More

    ಸತತ ಪರಿಶ್ರಮದಿಂದ ಮಾತ್ರ ಸಾಧನೆ ಪ್ರಾಪ್ತಿ

    ನಾಪೋಕ್ಲು: ಸತತ ಪರಿಶ್ರಮದಿಂದ ಮಾತ್ರ ಸಾಧನೆ ಮಾಡಲು ಸಾಧ್ಯ. ಕ್ರೀಡೆ, ಶಿಕ್ಷಣ ಸೇರಿದಂತೆ ಯಾವುದೇ ವಿಭಾಗದಲ್ಲಿ ಸಾರ್ಥಕತೆ ಪಡೆಯಬೇಕಾದರೆ ಅವಿರಥ ಪರಿಶ್ರಮ ಪಡಬೇಕು. ಇದರಿಂದ ಯಶಸ್ಸು ಪಡೆಯಲು ಸಾಧ್ಯ ಎಂದು ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.

    ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಗುರುವಾರ ಆಯೋಜಿಸಿದ್ದ 2023-24ನೇ ಸಾಲಿನ ಸಾಂಸ್ಕೃತಿಕ ಕ್ರೀಡಾ ಮತ್ತು ವಿವಿಧ ಸಮಿತಿಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

    ವಿದ್ಯಾರ್ಥಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಸಂಪೂರ್ಣವಾಗಿ ನಿರ್ವಹಿಸಬೇಕು, ಆಗ ಸಾರ್ಥಕತೆ ಸಿಗುತ್ತದೆ. ಭಾವನೆಗಳ ಮೂಲಕ ದೇಶ ಕಟ್ಟಲು ಸಾಧ್ಯವಿಲ್ಲ. ದುಡಿಯುವ ವರ್ಗದಿಂದ ದೇಶ ಪ್ರಗತಿ ಕಾಣಲಿದೆ. ಮುಂದಿನ ಪೀಳಿಗೆಗೆ ಉತ್ತಮ ಭವಿಷ್ಯವನ್ನು ರೂಪಿಸುವ ಕೆಲಸವನ್ನು ಮಾಡಬೇಕಿದೆ ಎಂದರು.
    ಕೊಡಗು ವಿಶ್ವವಿದ್ಯಾಲಯದ ಕುಲಸಚಿವ ಡಾ.ಸೀನಪ್ಪ ಮಾತನಾಡಿ, ಉತ್ತಮ ಭವಿಷ್ಯಕ್ಕಾಗಿ ಮಕ್ಕಳಲ್ಲಿ ಬದಲಾವಣೆ ಆಗಬೇಕು. ವಿದ್ಯಾರ್ಥಿಗಳು ಇಷ್ಟಪಟ್ಟು ಓದಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಕರ್ನಾಟಕ ರಾಜ್ಯೋತ್ಸವದಂದು ಮಾತ್ರ ಭಾಷೆ, ಸಂಸ್ಕೃತಿಯ ಬಗ್ಗೆ ಅಭಿಮಾನ ತೋರಿಸಿದರೆ ಸಾಲದು. ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯ ಅಭಿವೃದ್ಧಿಗೆ ಪ್ರತಿಯೊಬ್ಬ ಕನ್ನಡಿಗರೂ ಕೈಜೋಡಿಸಬೇಕು ಎಂದರು.

    ಕೊಡಗು ವಿಶ್ವವಿದ್ಯಾಲಯದ ಅಡಿಯಲ್ಲಿ ಕಾನೂನು ಕಾಲೇಜು ಹಾಗೂ ಕ್ರೀಡೆಗೆ ಸಂಬಂಧಿಸಿದ ವಿಭಾಗಗಳನ್ನು ತೆರೆಯಲು ಶಾಸಕರು ಸಹಕರಿಸಬೇಕೆಂದು ಮನವಿ ಮಾಡಿದರು.

    ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಕಾವೇರಿ ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದ ನಮ್ಮ ರಾಷ್ಟ್ರದ ಮಾದರಿ ವ್ಯಕ್ತಿಗಳ ಗುಣ, ನಡತೆಯನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಪ್ರಜೆಯಾಗಬೇಕೆಂದು ಕಿವಿಮಾತು ಹೇಳಿದರು.

    ಐಕ್ಯುಎಸಿ ಸಂಚಾಲಕ ಎಚ್.ಎಸ್.ನಂದೀಶ್, ಸಾಂಸ್ಕೃತಿಕ ಸಮಿತಿ ಸಂಚಾಲಕ ಮನೋಜ್‌ಕುಮಾರ್, ಕ್ರೀಡಾ ಸಮಿತಿ ಸಂಚಾಲಕ ಕೆ.ಎಂ. ಮುದ್ದಪ್ಪ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಬೋಧಕ ಹಾಗೂ ಬೋಧಕೇತರರು, ವಿದ್ಯಾರ್ಥಿ ಸಮಿತಿ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts