ಬೆಳಗಾವಿ: ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿನಿ ಕೊಲೆ ಪ್ರಕರಣ ಖಂಡಿಸಿ ಬುಧವಾರ ನಗರದ ಕೆಎಲ್‌ಇ ಆಸ್ಪತ್ರೆಯಿಂದ ಚನ್ನಮ್ಮ ವೃತ್ತದವರೆಗೆ ಕೆಎಲ್‌ಇ ಸಂಸ್ಥೆಯ ಜೆಎನ್‌ಎಂಸಿ, ಬಿಮ್ಸ್ ವಿದ್ಯಾರ್ಥಿಗಳು, ವೈದ್ಯರು ಪ್ರತಿಭಟನಾ ರ‌್ಯಾಲಿ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.
ಕೊಲ್ಕತಾದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಸಭಾಂಗಣದಲ್ಲಿ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಮಾಡಿರುವವರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ವೈದ್ಯರು, ವೈದ್ಯ ವಿದ್ಯಾರ್ಥಿಗಳು ಸೇರಿ ಆಸ್ಪತ್ರೆ, ಮೆಡಿಕಲ್ ಕಾಲೇಜುಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ರಕ್ಷಣೆಗೆ ಸರ್ಕಾರಿ ಕಠಿಣ ಕಾನೂನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಕೊಲೆಯಾದ ವಿದ್ಯಾರ್ಥಿನಿ ಕುಟುಂಬಕ್ಕೆ ಸರ್ಕಾರ ಸೂಕ್ತ ರಕ್ಷಣೆ ನೀಡುವ ಜತೆಗೆ ಅವರ ಕುಟುಂಬಕ್ಕೆ ಪರಿಹಾರ ನೀಡಬೇಕು. ದುಷ್ಕರ್ಮಿಗಳಿಗೆ ಸಾರ್ವಜನಿಕವಾಗಿ ಶಿಕ್ಷೆಗೆ ಒಳಪಡಿಸಬೇಕು. ಸುಪ್ರೀಂಕೋರ್ಟ್ ಮಧ್ಯಪ್ರವೇಶಿಸಿ ಉನ್ನತ ಮಟ್ಟದ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು. ಸರ್ಕಾರಿ ಮತ್ತು ಖಾಸಗಿ ವೈದ್ಯರಿಗೆ, ವೈದ್ಯಕೀಯ ವಿದ್ಯಾರ್ಥಿಗಳಿಗೆ, ಸಿಬ್ಬಂದಿಗೆ ಸೂಕ್ತ ರಕ್ಷಣೆ ನೀಡದಿದ್ದರೆ ಕೆಲಸ ನಿರ್ವಹಿಸುವುದು ಕಷ್ಟವಾಗಲಿದೆ. ಅಲ್ಲದೆ, ವೈದ್ಯಕೀಯ ಸೇವೆ ಸಲ್ಲಿಸಲು ವೈದ್ಯರು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಸರ್ಕಾರಗಳು ಎಚ್ಚೆತ್ತುಕೊಳ್ಳಬೇಕು. ಮೃತ ವಿದ್ಯಾರ್ಥಿನಿಗೆ ನ್ಯಾಯ ಸಿಗುವವರೆಗೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಜೆಎನ್‌ಎಂಸಿ ಪ್ರಾಚಾರ್ಯ ಡಾ.ಎನ್.ಎಸ್.ಮಹಾಂತಶೆಟ್ಟಿ, ಡಾ.ಭಾಗ್ಯಶ್ರೀ ಪಾಟೀಲ, ಡಾ.ಜ್ಯೋತಿ ಹಟ್ಟಿಹೊಳಿ, ಡಾ.ಸಂತೋಶ ಪಾಟೀಲ, ಡಾ.ವಿರೂಪಾಕ್ಷ ಹಟ್ಟಿಹೊಳಿ, ಡಾ.ಎಂ.ಬಿ.ಬೆಲ್ಲದ, ಡಾ.ವೀರೇಶ ಮಾನವಿ, ಡಾ.ಮಾಧವ ಪ್ರಭು, ಡಾ.ಶಿವಾನಂದ ಬಿ., ಡಾ.ಅಮಿತ್ ಪಾಟೀಲ, ಡಾ.ಆದಿತ್ಯ ಪಾಟೀಲ, ಡಾ.ರಕ್ಷಿತ ಮುನವಳ್ಳಿ, ಡಾ. ಯಶ್ ಪಾಟೀಲ ಇತರರಿದ್ದರು.