

ಚೆನ್ನೈ: ಇಲ್ಲಿನ ಚೆಪಾಕ್ ಅಂಗಳದಲ್ಲಿ ನಡೆಯುತ್ತಿರುವ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯರು ಪ್ರವಾಸಿ ತಂಡದ ಎದುರು ಭರ್ಜರಿ ಮೇಲುಗೈ ಸಾಧಿಸಿದ್ದು, 635 ದಿನಗಳ ಬಳಿಕ ಟೆಸ್ಟ್ ಕ್ರಿಕೆಟ್ಗೆ ಮರಳಿದ ರಿಷಭ್ ಪಂತ್ ಭರ್ಜರಿ ಶತಕ ಸಿಡಿಸುವ ಮೂಲಕ ಕಮ್ಬ್ಯಾಕ್ ಮಾಡಿದ್ದಾರೆ. ಇದಲ್ಲದೆ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದ್ದ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪಂತ್ 123 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಶತಕದೊಂದಿಗೆ ಟೀಮ್ ಇಂಡಿಯಾ ಪರ ಟೆಸ್ಟ್ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ವಿಕೆಟ್ ಕೀಪರ್ಗಳ ಪಟ್ಟಿಯಲ್ಲಿ ರಿಷಭ್ ಪಂತ್ ಅಗ್ರಸ್ಥಾನಕ್ಕೇರಿದ್ದಾರೆ.
ಇದಕ್ಕೂ ಮುನ್ನ ಈ ದಾಖಲೆ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿತ್ತು. ಟೀಮ್ ಇಂಡಿಯಾ ಪರ 144 ಟೆಸ್ಟ್ ಇನಿಂಗ್ಸ್ ಆಡಿರುವ ಧೋನಿ ಕೇವಲ 6 ಶತಕಗಳನ್ನು ಬಾರಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಸರಿಗಟ್ಟುವ ಮೂಲಕ ರಿಷಭ್ ಪಂತ್ ಅಗ್ರಸ್ಥಾನಕ್ಕೇರಿದ್ದಾರೆ. 26 ವರ್ಷದ ರಿಷಭ್ ಪಂತ್ ಕೇವಲ 58 ಇನಿಂಗ್ಸ್ಗಳಲ್ಲಿ ಒಟ್ಟು 6 ಟೆಸ್ಟ್ ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಅತೀ ಕಡಿಮೆ ಇನಿಂಗ್ಸ್ಗಳಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ಟೆಸ್ಟ್ ಶತಕ ಸಿಡಿಸಿದ ವಿಕೆಟ್ ಕೀಪರ್ ಬ್ಯಾಟರ್ ಎನಿಸಿಕೊಂಡಿದ್ದಾರೆ.
ಇನ್ನು ಈ ಪಂದ್ಯದಲ್ಲಿ 128 ಎಸೆತಗಳನ್ನು ಎದುರಿಸಿದ ರಿಷಭ್ ಪಂತ್ 4 ಭರ್ಜರಿ ಸಿಕ್ಸ್ ಹಾಗೂ 13 ಫೋರ್ಗಳೊಂದಿಗೆ 109 ರನ್ ಬಾರಿಸಿ ಮೆಹದಿ ಹಸನ್ ಮಿರಾಝ್ ಎಸೆತದಲ್ಲಿ ಕ್ಯಾಚ್ ನೀಡಿ ಔಟಾದರು. ಈ ವೇಳೆಗೆ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್ನಲ್ಲಿ 4 ವಿಕೆಟ್ ನಷ್ಟಕ್ಕೆ 234 ರನ್ ಕಲೆಹಾಕಿತ್ತು. ಬಾಂಗ್ಲಾಗೆ 515 ರನ್ಗಳ ಗುರಿ ನೀಡಿರುವ ಭಾರತ ತಂಡವು ಮೂರನೇ ದಿನದಂತ್ಯಕ್ಕೆ ಮೊದಲ ಪಂದ್ಯವನ್ನು ವಶಪಡಿಸಿಕೊಳ್ಳುವ ಇರಾದೆಯಲ್ಲಿದೆ.