ವಿದ್ಯಾರ್ಥಿಗಳಿಗೆ ಪರೀಕ್ಷೆ ಬೇಡ

5
Published on

ಮೈಸೂರು: ಕರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸದೆ ಎಲ್ಲ ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡಬೇಕು ಹಾಗೂ ಆನ್‌ಲೈನ್ ಶಿಕ್ಷಣ ಕೈ ಬಿಡಬೇಕು ಎಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದಿಂದ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.

ನಗರದ ಶ್ರೀ ಜಯಚಾಮರಾಜ ಒಡೆಯರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ಕಾರ್ಯಕರ್ತರು, ಯಾವುದೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರಸಕ್ತ ವರ್ಷ ಪರೀಕ್ಷೆ ನಡೆಸಬಾರದೆಂದು ಒತ್ತಾಯಿಸಿದರು.

ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಮಾತನಾಡಿ, ಕರೊನಾ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯುವ ವಾತಾವರಣ ಇಲ್ಲ. ಹೀಗಾಗಿ ಪರೀಕ್ಷೆ ನಡೆಸದೆ ಉತ್ತೀರ್ಣ ಮಾಡಬೇಕು. ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯಕ್ಕೆ ಅನುಗುಣವಾಗಿ ಅವರನ್ನು ತೇರ್ಗಡೆ ಮಾಡಬೇಕು. ಒಂದು ವೇಳೆ ಪರೀಕ್ಷೆ ನಡೆಸಿದರೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಕರೊನಾ ಸಂದರ್ಭದಲ್ಲಿ ಕೆಲವು ವಿದ್ಯಾಸಂಸ್ಥೆಗಳು ಆನ್‌ಲೈನ್ ಶಿಕ್ಷಣ ಪ್ರಾರಂಭಿಸಲು ಸಿದ್ಧತೆ ಮಾಡಿಕೊಂಡಿವೆ. ಆನ್‌ಲೈನ್ ಶಿಕ್ಷಣ ಸಾಕಷ್ಟು ವಿದ್ಯಾರ್ಥಿಗಳಿಗೆ ಅರ್ಥವಾಗುವುದಿಲ್ಲ.ಈ ಶಿಕ್ಷಣಕ್ಕೆ ಬೇಕಾದ ಸೌಲಭ್ಯಗಳು ಎಲ್ಲರ ಬಳಿ ಇರುವುದಿಲ್ಲ. ವಿಶೇಷವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತೀವ್ರ ಸಮಸ್ಯೆಗೆ ಸಿಲುಕಲಿದ್ದಾರೆ. ಹಳ್ಳಿಗಳಲ್ಲಿ ವಿದ್ಯುತ್ ಸೌಲಭ್ಯ ಇರುವುದಿಲ್ಲ. ಹೀಗಾಗಿ ಆನ್‌ಲೈನ್ ಶಿಕ್ಷಣ ಗ್ರಾಮೀಣ ಭಾಗಕ್ಕೆ ಸರಿ ಹೊಂದುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಕನ್ನಡಪರ ಹೋರಾಟಗಾರ ಮೂಗೂರು ನಂಜುಂಡಸ್ವಾಮಿ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net