

IPL : ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಇಂಡಿಯನ್ ಪ್ರೀಮಿಯರ್ ಲೀಗ್ನ 26ನೇ ಪಂದ್ಯದ ವೇಳೆ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡದ ಬ್ಯಾಟರ್ ನಿಕೋಲಸ್ ಪೂರನ್ ಬಾರಿಸಿದ ಸಿಕ್ಸ್ನಿಂದಾಗಿ ಅಭಿಮಾನಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ಗುಜರಾತ್ ಟೈಟಾನ್ಸ್ ತಂಡವನ್ನು ಮೊದಲು ಬ್ಯಾಟಿಂಗ್ಗೆ ಆಹ್ವಾನಿಸಿದ್ದರು. ಗುಜರಾತ್ ಟೈಟಾನ್ಸ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 180 ರನ್ ಕಲೆಹಾಕಿತು.
181 ರನ್ಗಳ ಕಠಿಣ ಗುರಿ ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡದ ಚಿತ್ರಣ ಬದಲಿಸಿದ್ದು ನಿಕೋಲಸ್ ಪೂರನ್. 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪೂರನ್ 34 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್ ಹಾಗೂ 1 ಫೋರ್ನೊಂದಿಗೆ 61 ರನ್ ಬಾರಿಸಿದ್ದರು.
ಈ ಏಳು ಸಿಕ್ಸರ್ಗಳಲ್ಲಿ ಒಂದು ಸಿಕ್ಸ್ ನೇರವಾಗಿ ಸ್ಟೇಡಿಯಂನಲ್ಲಿ ಕೂತಿದ್ದ ವ್ಯಕ್ತಿ ಹಣೆಗೆ ಹೋಗಿ ಬಡಿದಿದೆ. ತಕ್ಷಣವೇ ಸ್ಟೇಡಿಯಂ ಸಿಬ್ಬಂದಿಗಳು ಪ್ರಾಥಮಿಕ ಚಿಕಿತ್ಸೆ ಒದಗಿಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇದೀಗ ಗಂಭೀರವಾಗಿ ಗಾಯಗೊಂಡಿರುವ ಅಭಿಮಾನಿಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.