

ಜೋಹಾನ್ಸ್‌ಬರ್ಗ್: ದಕ್ಷಿಣ ಆಫ್ರಿಕಾದ ವಿಕೆಟ್ ಕೀಪರ್-ಬ್ಯಾಟರ್ ಕ್ವಿಂಟನ್ ಡಿ ಕಾಕ್ ಭಾರತದಲ್ಲಿ ನಡೆಯಲಿರುವ ಮುಂಬರುವ ವಿಶ್ವಕಪ್ ಟೂರ್ನಿಯ ಬಳಿಕ ಏಕದಿನ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲಿದ್ದಾರೆ. ಡಿ ಕಾಕ್ ನಿವೃತ್ತಿಯ ಬಗ್ಗೆ ಕ್ರಿಕೆಟ್ ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ ‘ಎಕ್ಸ್’ ನಲ್ಲಿ ಖಚಿತಪಡಿಸಿದೆ.
ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯಲು ಬಯಸಿರುವ 30 ವರ್ಷದ ಕ್ವಿಂಟನ್ ಡಿ ಕಾಕ್, 2021ರ ಡಿಸೆಂಬರ್‌ನಲ್ಲಿ ಟೆಸ್ಟ್ ಕ್ರಿಕೆಟ್‌ಗೆ ದಿಢೀರ್ ವಿದಾಯ ಘೋಷಿಸಿದ್ದರು.
ವಿಕೆಟ್ ಕೀಪರ್- ಬ್ಯಾಟರ್ ಕ್ವಿಂಟನ್ ಡಿ ಕಾಕ್ ಐಸಿಸಿ ಟೂರ್ನಿಯ ಬಳಿಕ ಏಕದಿನ ಮಾದರಿ ಕ್ರಿಕೆಟ್‌ಗೆ ನಿವೃತ್ತಿ ಪ್ರಕಟಿಸಿ, ಟಿ20 ಕ್ರಿಕೆಟ್ ಹಾಗೂ ಫ್ರಾಂಚೈಸಿ ಲೀಗ್‌ಗಳಲ್ಲಿ ಹೆಚ್ಚಿನ ಗಮನ ಹರಿಸಲಿದ್ದಾರೆ ಎನ್ನಲಾಗಿದೆ. ಇತ್ತೀಚೆಗಷ್ಟೇ ಮುಕ್ತಾಯಗೊಂಡ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ದಕ್ಷಿಣ ಆಫ್ರಿಕಾ 0-3 ಅಂತರದಲ್ಲಿ ಸೋತಿದ್ದು, ಎಡಗೈ ಬ್ಯಾಟರ್ ಡಿ ಕಾಕ್‌ಗೆ ವಿಶ್ರಾಂತಿ ನೀಡಲಾಗಿತ್ತು. ಆದರೆ, ಸೆಪ್ಟೆಂಬರ್ 7 ರಂದು ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ. ದಕ್ಷಿಣ ಆಫ್ರಿಕಾ ಪರ 140 ಏಕದಿನ ಮತ್ತು 80 ಟಿ20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಡಿ ಕಾಕ್, ಕ್ರಮವಾಗಿ 5,966 ಮತ್ತು 2,277 ರನ್‌ಗಳಿಸಿದ್ದಾರೆ. ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ಭಾರತದಲ್ಲಿ ಏಕದಿನ ವಿಶ್ವಕಪ್ ನಡೆಯಲಿದೆ.