ಶಿವಮೊಗ್ಗ: ವಿದ್ಯಾರ್ಥಿಗಳು ಸಂಶೋಧನಾ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಡಿವಿಎಸ್ ಸಹ ಕಾರ್ಯದರ್ಶಿ ಡಾ. ಸತೀಶ್‌ಕುಮಾರ್ ಶೆಟ್ಟಿ ಹೇಳಿದರು.
ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಸಭಾಂಗಣದಲ್ಲಿ ಇತಿಹಾಸ, ರಾಜ್ಯಶಾಸ್ತ್ರ ಮತ್ತು ಸಮಾಜಶಾಸ್ತ್ರ ವಿಭಾಗದ ಸಹಯೋಗದಲ್ಲಿ ಆಯೋಜಿಸಿದ್ದ ಸಂಶೋಧನೆ ಕುರಿತ ಕಿರುಪ್ರಬಂಧ ಬರೆಯುವ ಪರಿಕಲ್ಪನೆಗಳು ಮತ್ತು ವಿಧಾನಗಳು ಕುರಿತ ವಿಶೇಷ ಉಪನ್ಯಾಸ ಉದ್ಘಾಟಿಸಿ ಮಾತನಾಡಿ, ವಿವಿಧ ವಿಷಯಗಳಲ್ಲಿ ಸಂಶೋಧನೆ ನಡೆಸಲು ಅವಕಾಶಗಳಿವೆ. ವಿದ್ಯಾರ್ಥಿಗಳು ಹೊಸ ಅವಕಾಶಗಳನ್ನು ಹುಡುಕಬೇಕು ಎಂದು ತಿಳಿಸಿದರು.
ಡಿವಿಎಸ್ ಉಪಾಧ್ಯಕ್ಷ ಎಸ್.ಪಿ.ದಿನೇಶ್ ಮಾತನಾಡಿ, ವಿದ್ಯಾರ್ಥಿಗಳು ಸಂಶೋಧನೆ ನಡೆಸುವಾಗ ಸ್ಪಷ್ಟ ಮಾಹಿತಿ ಹೊಂದಿರಬೇಕು. ನೈಜ ಅಂಶಗಳನ್ನು ಒಳಗೊಂಡು, ವಸ್ತುನಿಷ್ಠ ಸಂಶೋಧನೆ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯ ಪ್ರಾಚಾರ್ಯ ಡಾ. ಜಿ.ಮಧು ಮಾತನಾಡಿ, ದೇಶದ ಪ್ರಗತಿಯಲ್ಲಿ ಸಂಶೋಧನಾ ಕ್ಷೇತ್ರದ ಪಾತ್ರ ಅಪಾರ. ದೇಶದ ಪ್ರಗತಿಗೆ ಸಂಶೋಧನೆಯಲ್ಲಿನ ಅಂಶಗಳು ಮೂಲ ವಿಷಯವಾಗಿವೆ ಎಂದರು.
ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್, ಇತಿಹಾಸ ವಿಭಾಗದ ಮುಖ್ಯಸ್ಥೆ ಎಂ.ರೂಪಾ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಆರ್.ಸುರೇಶ್, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಜಿ.ಎಸ್.ಪರಮೇಶ್ ಇತರರಿದ್ದರು.