ಹಳ್ಳಿ ಫೈಟ್​ನಲ್ಲಿ ರಾಜಕೀಯ ಪಕ್ಷಗಳ ಮೇಲೆ ಚುನಾವಣಾ ಆಯೋಗ ಕಣ್ಗಾವಲು

GP Election
Published on

ಬೆಂಗಳೂರು: ಗ್ರಾಮ ಸ್ವರಾಜ್​ ಸಮಾವೇಶ, ಪ್ರಜಾಪ್ರತಿನಿಧಿ ಸಭೆಗಳನ್ನು ನಡೆಸಿ ಪಕ್ಷಾತೀತವಾಗಿ ನಡೆಯಬೇಕಿದ್ದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ರಾಜಕೀಯ ಬೆರೆಸುವುದನ್ನು ರಾಜ್ಯ ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ.

ಗ್ರಾಪಂ ಸದಸ್ಯತ್ವ ಹರಾಜು ಹಾಕುವುದರ ಬಗ್ಗೆ ಕಠಿಣ ಕ್ರಮ ಕೈಗೊಂಡ ಬೆನ್ನಲ್ಲೇ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ರಾಜಕೀಯ ಹಸ್ತಕ್ಷೇಪ ತಡೆಯಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ.

ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಪ್ರಚಾರ ಕಾರ್ಯದಲ್ಲಿ ಭಾಗಿಯಾಗುವ, ಸಭೆ- ಸಮಾರಂಭ ನಡೆಸುವ, ರಾಜಕೀಯ ಮುಖಂಡರ ಭಾವಚಿತ್ರಗಳನ್ನು ಕರಪತ್ರಗಳಲ್ಲಿ ಮುದ್ರಿಸಿ ಪಕ್ಷಗಳ ಬಾವುಟ ಮತ್ತು ಚಿಹ್ನೆ ಬಳಸಿಕೊಂಡು ಪ್ರಚಾರ ಮಾಡುವಂತಿಲ್ಲ ಎಂದು ಸ್ಪಷ್ಟಪಡಿಸಿದೆ.

ಕರ್ನಾಟಕ ಗ್ರಾಮ ಸ್ವರಾಜ್​ ಮತ್ತು ಪಂಚಾಯತ್​ ರಾಜ್​ ಅಧಿನಿಯಮ 1993ರ ಪ್ರಕರಣ 7(2)ರಂತೆ ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನು ಪಕ್ಷದ ಆಧಾರ ರಹಿತವಾಗಿ ನಡೆಸುವುದರಿಂದ ಅಭ್ಯರ್ಥಿಗಳಿಗೆ ಆಯೋಗ ಮುಕ್ತ ಚಿಹ್ನೆಗಳನ್ನು ಹಂಚಿಕೆ ಮಾಡಲಿದೆ.

ಆಯೋಗ ಏನು ಹೇಳಿದೆ?

  • ರಾಜಕೀಯ ಪಕ್ಷಗಳು ಸಭೆ-ಸಮಾರಂಭ ಏರ್ಪಡಿಸಿ ವೇದಿಕೆ ಮೇಲೆ ಪಕ್ಷದ ಬಾವುಟ, ಬ್ಯಾನರ್​ಗಳನ್ನು ಬಳಸುವಂತಿಲ್ಲ.
  • ಸ್ಪರ್ಧಿಸುವ ಅಭ್ಯರ್ಥಿಗಳನ್ನು ತಮ್ಮ ಪಕ್ಷದ/ಬೆಂಬಲಿತ ಅಭ್ಯರ್ಥಿ ಎಂದು ಪರಿಚಯಿಸುವುದು ಹಾಗೂ ಅವರ ಪರವಾಗಿ ಮತ ನೀಡಲು ಮತದಾರರನ್ನು ಕೋರುವಂತಿಲ್ಲ.
  • ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು, ರಾಜಕೀಯ ಮುಖಂಡರ ಭಾವಚಿತ್ರ/ಪಕ್ಷದ ಚಿಹ್ನೆ ಇರುವ ಕರಪತ್ರಗಳನ್ನು ಮುದ್ರಿಸುವುದು/ಹಂಚುವುದನ್ನು ಮಾಡುವಂತಿಲ್ಲ.
  • ರಾಜಕೀಯ ಮುಖಂಡರ ಭಾವಚಿತ್ರ, ರಾಜಕೀಯ ಪಕ್ಷಗಳ ಚಿಹ್ನೆ ಇರುವ ಕರಪತ್ರಗಳು, ಕಟೌಟ್​ಗಳು, ಬ್ಯಾನರ್​ ಮತ್ತು ಬಂಟಿಂಗ್​ಗಳ ಮೂಲಕ ಪ್ರಚಾರ ಮಾಡುವಂತಿಲ್ಲ.
  • ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ರಾಜಕೀಯ ಮುಖಂಡರ ಭಾವಚಿತ್ರ ಮತ್ತು ಪಕ್ಷಗಳ ಚಿಹ್ನೆಯನ್ನು ಪ್ರಚಾರಕ್ಕೆ ಬಳಸುವಂತಿಲ್ಲ.

ಈ ನಿಯಮ ಉಲ್ಲಘಿಸಿರುವುದು ಕಂಡು ಬಂದಲ್ಲಿ ಅಂತಹ ಚುನಾವಣಾ ಪ್ರಚಾರ ಸಾಮಗ್ರಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಜತೆಗೆ ಕಟ್ಟುನಿಟ್ಟಿನ ಕ್ರಮ ಜರುಗಿಸಲು ಚುನಾವಣಾ ಆಯೋಗ ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net