

ನವದೆಹಲಿ: 17ನೇ ಆವೃತ್ತಿಯಲ್ಲಿ ಐಪಿಎಲ್ ಟೂರ್ನಿಯಲ್ಲಿ ಸತತ ಸೋಲು ಹಾಗೂ ದಂಡದಿಂದ ಕಂಗೆಟ್ಟಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು ಗಾಯದ ಸಮಸ್ಯೆಯಿಂದ ತಂಡದ ಪ್ರಮುಖ ಆಟಗಾರರೊಬ್ಬರು ಹೊರಗುಳಿದಿದ್ದಾರ ಎಂದು ತಿಳಿದು ಬಂದಿದೆ.
ಹಾಲಿ ಆವೃತ್ತಿಯಲ್ಲಿ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಗಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಗಾಯದ ಸಮಸ್ಯೆ ಮತ್ತೊಂದು ಹೊಡೆತ ನೀಡಿದ್ದು, ಗಾಯಗ ಸಮಸ್ಯೆಯಿಂದ ಬಳಲುತ್ತಿರುವ ಆಟಗಾರ ಮೊದಲಾರ್ಧದ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರಮುಖ ಸ್ಪಿನ್ನರ್ ಕುಲ್ದೀಪ್ ಯಾದವ್ ತೊಡೆಸಂಧು ಗಾಯದಿಂದ ಬಳಲುತ್ತಿದ್ದು, ವೈದ್ಯರು ಹೆಚ್ಚಿನ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ. ಹೀಗಾಗಿ ಕುಲ್ದೀಪ್ ಟೂರ್ನಿಯ ಮೊದಲಾರ್ಧದ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ತಿಳಿದು ಬಂದಿದೆ. ಇದೇ ಕಾರಣಕ್ಕೆ ಕುಲ್ದೀಪ್ ಕಲ್ಕತ್ತಾ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ ಎಂದು ವರದಿಯಾಗಿದೆ.
ಗಾಯದಿಂದ ಬಳಲುತ್ತಿರುವ ಕುಲ್ದೀಪ್ ಯಾದವ್ ಪುನಶ್ಚೇತನಕ್ಕಾಗಿ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (NCA) ತೆರಳುವ ಸಾಧ್ಯತೆಯಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಕುಲ್ದೀಪ್ ಯಾದವ್ ಮತ್ತೆ ಕಣಕ್ಕಿಳಿಯಬೇಕಿದ್ದರೆ ಎನ್ಸಿಎ ಕಡೆಯಿಂದ ಫಿಟ್ನೆಸ್ ಸರ್ಟಿಫಿಕೇಟ್ ಪಡೆಯಬೇಕಾಗುತ್ತದೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಪಿನ್ನರ್ ಮೊದಲಾರ್ಧದ ಪಂದ್ಯಗಳಿಗೆ ಅಲಭ್ಯರಾಗುವುದು ಬಹುತೇಕ ಖಚಿತ ಎನ್ನಲಾಗಿದೆ.
ಈ ಬಾರಿಯ ಐಪಿಎಲ್ನಲ್ಲಿ ಇದುವರೆಗೆ 4 ಪಂದ್ಯಗಳನ್ನಾಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕೇವಲ 1 ಮ್ಯಾಚ್ನಲ್ಲಿ ಮಾತ್ರ ಜಯ ಸಾಧಿಸಿದೆ. ಇದೀಗ ಮೂರು ಸೋಲುಗಳೊಂದಿಗೆ ಅಂಕ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿರುವ ರಿಷಭ್ ಪಂತ್ ಪಡೆಗೆ ಕುಲ್ದೀಪ್ ಯಾದವ್ ಅನುಪಸ್ಥಿತಿ ದೊಡ್ಡ ತಲೆನೋವಾಗಿ ಪರಿಣಮಿಸಿದೆ.