ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆಗೆ ಸಿದ್ಧತೆ

ಚಿಕ್ಕಮಗಳೂರು: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯ ಮತಯಂತ್ರಗಳು ಅಜ್ಜರಕಾಡು ಸೇಂಟ್ ಸಿಸಿಲಿ ಶಾಲೆಗಳ ಕೊಠಡಿ ಸ್ಟ್ರಾಂಗ್ ರೂಂನಲ್ಲಿ ಭದ್ರವಾಗಿದ್ದು, ಮತ ಎಣಿಕೆ ಕೇಂದ್ರದಲ್ಲಿ ಅಂತಿಮ ಹಂತದ ಸಿದ್ಧತೆ ನಡೆದಿದೆ.

ಒಟ್ಟು 18 ಕೊಠಡಿಗಳಲ್ಲಿ ಮತಯಂತ್ರಗಳನ್ನು ಇರಿಸಲಾಗಿದೆ. ಕೇಂದ್ರದಲ್ಲಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಎಸ್ಪಿ ನಿಶಾ ಜೇಮ್್ಸ, ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಭೇಟಿ ನೀಡಿ ಅಗತ್ಯ ಏರ್ಪಾಡುಗಳನ್ನು ಮಾಡಿಸುತ್ತಿದ್ದಾರೆ.

ಮಂಗಳವಾರ ಕ್ಷೇತ್ರದ ಮುಖ್ಯ ಕೌಂಟಿಂಗ್ ಅಬ್ಸರ್ವರ್ ನಿತೀಶ್ವರ್ ರಾವ್ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿದರು. ಎಲ್ಲ ಕೊಠಡಿಗಳಿಗೆ ಭೇಟಿ ನೀಡಿ ಎಸ್​ಪಿ, ಡಿಸಿ ಅವರೊಂದಿಗೆ ಸಮಾಲೋಚನೆ ನಡೆಸಿದರು.

ಕೇಂದ್ರದ ಪ್ರವೇಶದ್ವಾರದಲ್ಲಿ ನೇಮಕಗೊಂಡ ಅಧಿಕಾರಿ, ಸಿಬ್ಬಂದಿಯನ್ನೂ ಪರಿಶೀಲನೆ ನಡೆಸಿಯೇ ಒಳಗೆ ಬಿಡಲಾಗುತ್ತಿದೆ. ಮತ ಎಣಿಕೆ ದಿನ ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮತ ಎಣಿಕೆ ಕೇಂದ್ರದ ಪ್ರತೀ ಕೊಠಡಿಯಲ್ಲಿ 2 ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಕೇಂದ್ರದ ಪ್ರವೇಶ ದ್ವಾರ ಸೇರಿ ಆವರಣದಲ್ಲಿಯೂ ಸಿಸಿಟಿವಿ ಕ್ಯಾಮರಾ ಅಳವಡಿಕೆ ಮಾಡಲಾಗಿದ್ದು, ಒಟ್ಟು 159 ಸಿಸಿ ಟಿವಿ ಕ್ಯಾಮರಾ ಅಳವಡಿಸಲಾಗಿದೆ.

ಕೇಂದ್ರಕ್ಕೆ ಚುನಾವಣಾಧಿಕಾರಿಯಿಂದ ನೀಡಲಾದ ಅಧಿಕೃತ ಗುರುತಿನ ಚೀಟಿ ಇದ್ದಲ್ಲಿ ಮಾತ್ರ ಪ್ರವೇಶಿಸಲು ಅವಕಾಶ ಕಲ್ಪಿಸಲಾಗುತ್ತದೆ. ಮತ ಎಣಿಕೆ ಕೇಂದ್ರದ ಹಿಂಭಾಗದಲ್ಲಿ ಮಾಧ್ಯಮದವರಿಗೆ ಮತ್ತು ರಾಜಕೀಯ ಪಕ್ಷದ ಏಜೆಂಟರಿಗೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಸೇಂಟ್ ಸಿಸಿಲಿ ಶಾಲಾ ಕಟ್ಟಡದಲ್ಲಿರುವ 14 ಮತ ಎಣಿಕಾ ಕೆಂದ್ರಗಳಿಗೆ ಒಂದೇ ಪ್ರವೇಶದ್ವಾರ ಕಲ್ಪಿಸಲಾಗಿದೆ. ಮತ ಎಣಿಕೆ ಕೇಂದ್ರದಿಂದ 100 ಮೀಟರ್ ವ್ಯಾಪ್ತಿಯನ್ನು ವಾಹನ ಸಂಚಾರ ರಹಿತ ಪಾದಚಾರಿಗಳ ವಲಯ ಎಂದು ಗುರುತಿಸಲಾಗಿದೆ.

ಸಕಲ ವ್ಯವಸ್ಥೆ: ಸಾವಿರಕ್ಕೂ ಅಧಿಕ ಸಿಬ್ಬಂದಿ, ಅಧಿಕಾರಿ ವರ್ಗ ಮತ ಎಣಿಕೆ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಲಿದ್ದು, ಮೂಲ ಸೌಕರ್ಯಗಳಿಗೆ ಕೊರತೆಯಾಗದಂತೆ ಕ್ರಮ ತೆಗೆದುಕೊಳ್ಳಲಾಗಿದೆ. ಕುಡಿಯಲು ನೀರು, ಹೆಚ್ಚುವರಿ ಬಳಕೆಗೆ ಟ್ಯಾಂಕರ್ ನೀರಿನ ವ್ಯವಸ್ಥೆ ಮಾಡಲಾಗಿದೆ. ಹೆಚ್ಚುವರಿ ಶೌಚಗೃಹ, ಮಹಿಳಾ ಸಿಬ್ಬಂದಿಗೆ ಗ್ರೀನ್ ರೂಮ್ ಪ್ರಥಮ ಚಿಕಿತ್ಸೆ, ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಮತ ಎಣಿಕೆ ಕೇಂದ್ರದೊಳಗೆ ಮೊಬೈಲ್ ನಿಷೇಧಿಸಲಾಗಿದೆ. ಸಿಬ್ಬಂದಿ, ಅಧಿಕಾರಿ ವರ್ಗಕ್ಕೆ ತಿಂಡಿ, ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ಡಿಸಿ ಹೆಪ್ಸಿಬಾ ರಾಣಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *