ಲಖನೌ: ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅಭ್ಯರ್ಥಿಗಳು ಮತಬೇಟೆಯಲ್ಲಿ ತೊಡಗಿದ್ದಾರೆ. ಇತ್ತ ಬಿಜೆಪಿ ನಡೆಸುತ್ತಿದ್ದ ರ್‍ಯಾಲಿಯನ್ನು ಗುರಿಯಾಗಿಸಿ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿ ಹಾನಿಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ.
ಮುಜಾಫರ್‌ನಗರ ಅಭ್ಯರ್ಥಿ ಕೇಂದ್ರ ಸಚಿವ ಸಂಜೀವ್ ಬಲ್ಯಾನ್ ಅವರನ್ನು ಗುರಿಯಾಗಿಸಿಕೊಂಡು ಕಲ್ಲುತೂರಾಟ ನಡೆದಿದ್ದು, ದುಷ್ಕರ್ಮಿಗಳು ಹಲವಾರು ಕಾರುಗಳನ್ನು ಹಾನಿಗೊಳಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸತ್ಯನಾರಾಯಣ ಪ್ರಜಾಪತ್, ಬಿಜೆಪಿ ಅಭ್ಯರ್ಥಿ ಮಧಕರಿಂಪುರ ಗ್ರಾಮದಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಕೆಲವು ಕಿಡಿಗೇಡಿಗಳು ರ್‍ಯಾಲಿಯನ್ನು ಗುರಿಯಾಗಿಸಿ ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಾಟ ನಡೆಸಿದ ಬಳಿಕ ಕಿಡಿಗೇಡಿಗಳು ಘೋಷಣೆಗಳನ್ನು ಕೂಗಿ ಪರಾರಿಯಾಗಿದ್ದಾರೆ. ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿದ್ದು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸತ್ಯನಾರಾಯಣ ಪ್ರಜಾಪತ್ ತಿಳಿಸಿದ್ದಾರೆ.