂಡನ್: ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಬಲ ಮೊಣಕೈ ನೋವಿನಿಂದಾಗಿ ಮುಂಬರುವ ಐಪಿಎಲ್ನಿಂದ ಹೊರಬಿದ್ದಿದ್ದಾರೆ. ಇದರಿಂದ ಟೂರ್ನಿಯ ಆರಂಭಕ್ಕೂ ಮುನ್ನವೇ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಭಾರಿ ಹಿನ್ನಡೆಯುಂಟಾಗಿದೆ.
ಜೋಫ್ರಾ ಆರ್ಚರ್ ಗಾಯದಿಂದಾಗಿ ಮುಂದಿನ ಮೂರು ತಿಂಗಳ ಕಾಲ ವಿಶ್ರಾಂತಿ ಪಡೆಯಲಿದ್ದು, ಮುಂಬರುವ ಶ್ರೀಲಂಕಾ ಪ್ರವಾಸದಿಂದಲೂ ಹೊರಗುಳಿಯಲಿದ್ದಾರೆ ಎಂದು ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ತಿಳಿಸಿದೆ. ಬಾರ್ಬಡೋಸ್ ಮೂಲದ 24 ವರ್ಷದ ಆರ್ಚರ್ ಕಳೆದ ಡಿಸೆಂಬರ್ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡಿದ್ದರು.
ಜೂನ್ನಲ್ಲಿ ವೆಸ್ಟ್ ಇಂಡೀಸ್ ಎದುರು ನಡೆಯಲಿರುವ 3 ಟೆಸ್ಟ್ ಪಂದ್ಯಗಳ ಸರಣಿಗೂ ಮುನ್ನ ಆರ್ಚರ್ ಫಿಟ್ ಆಗಲಿದ್ದಾರೆ ಎಂದು ಇಸಿಬಿ ಹೇಳಿದೆ. 21 ಐಪಿಎಲ್ ಪಂದ್ಯಗಳನ್ನಾಡಿರುವ ಆರ್ಚರ್, 26 ವಿಕೆಟ್ ಕಬಳಿಸಿದ್ದಾರೆ.