ಗುಂಡ್ಲುಪೇಟೆ: ತಾಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಜನರ ಯಾವುದೇ ಕೆಲಸಗಳು ಆಗುತ್ತಿಲ್ಲ ಎಂದು ಆರೋಪಿಸಿ ಸಾಮೂಹಿಕ ನಾಯಕತ್ವದ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಬುಧವಾರ ಪಟ್ಟಣದ ತಾಲೂಕು ಕಚೇರಿ ಎದುರು ದಿಢೀರ್ ಪ್ರತಿಭಟನೆ ನಡೆಸಿದರು.

ಬಹುತೇಕ ಗ್ರಾಮ ಪಂಚಾಯಿತಿಗಳಿಗೆ ಕಾಯಂ ಪಿಡಿಒಗಳು ಇಲ್ಲದೆ ಸಾರ್ವಜನಿಕರ ಕೆಲಸಗಳು ಆಗುತ್ತಿಲ್ಲ. ಹೀಗಾಗಿ ಅಧಿಕಾರಿಗಳು ಸಕಾಲದಲ್ಲಿ ಕಚೇರಿಗೆ ಬರುತ್ತಿಲ್ಲ ಹಾಗೂ ನಿರ್ಲಕ್ಷ್ಯದಿಂದ ಇ-ಸ್ವತ್ತು ಸೇರಿದಂತೆ ಯಾವುದೇ ಕೆಲಸಗಳನ್ನು ಮಾಡುತ್ತಿಲ್ಲ. ಕೂಡಲೇ ತಾಲೂಕು ಪಂಚಾಯಿತಿ ಅಧಿಕಾರಿಗಳು ಬೇಜವಾಬ್ದಾರಿ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸ್ಥಳಕ್ಕೆ ಆಗಮಿಸಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಷಣ್ಮುಗ, ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಡಲಾಯಿತು.
ಸಂಘಟನೆ ತಾಲೂಕು ಅಧ್ಯಕ್ಷ ಲೋಕೇಶ್, ಪದಾಧಿಕಾರಿಗಳಾದ ಷಣ್ಮುಖಸ್ವಾಮಿ, ಗಣೇಶ್, ಸೋಮಶೇಖರ, ಪಾಪಣ್ಣ, ಸುದರ್ಶನ್, ಮಂಜು, ಅರಸಶೆಟ್ಟಿ ಇತರರು ಇದ್ದರು.