ಚಿಕ್ಕಬಳ್ಳಾಪುರ: ಡೆಂಗ್ಯೂ ಸೋಲಿಸಲು ಹೆಜ್ಜೆಗಳು ಪರಿಶೀಲಿಸಿ, ಸ್ವಚ್ಛಗೊಳಿಸಿ ಮುಚ್ಚಿಡಿ ಎಂಬ ಘೋಷ ವಾಕ್ಯದೊಂದಿಗೆ ಮೇ 16 ರಂದು ರಾಷ್ಟ್ರೀಯ ಡೆಂಗ್ಯೂ ದಿನ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯು ಕೈಗೊಂಡಿದೆ.
ಎಲ್ಲೆಡೆ ಮಳೆ ಬೀಳುತ್ತಿರುವುದರಿಂದ ಆರೋಗ್ಯದ ಸಮಸ್ಯೆಗಳು ಹೆಚ್ಚಾಗುವ ಆತಂಕವಿದೆ. ಎಲ್ಲೆಂದರಲ್ಲಿ ನೀರು ನಿಂತಾಗ ಡೆಂಗ್ಯೂ ರೋಗಗಳು ಹರಡುತ್ತವೆ. ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುತ್ತದೆ. ಇದಕ್ಕೆ ಸುತ್ತಲಿನ ಸ್ಥಳದಲ್ಲಿ ನೈರ್ಮಲ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದೆ.
ಡೆಂಗ್ಯೂ ಜ್ವರವು ವೈರಸ್ನಿಂದ ಉಂಟಾಗುವ ಕಾಯಿಲೆ. ಇದು ಸೋಂಕು ಹೊಂದಿದ ಈಡೀಸ್ ಈಜಿಪ್ಟೈ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಮನೆಗಳಲ್ಲಿ ಶೇಖರಿಸಿಡುವ ಡ್ರಂ, ಬ್ಯಾರಲ್, ಸಿಮೆಂಟ್ ತೊಟ್ಟಿ, ಮಡಿಕೆ ಹಾಗೂ ಬಿಸಾಡಿರುವ ತೆಂಗಿನ ಚಿಪ್ಪು, ಒಡೆದ ಬಾಟಲಿ ಹಾಗೂ ಟೈರ್ಗಳಲ್ಲಿ ಶೇಖರವಾಗುವ ಶುದ್ದ ನೀರಿನಲಿ ್ಲ ಸಾಮಾನ್ಯವಾಗಿ ಸಂತಾನಾಭಿವೃದ್ದಿ ಮಾಡುತ್ತವೆ. ಹಗಲು ಹೊತ್ತಿನಲ್ಲಿ ಮಾತ್ರ ಮನುಷ್ಯರನ್ನು ಕಚ್ಚುತ್ತವೆ ಎಂದು ತಿಳಿಸಿದೆ.
ಡೆಂಗ್ಯೂ ರೋಗಕ್ಕೆ ತುತ್ತಾದವರಲ್ಲಿ ಇದ್ದಕ್ಕಿದಂತೆ ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗದಲ್ಲಿ ತೀವ್ರ ನೋವು, ಮಾಂಸಖಂಡಗಳಲ್ಲಿ ಮತ್ತು ಕೀಲುಗಳಲ್ಲಿ ವಿಪರೀತ ನೋವು, ತೀವ್ರ ಸ್ಥಿತಿಯಲ್ಲಿ ಬಾಯಿ, ಮೂಗು ಮತ್ತು ವಸಡುಗಳಿಂದ ರಕ್ತಸ್ರಾವ ಹಾಗೂ ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವ ಗುರುತುಗಳು ಕಾಣಿಸಿಕೊಳ್ಳುತ್ತವೆ. ಇಂತಹ ಲಕ್ಷಣಗಳು ಕಂಡು ಬಂದ ತಕ್ಷಣ ವೈದ್ಯರ ಬಳಿ ಚಿಕಿತ್ಸೆ ಪಡೆಯಬೇಕು ಎಂದು ಸಲಹೆ ನೀಡಿದೆ.
