ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅವಕಾಶ ನಿರಾಕರಣೆ

>

ವಿಜಯವಾಣಿ ಸುದ್ದಿಜಾಲ ಬಂಟ್ವಾಳ
ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎನ್ನುವ ಕಾರಣಕ್ಕೆ ನಾಲ್ವರು ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿದ ಪ್ರಕರಣ ಬಂಟ್ವಾಳ ತಾಲೂಕಿನ ಅಲ್ಲಿಪಾದೆಯ ಖಾಸಗಿ ವಿದ್ಯಾಸಂಸ್ಥೆಯಲ್ಲಿ ಶುಕ್ರವಾರ ಬೆಳಕಿಗೆ ಬಂದಿದೆ. ಪ್ರಕರಣದ ಮಾಹಿತಿ ಪಡೆದ ಕ್ಷೇತ್ರ ಶಿಕ್ಷಣಾಧಿಕಾರಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, 24 ಗಂಟೆಯೊಳಗೆ ಸ್ಪಷ್ಟೀಕರಣ ನೀಡುವಂತೆ ಶಾಲಾ ಮುಖ್ಯ ಶಿಕ್ಷಕಿಗೆ ಆದೇಶಿಸಿದ್ದಾರೆ.
ಇಲ್ಲಿನ ಕನ್ನಡ ಮಾಧ್ಯಮದಲ್ಲಿ ಕಲಿಯುತ್ತಿರುವ ಎಸ್‌ಎಸ್‌ಎಲ್‌ಸಿಯ ನಾಲ್ವರು ಬಾಲಕರು ಈ ಬಾರಿಯ ಅಂತಿಮ ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ಪ್ರಸಕ್ತ ಸಾಲಿನಲ್ಲಿ 32 ವಿದ್ಯಾರ್ಥಿಗಳು 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಅವರಲ್ಲಿ ನಾಲ್ವರು ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎನ್ನುವ ಏಕೈಕ ಕಾರಣಕ್ಕೆ ಆಡಳಿತ ಮಂಡಳಿ ಅಂತಿಮ ಪರೀಕ್ಷೆಗೆ ಹಾಜರಾಗದಂತೆ ಈ ನಿರ್ಧಾರ ಕೈಗೊಂಡಿದೆ.
ಈ ನಾಲ್ವರು ವಿದ್ಯಾರ್ಥಿಗಳ ಹೆಸರನ್ನು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿಗೆ ನೋಂದಣಿ ಮಾಡಿರಲಿಲ್ಲ. ಈ ನಿಟ್ಟಿನಲ್ಲಿ ಗುರುವಾರ ಆರಂಭಗೊಂಡ ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ಪ್ರವೇಶಪತ್ರ ಸಿಗಲಿಲ್ಲ. ಪರೀಕ್ಷೆಗೆ ಹಾಜರಾಗಲೂ ಸಾಧ್ಯವಾಗಿಲ್ಲ. ಈ ಬಗ್ಗೆ ವಿದ್ಯಾರ್ಥಿಗಳ ಪಾಲಕರು ಸಾಮಾಜಿಕ ಕಾರ್ಯಕರ್ತರಿಗೆ ಮಾಹಿತಿ ನೀಡಿದರು. ಅದರಂತೆ ಶಿಕ್ಷಣಾಧಿಕಾರಿ ಶಾಲೆಗೆ ಭೇಟಿ ನೀಡಿ ಮುಖ್ಯ ಶಿಕ್ಷಕರ ವಿಚಾರಣೆ ನಡೆಸಿದ್ದಾರೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದ ಕಾರಣ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿರುವುದನ್ನು ಮುಖ್ಯಶಿಕ್ಷಕಿ ಒಪ್ಪಿಕೊಂಡಿರುವುದಾಗಿ, ಸ್ಥಳಕ್ಕೆ ತೆರಳಿದ್ದ ಮಾಧ್ಯಮದವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಅವರ ಕಲಿಕಾ ವೆಚ್ಚ ಹಾಗೂ ಜವಾಬ್ದಾರಿ ಭರಿಸಲು ಸೂಚಿಸಿರುವುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ: ಶಾಲೆಗೆ ಶೇ.100 ಫಲಿತಾಂಶ ದಾಖಲಿಸುವ ಸಲುವಾಗಿ ಶಾಲಾ ಆಡಳಿತ ಮಂಡಳಿ ಇಂತಹ ನಿರ್ಧಾರ ಕೈಗೊಂಡು ವಿದ್ಯಾರ್ಥಿಗಳ ಭ ವಿಷ್ಯದ ಜೊತೆ ಚೆಲ್ಲಾಟವಾಡಿದೆ. ಶಿಕ್ಷಕರ ಬೇಜವಬ್ದಾರಿಯಿಂದ ಈ ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದೆ. ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿರುವ ಅವರು, ಶಾಲೆಗೆ ಬಂದ ವಿದ್ಯಾರ್ಥಿಗೆ ಸರಿಯಾಗಿ ವಿದ್ಯೆ ಕಲಿಸಿ ಪರೀಕ್ಷೆಗೆ ತಯಾರುಗೊಳಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಆದರೆ ಇಲ್ಲಿ ಅವಕಾಶ ನಿರಾಕರಿಸಿರುವುದು ಅಕ್ಷಮ್ಯ ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಆರೋಪಿಸಿದ್ದಾರೆ.

ಪರೀಕ್ಷೆ ವಂಚಿತ ವಿದ್ಯಾರ್ಥಿಗಳ ಪಾಲಕರಿಂದ ದೂರು ಬಂದಿಲ್ಲ. ಘಟನೆ ಸುದ್ದಿ ತಿಳಿದು ಶಾಲೆಗೆ ತೆರಳಿ ಮಾಹಿತಿ ಸಂಗ್ರಹಿಸಲಾಗಿದೆ. ಶಾಲೆಯ ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳ ಪಾಲಕರೊಂದಿಗೆ ಮಾತುಕತೆ ನಡೆಸಲಾಗಿದೆ. ಶಾಲಾಡಳಿತ ತಪ್ಪು ನಿರ್ಧಾರ ಕೈಗೊಂಡಿದೆ. ಇದಕ್ಕೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿ, ಸ್ಪಷ್ಟೀಕರಣ ನೀಡುವಂತೆ ಸೂಚಿಸಲಾಗಿದೆ.
-ಶಿವಪ್ರಕಾಶ್ ಎನ್. ಕ್ಷೇತ್ರ ಶಿಕ್ಷಣಾಧಿಕಾರಿ, ಬಂಟ್ವಾಳ

ನಾಲ್ವರು ವಿದ್ಯಾರ್ಥಿಗಳು ಕಲಿಕೆಯಲ್ಲಿ ತೀರಾ ಹಿಂದುಳಿದಿರುವ ಕಾರಣ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ನೋಂದಾಯಿಸಿರಲಿಲ್ಲ. ವಿದ್ಯಾರ್ಥಿಗಳ ಭವಿಷ್ಯದ ಕಲಿಕಾ ಹಿತದೃಷ್ಟಿಯಿಂದ ಹಾಗೂ ಪಾಲಕರ ಸಹಮತದೊಂದಿಗೆ ಈ ನಿರ್ಧಾರ ಕೈಗೊಳ್ಳಲಾಗಿತ್ತು.
ಸಿಸ್ಟರ್ ಶಾಲಿನಿ, ಶಾಲಾ ಮುಖ್ಯ ಶಿಕ್ಷಕಿ

Leave a Reply

Your email address will not be published. Required fields are marked *