ಹೊನ್ನಾಳಿ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಕಳೆಯುತ್ತಿದ್ದರೂ ಅಭಿವೃದ್ಧಿ ಸಂಪೂರ್ಣ ಮರಿಚಿಕೆಯಾಗಿದೆ. ಆದರೆ, ಭ್ರಷ್ಟಾಚಾರ ಮಾತ್ರ ಎಗ್ಗಿಲ್ಲದೆ ತಾಂಡವಾಡುತ್ತಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ತಾಲೂಕಿನ ತರಗನಹಳ್ಳಿ ಗ್ರಾಮದಲ್ಲಿ ಶನಿವಾರ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರದಲ್ಲಿ ಒಂದು ಗುಂಡಿಯನ್ನೂ ಮುಚ್ಚಿಲ್ಲ. ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಶಾಲಾ ಕೊಠಡಿ, ಜಲಜೀವನ ಮಿಷನ್, ರೈತರ ಪಂಪ್‌ಸೆಟ್‌ಗೆ ಉಚಿತ ವಿದ್ಯುತ್ ನೀಡಿದ್ದೆವು. ಆದರೆ, ಕಾಂಗ್ರೆಸ್ ರೈತರ ಪಂಪ್‌ಸೆಟ್‌ಗೆ ಆಧಾರ್ ಜೋಡಣೆ ಮಾಡಬೇಕು ಎಂದು ಆದೇಶಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅಧಿಕಾರಕ್ಕೆ ಬಂದರೆ ರೈತರಿಗೆ ಎಲ್ಲ್ಲ ನೆರವು ನೀಡುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಕಾಂಗ್ರೆಸ್, ರೈತರು ಬಳಸುವ ಎಲ್ಲ ಪರಿಕರಗಳ ದರ ಹೆಚ್ಚಿಸಿ ಮೋಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಧಿಕಾರಕ್ಕಾಗಿ ಐದು ಗ್ಯಾರಂಟಿ ಘೋಷಣೆ ಮಾಡಿದ್ದರು. ಆದರೆ, ಕಳೆದ ಮೂರ‌್ನಾಲ್ಕು ತಿಂಗಳಿಂದ ಗೃಹಲಕ್ಷ್ಮಿ ಹಣ ಬರುತ್ತಿಲ್ಲ ಎಂದು ಮಹಿಳೆಯರು ದೂರುತ್ತಿದ್ದಾರೆ ಎಂದು ಆರೋಪಿಸಿದರು.
ತಾಲೂಕು ಮಂಡಲ ಅಧ್ಯಕ್ಷ ಜೆ.ಕೆ. ಸುರೇಶ್, ಬಿಜೆಪಿ ಮುಖಂಡರಾದ ನೆಲಹೊನ್ನೆ ಮಂಜುನಾಥ್, ತರಗನಹಳ್ಳಿ ರಮೇಶ್, ಬಿಜೆಪಿ ಕಾರ್ಯಕರ್ತರು ಇದ್ದರು.
ಮಂಗಳವಾರ ಬೃಹತ್ ಪ್ರತಿಭಟನೆ
ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಬ್ರಹ್ಮಾಂಡ ಭ್ರಷ್ಟಾಚಾರ, ಅಭಿವೃದ್ಧಿ ಶೂನ್ಯ ಹಾಗೂ ಸರ್ಕಾರದ ವೈಫಲ್ಯ ಖಂಡಿಸಿ ಮಂಗಳವಾರ( ಸೆ.17) ಬೆಳಗ್ಗೆ ಪ್ರವಾಸಿ ಮಂದಿರದಿಂದ ತಾಲೂಕು ಕಚೇರಿವರೆಗೆ ತಾಲೂಕು ಬಿಜೆಪಿ ಘಟಕದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.