

ಓಮನ್: ಬಾಂಗ್ಲಾದೇಶ ಆಲ್ರೌಂಡರ್ ಶಕೀಬ್ ಅಲ್ ಹಸನ್, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿಹೆಚ್ಚು ವಿಕೆಟ್ ಕಬಳಿಸಿದ ಬೌಲರ್ ಎನಿಸಿಕೊಂಡರು. 108 ವಿಕೆಟ್ ಕಬಳಿಸುವ ಮೂಲಕ ಶ್ರೀಲಂಕಾದ ವೇಗಿ ಲಸಿತ್ ಮಾಲಿಂಗ (107 ವಿಕೆಟ್) ಹೆಸರಿನಲ್ಲಿದ್ದ ದಾಖಲೆಯನ್ನು ಶಕೀಬ್ ಹಿಂದಿಕ್ಕಿದರು. ಮಸ್ಕತ್‌ನಲ್ಲಿ ನಡೆಯತ್ತಿರುವ ಟಿ20 ವಿಶ್ವಕಪ್ ಟೂರ್ನಿಯ ಮೊದಲ ಸುತ್ತಿನ ಹಣಾಹಣಿಯಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಶಕೀಬ್ ಸ್ಕಾಟ್ಲೆಂಡ್ ವಿರುದ್ಧ 2 ವಿಕೆಟ್ ಕಬಳಿಸುವ ಮೂಲಕ ಈ ಸಾಧನೆ ಮಾಡಿದರು.
ಶಕೀಬ್ ಅಲ್ ಹಸನ್, 89 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಿಂದ 108 ವಿಕೆಟ್ ಕಬಳಿಸಿದರು. ಚುಟುಕು ಕ್ರಿಕೆಟ್ ಮಾದರಿಯಲ್ಲಿ 100 ವಿಕೆಟ್ ಹಾಗೂ ಸಾವಿರ ರನ್ ಪೂರೈಸಿದ ವಿಶ್ವದ ಮೊದಲ ಆಟಗಾರ ಎನಿಸಿಕೊಂಡರು. ನ್ಯೂಜಿಲೆಂಡ್ ತಂಡದ ವೇಗದ ಬೌಲರ್ ಟಿಮ್ ಸೌಥಿ (99 ವಿಕೆಟ್) 3ನೇ ಸ್ಥಾನದಲ್ಲಿದ್ದಾರೆ. ಎಲ್ಲ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 12 ಸಾವಿರ ರನ್, 600 ವಿಕೆಟ್ ಕಬಳಿಸಿದ ಏಕೈಕ ಆಟಗಾರ ಎನಿಸಿಕೊಂಡಿದ್ದಾರೆ.