ದೇವದುರ್ಗ: ವಿದ್ಯಾರ್ಥಿಗಳು ಟಿವಿ, ಮೊಬೈಲ್, ಸಾಮಾಜಿಕ ಜಾಲತಾಣದ ಹಿಂದೆ ಬೀಳದೆ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಪ್ರಾಚಾರ್ಯ ಗರುಡವಾಹನ ಹೇಳಿದರು.
ಪಟ್ಟಣದ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಕಸಾಪದಿಂದ ಆಯೋಜಿಸಿದ್ದ ಪ್ರಬಂಧ ಹಾಗೂ ರಂಗೋಲಿ ಸ್ಪರ್ಧೆಗೆ ಚಾಲನೆ ನೀಡಿ ಶುಕ್ರವಾರ ಮಾತನಾಡಿದರು. ಸಾಮಾಜಿಕ ಜಾಲತಾಣ ಗೀಳಾಗಿ ಮಾರ್ಪಟ್ಟಿದೆ. ಮೊಬೈಲ್, ಟಿವಿ, ಸಾಮಾಜಿಕ ಜಾಲತಾಣಗಳನ್ನು ಜ್ಞಾನಾರ್ಜನೆಗಾಗಿ ಬಳಸಬೇಕೆ ವಿನಃ ಸಮಯ ಕಳೆಯಲು ಅಲ್ಲ. ಓದುವ ವಯಸ್ಸಿನಲ್ಲಿ ಸಮಯ ವ್ಯರ್ಥ ಮಾಡಬಾರದು ಎಂದರು.
ಕಸಾಪ ತಾಲೂಕು ಅಧ್ಯಕ್ಷ ಎಚ್.ಶಿವರಾಜ ಮಾತನಾಡಿ, ಯುವಕರು, ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಆಸಕ್ತಿ ಬೆಳೆಸಲು ಕಸಾಪ ನಡೆ ಯುವಜನತೆ ಕಡೆಗೆ, ಕನ್ನಡ ಶಾಲೆ ವಿದ್ಯಾರ್ಥಿಗಳೆಡೆ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ವಿದ್ಯಾರ್ಥಿಗಳು ಕಸಾಪ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದರು.
ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ, ಪುಸ್ತಕ ನೀಡಲಾಯಿತು. ಕಸಾಪ ತಾಲೂಕು ಸಂಘಟನಾ ಕಾರ್ಯದರ್ಶಿ ಶಿವರಾಜ್ ರುದ್ರಾಕ್ಷಿ, ಕಾರ್ಯಕಾರಿ ಸಮಿತಿ ಸದ್ಯರಾದ ಡಿ.ಶ್ರೀನಿವಾಸ್, ಗುಂಡುರಾವ್ ನಾಯಕ್ ಮಜ್ಜಗಿ ಇತರರಿದ್ದರು.