ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರೋಗ್ಯ ಕ್ಷೇತ್ರಕ್ಕೂ ಗಮನಾರ್ಹ ಕೊಡುಗೆಯನ್ನು ನೀಡಿದ್ದಾರೆ.
ಸಿಎಂ ಬೊಮ್ಮಾಯಿ ಅವರು ಆರೋಗ್ಯ ಕ್ಷೇತ್ರ ಸುಧಾರಣೆಗಾಗಿ 720 ಕೋಟಿ ರೂ. ಘೋಷಿಸಿದರು. ಸುಮಾರು 202 ಕೋಟಿ ರೂ. ವೆಚ್ಚದಲ್ಲಿ ಮೈಸೂರು, ಶಿವಮೊಗ್ಗ ಮತ್ತು ಕಲಬುರಗಿಗಳಲ್ಲಿ ಕಿದ್ವಾಯಿ ಸಂಸ್ಥೆಯಡಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪನೆ ಮಾಡುವುದಾಗಿ ಘೋಷಿಸಿದರು.
ಮೈಸೂರಿನಲ್ಲಿ 146 ಕೋಟಿ ರೂ. ವೆಚ್ಚದಲ್ಲಿ ಅಂಗಾಂಗ ಜೋಡಣೆಗೆ ಆಸ್ಪತ್ರೆ ಹಾಗೂ ರಾಯಚೂರಿನಲ್ಲಿ ಏಮ್ಸ್ ಮಾದರಿಯ ಆಸ್ಪತ್ರೆ ನಿರ್ಮಾಣ. 65 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆ. ಕೊಡಗು ಮತ್ತು ಕಾರವಾರದಲ್ಲಿ 450 ಹಾಸಿಗೆ ಆಸ್ಪತ್ರೆ ನಿರ್ಮಾಣ ಮಾಡುವುದಾಗಿ ಬೊಮ್ಮಾಯಿ ಹೇಳಿದರು.
ಉತ್ತರ ಕನ್ನಡ ಜಿಲ್ಲೆಗೆ ಬಂಪರ್ ಕೊಡುಗೆ ನೀಡಿದ ಸಿಎಂ ಬೊಮ್ಮಾಯಿ, ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸುವುದಾಗಿ ಘೋಷಣೆ ಮಾಡಿದರು. ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ 50 ಹಾಸಿಗೆ ಸಾಮರ್ಥ್ಯ ಹಾಗೂ ಹುಬ್ಬಳ್ಳಿಯಲ್ಲಿ 430 ಹಾಸಿಗೆ ಸಾಮರ್ಥ್ಯದ ಹೃದ್ರೋಗ ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪನೆ ಮಾಡುವುದಾಗಿ ಬಜೆಟ್ನಲ್ಲಿ ತಿಳಿಸಿದರು.
ಬೆಂಗಳೂರಿನ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ 500 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ ಎಂದರು.
ಮನೆ ಮನೆಗೆ ಆರೋಗ್ಯ ಎಂಬ ಕಾರ್ಯಕ್ರಮ ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ, ಇದರ ಅಡಿಯಲ್ಲಿ ಗ್ರಾಮೀಣ ಜನತೆಗೆ 2023-24ನೇ ಸಾಲಿನಲ್ಲಿ ಎರಡು ಬಾರಿ ಹಳ್ಳಿಗಳಲ್ಲಿ ಆರೋಗ್ಯ ಶಿಬಿರಗಳನ್ನು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಆಯೋಜಿಸುವುದಾಗಿ ಹೇಳಿದರು. ಗಂಭೀರವಾದ ಕಾಯಿಲೆಗಳನ್ನು ಆರಂಭದಲ್ಲಿ ಪತ್ತೆ ಹಚ್ಚಿ ಜನರ ಆರೋಗ್ಯ ಕಾಪಾಡುವುದರೊಂದಿಗೆ, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಮನೆಗೆ ಬಾಗಿಲಿಗೆ ಔಷಧಿಗಳನ್ನು ತಲುಪಿಸುವುದಾಗಿ ಬಜೆಟ್ನಲ್ಲಿ ಘೋಷಣೆ ಮಾಡಿದರು.
ರಾಜ್ಯ ಬಜೆಟ್ 2023| 75 ಯೂನಿಟ್ ಉಚಿತ ವಿದ್ಯುತ್, ಬೀದಿ ಬದಿ ವ್ಯಾಪಾರಿಗಳಿಗೆ 70 ಕೋಟಿ ರೂ. ಸಾಲ
ರಾಜ್ಯ ಬಜೆಟ್ನಲ್ಲಿ ಬೆಂಗಳೂರು ಟ್ರಾಫಿಕ್! ಸುಗಮ ಸಂಚಾರಕ್ಕಾಗಿ ಕೈಗೊಂಡ ಕ್ರಮಗಳು ಹೀಗಿವೆ…