

ಮುಂಬೈ: ಭಾರತ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಆಟಗಾರ ವಿನೋದ್ ಕಾಂಬ್ಳಿ (Vinod Kambli) ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಅವರನ್ನು ಥಾಣೆಯ ಆಕ್ರಿತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವೈದ್ಯರ ಮೇಲ್ವಿಚಾರಣೆಯಲ್ಲಿರುವ ವಿನೋದ್ ಕಾಂಬ್ಳಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ವಿನೋದ್ ಕಾಂಬ್ಳಿ (Vinod Kambli) ಅವರು ಇತ್ತೀಚಿಗೆ ಮುಂಬೈನ ಶಿವಾಜಿ ಪಾರ್ಕ್ನಲ್ಲಿ ಜರುಗಿದ ರಮಾಕಾಂತ್ ಅಚ್ರೇಕರ್ ಸ್ಮಾರಕ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಸಚಿನ್ ತೆಂಡೂಲ್ಕರ್, ವಿನೋದ್ ಕಾಂಬ್ಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಈ ವೇಳೆ ವಿನೋದ್ ಅವರು ಅನಾರೋಗ್ಯದಿಂದ ಬಳಲುತ್ತಿರುವುದು ಬೆಳಕಿಗೆ ಬಂದಿತ್ತು.
ಈ ಕುರಿತು ಪ್ರಕಟಣೆಯನ್ನು ಬಿಡುಗಡೆ ಮಾಡಿರುವ ಆಕ್ರಿತಿ ಆಸ್ಪತ್ರಯು ವಿನೋದ್ ಕಾಂಬ್ಳಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಗಂಭೀರವಾಗಿದೆ. ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ಆಸ್ಪತ್ರೆಯು ಪ್ರಕಟಣೆಯಲ್ಲಿ ತಿಳಿಸಿದೆ. ಗಂಭೀರ ಸಮಸ್ಯೆಯ ಮೂತ್ರದ ಸೋಂಕು ಸೇರಿದಂತೆ ಅನೇಕ ರೀತಿಯ ಖಾಯಿಲೆಯಿಂದ ಬಳಲುತ್ತಿರುವ ವಿನೋದ್ ಕಾಂಬ್ಳಿ ಅವರ ಆರೋಗ್ಯ ದಿನಕಳೆದಂತೆ ಹದಗೆಡುತ್ತಿದ್ದು, ಹಿರಿಯ ಕ್ರಿಕೆಟಿಗ ಕಪಿಲ್ ದೇವ್ ಸೇರಿದಂತೆ ಅನೇಕರು ಸಹಾಯ ಮಾಡುವುದಾಗಿ ಹೇಳಿಕೊಂಡಿದ್ದಾರೆ.
1991ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ ವಿನೋದ್ ಕಾಂಬ್ಳಿ ಟೀಮ್ ಇಂಡಿಯಾ ಪರ ಒಟ್ಟು 17 ಟೆಸ್ಟ್ ಮತ್ತು 104 ಏಕದಿನ ಪಂದ್ಯಗಳನ್ನು ಆಡಿರುವ ಅವರು ಟೆಸ್ಟ್ನಲ್ಲಿ ಒಟ್ಟು 1084 ರನ್ ಮತ್ತು ಏಕದಿನದಲ್ಲಿ 2477 ರನ್ ಗಳಿಸಿದ್ದಾರೆ.