

ಬೆಂಗಳೂರು: ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳೇ ನೀವಿನ್ನೂ ಎರಡು ವಾರದವರೆಗೆ ಶಾಲಾ-ಕಾಲೇಜುಗಳಿಗೆ ಭೇಟಿ ನೀಡುವಂತಿಲ್ಲ! ಹೀಗಂತ ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.
ರಾಜ್ಯದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲಾ-ಕಾಲೇಜುಗಳನ್ನು ಪ್ರಾರಂಭಿಸುವ ಬಗ್ಗೆ ಕೇಂದ್ರ ಸರ್ಕಾರದ ಗೃಹ ಮಂತ್ರಾಲಯದ ಮಾರ್ಗಸೂಚಿಯಂತೆ ಸೆ.21ರಿಂದ ಕಂಟೋನ್ಮೆಂಟ್ ಜೋನ್ ಹೊರತುಪಡಿಸಿ 9 ರಿಂದ 12ನೇ ತರಗತಿಗಳನ್ನು ತೆರೆದು ವಿದ್ಯಾರ್ಥಿಗಳಿಗೆ ಸಂದೇಹ ಪರಿಹಾರಕ್ಕಾಗಿ ಶಾಲೆಗೆ ಬೇಟಿ ನೀಡಲು ಅನುಮತಿ ನೀಡಲಾಗಿತ್ತು. ಆದರೆ, ರಾಜ್ಯದಲ್ಲಿ ಕರೊನಾ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಅಂತ್ಯದವರೆಗೆ ಶಾಲಾ-ಕಾಲೇಜುಗಳಿಗೆ ಭೇಟಿ ನೀಡದಿರಲು ವಿದ್ಯಾರ್ಥಿಗಳಿಗೆ ಇಲಾಖೆ ಸೂಚಿಸಿತ್ತು. ಇದೀಗ ಅ.15ರ ವರೆಗೆ ಮುಂದೂಡಲಾಗಿದೆ. ಇದನ್ನೂ ಓದಿರಿ ಶಾಲೆ ಪ್ರಾರಂಭವಾಗುವುದು ತಡವಾದಷ್ಟೂ ಬಾಲ್ಯ ವಿವಾಹಗಳು ಹೆಚ್ಚಾಗುತ್ತವೆ…!
ರಾಜ್ಯದಲ್ಲಿ ಪ್ರಸ್ತುತ ಹಂತದಲ್ಲಿಯೂ ಕರೊನಾ ಹಬ್ಬುತ್ತಿರುವ ಪ್ರಮಾಣ ಕಡಿಮೆಯಾಗದ ಕಾರಣ ಈಗಿನ ಪರಿಸ್ಥಿತಿಯಲ್ಲಿ ಶಾಲೆಗಳಿಗೆ ವಿದ್ಯಾರ್ಥಿಗಳು ಬರುವುದು ಕ್ಷೇಮವಲ್ಲ ಎಂಬ ಅಭಿಪ್ರಾಯ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಪ್ರೌಢಶಾಲೆ ಹಾಗೂ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಅ.15ರ ವರೆಗೆ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಲು ಅನುಮತಿ ನೀಡದಿರಲು ತೀರ್ಮಾನಿಸಲಾಗಿದೆ. ಪರಿಸ್ಥಿತಿ ಅವಲೋಕನೆಯ ನಂತರ ಮುಂದಿನ ತೀರ್ಮಾನ ತಿಳಿಸಲಾಗವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.