ಚನ್ನರಾಯಪಟ್ಟಣ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲೂಕು ಘಟಕದ ಸದಸ್ಯರು ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಮಂಗಳವಾರ ಮುಷ್ಕರ ಆರಂಭಿಸಿದರು.
ಕೇಂದ್ರ ಸಂಘದ ಆದೇಶದ ಮೇರೆಗೆ 2ನೇ ಹಂತದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದ್ದು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಸಂಘದ ತಾಲೂಕು ಅಧ್ಯಕ್ಷ ಬಿ.ಕೆ.ನವೀನ್ ಕುಮಾರ್ ಮಾತನಾಡಿ, ನಮ್ಮ ಬೇಡಿಕೆಗಳಿಗೆ ರಾಜ್ಯ ಸರ್ಕಾರದಿಂದ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಈಗ ತಾಲೂಕು ಹಂತದಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ. ಫೆ.12ರವರೆಗೂ ಈ ಪ್ರತಿಭಟನೆ ಮುಂದುವರಿಯಲಿದ್ದು, ರಾಜ್ಯ ಸಂಘದ ಸೂಚನೆ ಬಳಿಕ ಮುಂದಿನ ನಿರ್ಧಾರ ಮಾಡಲಾಗುವುದು ಎಂದರು.
ಅಂತರ ಜಿಲ್ಲಾ ವರ್ಗಾವಣೆಯೊಂದಿಗೆ ಇತರ ಎಲ್ಲ ಇಲಾಖೆಯಲ್ಲಿ ಇರುವಂತೆ ಕಂದಾಯ ಇಲಾಖೆಗೂ ವರ್ಗಾವಣೆ ನೀತಿ ರೂಪಿಸ ಬೇಕು. ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೌಲಭ್ಯ ಕಲ್ಪಿಸಬೇಕು. ಸುಸಜ್ಜಿತ ಕಚೇರಿ ಸಹಿತ ಮೂಲಸೌಲಭ್ಯ ಕಲ್ಪಿಸಬೇಕು. ಜೀವಹಾನಿಗೊಳಗಾಗುವ ಗ್ರಾಮ ಆಡಳಿತ ಅಧಿಕಾರಿ ಕುಟುಂಬಕ್ಕೆ ಪರಿಹಾರ, ಪ್ರಯಾಣ ಭತ್ಯೆ ಹೆಚ್ಚಿಸಬೇಕು. ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಿ ಆದೇಶ ನೀಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳುಳ್ಳ ಮನವಿ ಪತ್ರವನ್ನು ಶಾಸಕ ಸಿ.ಎನ್. ಬಾಲಕೃಷ್ಣ ಅವರಿಗೆ ಸಲ್ಲಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ಸಿ.ಎನ್.ಬಾಲಕೃಷ್ಣ, ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಯನ್ನು ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲಾಗುವುದು ಎಂದರು.
ಟಿಎಪಿಸಿಎಂಎಸ್‌ನ ಅಧ್ಯಕ್ಷ ಎಂ.ಆರ್.ಅನಿಲ್ ಕುಮಾರ್, ತಹಸೀಲ್ದಾರ್ ವಿ.ಎಸ್.ನವೀನ್ ಕುಮಾರ್, ಉಪ ತಹಸೀಲ್ದಾರ್ ಮೋಹನ್, ಶಿರಸ್ತೇದಾರ್ ಪವನ್, ಕಸಬಾ ರಾಜಸ್ವ ನಿರೀಕ್ಷಕ ಎಂ.ಆರ್.ಮಂಜುನಾಥ್, ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲೂಕು ಗೌರವಾಧ್ಯಕ್ಷ ಚಂದ್ರ ಭೂಷಣ್, ಉಪಾಧ್ಯಕ್ಷ ಪ್ರವೀಣ್, ಕಾರ್ಯದರ್ಶಿ ಲಕ್ಷ್ಮೀಕಾಂತ್, ಖಜಾಂಚಿ ಶ್ರೀಧರ್ ಇತರರು ಭಾಗವಹಿಸಿದ್ದರು.