

ಮಂಡ್ಯ: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಮಾ.3ರಂದು ಬೆಳಗ್ಗೆ 9.30ಕ್ಕೆ ಮಂಡ್ಯ ವಿಶ್ವವಿದ್ಯಾನಿಲಯದ ಆವರಣದಲ್ಲಿ ರಾಜ್ಯಮಟ್ಟದ ಶೈಕ್ಷಣಿಕ ಅಧಿವೇಶನ, ಮಾತೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸರ್ವ ಸದಸ್ಯರ ಸಭೆ ಆಯೋಜಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಕೆ.ನಾಗೇಶ್ ತಿಳಿಸಿದರು.
ಶೈಕ್ಷಣಿಕ ಅಧಿವೇಶನದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭಾಗವಹಿಸಲಿದ್ದಾರೆ. ಸಮಾರಂಭದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ನೆರವೇರಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೇರಿದಂತೆ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ಅಧಿವೇಶನದ ದಿಕ್ಸೂಚಿ ಭಾಷಣ ಮಾಡಲಿದ್ದು, ಜಿಲ್ಲಾಧಿಕಾರಿ ಡಾ.ಕುಮಾರ ಶೈಕ್ಷಣಿಕ ಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಸಭೆಯಲ್ಲಿ ಶಿಕ್ಷಕರ ಪ್ರಮುಖ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲಾಗುವುದು. ಅಧಿವೇಶನದಲ್ಲಿ 5000ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಉಪಾಧ್ಯಕ್ಷ ಆರ್.ಮಾರುತೇಶ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ, ಸಂಘಟನಾ ಕಾರ್ಯದರ್ಶಿ ಟಿ.ಪ್ರಮೀಳಾ, ಜಿಲ್ಲಾಧ್ಯಕ್ಷ ಜೆ.ವೈ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಎ.ಚಿಕ್ಕೇಗೌಡ, ಸಿದ್ದರಾಮು, ರವಿಶಂಕರ್, ರುದ್ರೇಶ್ ಇತರರಿದ್ದರು.