More

    ವಾಹನ ಸಂಚಾರ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ

    ಹನೂರು: ಸಮರ್ಪಕ ಬಸ್ ಸೌಕರ್ಯವನ್ನು ಒದಗಿಸುವಂತೆ ಒತ್ತಾಯಿಸಿ ಗುರುವಾರ ಹನೂರಿನಲ್ಲಿ ನೂರಾರು ವಿದ್ಯಾರ್ಥಿಗಳು ದಿಢೀರ್ ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.

    ಹನೂರು ಭಾಗದ ವಿವಿಧ ಗ್ರಾಮಗಳಿಂದ ಸಾವಿರಾರು ವಿದ್ಯಾರ್ಥಿಗಳು ಕೊಳ್ಳೇಗಾಲದ ಕಾಲೇಜುಗಳಿಗೆ ತೆರಳುತ್ತಿದ್ದೇವೆ. ಆದರೆ ಕಳೆದ ಒಂದೂವರೆ ತಿಂಗಳಿನಿಂದ ಬೆಳಗಿನ ಸಮಯದಲ್ಲಿ ಸಮರ್ಪಕ ಬಸ್ ಸೇವೆ ಲಭ್ಯವಿಲ್ಲ. ಇದರಿಂದ ನಿಗದಿತ ವೇಳೆಗೆ ತರಗತಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಇನ್ನೇನು ಪರೀಕ್ಷೆಗಳು ಸಮೀಪಿಸುತ್ತಿದ್ದು, ಪಾಠ, ಪ್ರವಚನಗಳಿಂದ ವಂಚಿತರಾಗುತ್ತಿದ್ದು, ತುಂಬ ತೊಂದರೆ ಅನುಭವಿಸುತ್ತಿದ್ದೇವೆ. ಬಸ್ ಸೌಕರ್ಯ ಒದಗಿಸುವಂತೆ ಹನೂರು ಬಸ್ ನಿಲ್ದಾಣದ ಸಂಚಾರ ನಿಯಂತ್ರಣಾಧಿಕಾರಿ ಅವರನ್ನು ವಿಚಾರಿಸಿದರೆ ಬೇಜವಾಬ್ದಾರಿಯಿಂದ ಉತ್ತರಿಸುತ್ತಾರೆ. ಈ ಸಂಬಂಧ ಈಗಾಗಲೇ ಹಲವು ಬಾರಿ ಪ್ರತಿಭಟನೆ ನಡೆಸಿದ್ದು, ಘಟಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಗಿದೆ. ಆದರೂ ಆಗಾಗ್ಗೆ ಈ ಸಮಸ್ಯೆ ಎದುರಾಗುತ್ತಲೇ ಇದೆ. ಇದರಿಂದ ಬೇಸತ್ತು ಪ್ರತಿಭಟನೆ ನಡೆಸಲಾಗುತ್ತಿದೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳಕ್ಕಾಗಮಿಸಿ ಸಮಸ್ಯೆಯನ್ನು ಬಗೆಹರಿಸಬೇಕು. ಇಲ್ಲವಾದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

    ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸ್ ಸಿಬ್ಬಂದಿ ಸಂಚಾರ ನಿಯಂತ್ರಣಾಧಿಕಾರಿಗೆ ಅಗತ್ಯ ಬಸ್ ಸೌಕರ್ಯ ಒದಗಿಸಲು ಅಗತ್ಯ ಕ್ರಮವಹಿಸುವಂತೆ ಸೂಚಿಸಲಾಗುವುದು ಎಂದರು. ಆದರೆ ಇದಕ್ಕೊಪ್ಪದ ವಿದ್ಯಾರ್ಥಿಗಳು ಪ್ರತಿಭಟನೆ ವೇಳೆ ಭರವಸೆ ನೀಡುತ್ತಾರೆ. ಆದರೆ ಕಾರ್ಯರೂಪಕ್ಕೆ ಬರುವುದಿಲ್ಲ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕಾಗಮಿಸಬೇಕು ಎಂದು ಪಟ್ಟು ಹಿಡಿದು ಬಸ್ ಸಂಚಾರ ತಡೆದರು. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆಯಿತು.

    ಬಳಿಕ ಸಬ್ ಇನ್‌ಸ್ಪೆಕ್ಟರ್ ರಿಹಾನಾ ಬಾನು ಸ್ಥಳಕ್ಕಾಗಮಿಸಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಶುಕ್ರವಾರದಿಂದ ನಿಗದಿತ ವೇಳೆಗೆ ಸಮರ್ಪಕ ಬಸ್ ಸೌಕರ್ಯ ಒದಗಿಸುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಕೈ ಬಿಡಲಾಯಿತು. ಸುಮಾರು 1 ಗಂಟೆ ನಡೆದ ಪ್ರತಿಭಟನೆಯಿಂದ ಪ್ರಯಾಣಿಕರು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts