

ಶಿವಮೊಗ್ಗ: ಭಾರತೀಯ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬಿಜೆಪಿ ಸಂಸದ ಬ್ರಿಜ್ ಭೂಷಣ್‌ಸಿಂಗ್ ಅವರನ್ನು ಬಂಧಿಸುವಂತೆ ಮತ್ತು ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷ ಸ್ಥಾನದಿಂದ ಅವರನ್ನು ಕೆಳಗಿಳಿಸುವಂತೆ ಒತ್ತಾಯಿಸಿ ಗುರುವಾರ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಪದಾಧಿಕಾರಿಗಳು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸಂಯುಕ್ತ ಕಿಸಾನ್ ಪಂಚಾಯತ್ (ಎಸ್‌ಕೆಎಂ) ಕರೆ ಮೇರೆಗೆ ರಾಜ್ಯ ರೈತ ಸಂಘದ ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು, ಕುಸ್ತಿ ಫೆಡರೇಷನ್ ಮುಖ್ಯಸ್ಥ ಮತ್ತು ಇತರ ಸಿಬ್ಬಂದಿ ಅಪ್ರಾಪ್ತ ಹೆಣ್ಣು ಮಕ್ಕಳು ಸೇರಿ ಹಲವು ಖ್ಯಾತ ಕುಸ್ತಿಪಟುಗಳನ್ನು ಲೈಂಗಿಕ ಕಿರುಕುಳ ಹಾಗೂ ಹಿಂಸೆಗೆ ಒಳಪಡಿಸುತ್ತಿರುವುದು ಅತ್ಯಂತ ಆಘಾತಕಾರಿ ಸಂಗತಿ. ದೇಶವೇ ತಲೆ ತಗ್ಗಿಸುವಂತಹ ಘಟನೆ ಎಂದು ಕಿಡಿಕಾರಿದರು.
ಕುಸ್ತಿಪಟುಗಳು ತಮ್ಮ ಮೇಲಾಗಿರುವ ಲೈಂಗಿಕ ಕಿರುಕುಳ ಹಾಗೂ ಹಿಂಸೆ ಕುರಿತು ನಿಷ್ಪಕ್ಷಪಾತ ತನಿಖೆ ಮಾಡಬೇಕೆಂದು ಮಾತ್ರ ಕೇಳುತ್ತಿದ್ದಾರೆ. ಕುಸ್ತಿಪಟುಗಳ ಆರೋಪದ ಹಿನ್ನೆಲೆಯಲ್ಲಿ ರಚಿಸಲಾದ ವಿಚಾರಣಾ ಸಮಿತಿ ವರದಿಯನ್ನು ಸಾರ್ವಜನಿಕರ ಅವಗಾಹನೆಗೆ ತರಬೇಕೆಂದು ಆಗ್ರಹಿಸುತ್ತಿದ್ದಾರೆ. ಬೇಟಿ ಬಚಾವೋ, ಬೇಟಿ ಪಡಾವೋ ಎಂದು ಪ್ರಚಾರ ಮಾಡುವ ಪ್ರಧಾನಿ ನರೇಂದ್ರ ಮೋದಿ ಅವರು ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಸಂಸದನನ್ನು ರಕ್ಷಿಸುತ್ತಿರುವುದು ನಾಚಿಗೇಡಿನ ಸಂಗತಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕ್ರೀಡಾಪಟುಗಳ ಮೇಲೆ ಧಮನಕಾರಿ ಕ್ರಮ: ಒಲಂಪಿಕ್ ಪದಕ ವಿಜೇತರು, ವಿಶ್ವ ಚಾಂಪಿಯನ್ನರು ಸೇರಿದಂತೆ ಹಲವು ಕುಸ್ತಿಪಟುಗಳು ಏ.24ರಿಂದ ದೆಹಲಿಯ ಜಂತರ್-ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದು, ದೂರು ನೀಡಿದರೂ ಪೊಲೀಸರು ಎಫ್‌ಐಆರ್ ದಾಖಲಿಸಲಿಲ್ಲ. ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಇದೀಗ ಎಫ್‌ಐಆರ್ ದಾಖಲಿಸಲಾಗಿದೆ. ದೂರಿನ ಆಧಾರದ ಮೇಲೆ ಕಾನೂನು ಕ್ರಮ ಕೈಗೊಂಡು ನೊಂದ ಕುಸ್ತಿಪಟುಗಳಿಗೆ ರಕ್ಷಣೆ ಒದಗಿಸಬೇಕಿದ್ದ ಬಿಜೆಪಿ ಸರ್ಕಾರ ತನ್ನ ಪೊಲೀಸ್ ಪಡೆಗಳನ್ನು ಬಳಸಿ ನ್ಯಾಯಕ್ಕಾಗಿ ಪ್ರತಿಭಟಿಸುತ್ತಿರುವ ಕ್ರೀಡಾಪಟುಗಳ ಮೇಲೆ ಧಮನಕಾರಿ ಕ್ರಮಗಳನ್ನು ಅನುಸರಿಸುತ್ತಿದೆ. ಒಂದು ವಾರದ ಹಿಂದೆ ದೆಹಲಿ ಪೊಲೀಸರು ಮದ್ಯ ಸೇವಿಸಿ ಪ್ರತಿಭಟನಾಕಾರರ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಎಚ್.ಆರ್.ಬಸವರಾಜಪ್ಪ ದೂರಿದರು.
ಇಷ್ಟೆಲ್ಲ ಕಿರುಕುಳ ನಡುವೆಯೂ ನ್ಯಾಯ ಸಿಗುವವರೆಗೆ ಹೋರಾಟ ನಿಲ್ಲಿಸುವುದಿಲ್ಲ ಎಂದು ಪ್ರತಿಭಟನಾಕಾರರು ತೀರ್ಮಾನಿಸಿರುವುದು ಅತ್ಯಂತ ಪ್ರಶಂಸನೀಯವಾಗಿದೆ. ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದವರ ಮೇಲೇ ಕಿರುಕುಳ ನಡೆದರೆ, ಸಾಮಾನ್ಯ ಮಹಿಳೆಯರು ಮತ್ತು ಹೆಣ್ಣು ಮಕ್ಕಳ ಸುರಕ್ಷತೆಯಲ್ಲಿ ಕೇಂದ್ರ ಸರ್ಕಾರದ ಕಾರ್ಯವೈಖರಿಯನ್ನು ಪ್ರಶ್ನಿಸುವಂತಾಗಿದೆ. ನ್ಯಾಯಕ್ಕಾಗಿ ಆಗ್ರಹಿಸುತ್ತಿರುವ ನೊಂದ ಕ್ರೀಡಾಪಟುಗಳು ಎನ್‌ಡಿಎ ಸರ್ಕಾರದ ಬೇಬಾವಾಬ್ದಾರಿಯಿಂದ ಮತ್ತಷ್ಟು ನೊಂದು ಕಣ್ಣೀರು ಹಾಕುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ದೇಶಕ್ಕೆ ಕೀರ್ತಿ ತಂರುವ ಸಾಮರ್ಥ್ಯವಿರುವ ಕ್ರೀಡಾಪಟುಗಳ ಆತ್ಮಸ್ಥೈರ್ಯ ಕುಂದಿಸುವ ಕೆಲಸವನ್ನು ಕೂಡಲೇ ಕೇಂದ್ರ ಸರ್ಕಾರ ನಿಲ್ಲಿಸಬೇಕು. ಈ ಕೂಡಲೇ ಮಹಿಳಾ ಕ್ರೀಡಾಪಟುಗಳ ಮೇಲೆ ಲೈಂಗಿಕ ಕಿರುಕುಳ ಮತ್ತು ಹಿಂಸೆ ನೀಡಿರುವ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿ ಬಂಧಿಸಬೇಕು. ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಿದರು.
ರಾಜ್ಯ ಉಪಾಧ್ಯಕ್ಷ ಟಿ.ಎಂ.ಚಂದ್ರಪ್ಪ, ಹಿಟ್ಟೂರು ರಾಜು, ಜಿಲ್ಲಾ ಉಪಾಧ್ಯಕ್ಷರಾದ ಎಂ.ಮಂಜಪ್ಪ, ಹುಲಿಮಟ್ಟಿ ಜಯಣ್ಣ, ಪ್ರಧಾನ ಕಾರ್ಯದರ್ಶಿ ಇ.ಬಿ.ಜಗದೀಶ್, ಕಾರ್ಯಾಧ್ಯಕ್ಷರಾದ ಪಿ.ಡಿ.ಮಂಜಪ್ಪ, ಕೆ.ರಾಘವೇಂದ್ರ, ಶಿವಮೊಗ್ಗ ತಾಲೂಕು ಅಧ್ಯಕ್ಷ ಸಿ.ಚಂದ್ರಪ್ಪ, ಭದ್ರಾವತಿ ತಾಲೂಕು ಅಧ್ಯಕ್ಷ ಪಂಚಾಕ್ಷರಿ, ಹಸಿರು ಸೇನೆ ಸಂಚಾಲಕ ಎಂ.ಡಿ.ನಾಗರಾಜ್ ಉಪಸ್ಥಿತರಿದ್ದರು.