More

    ಎಂಎಲ್‌ಸಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿ

    ಚಿಕ್ಕಮಗಳೂರು: ಜೂನ್ ತಿಂಗಳಲ್ಲಿ ನಡೆಯಲಿರುವ ನೈಋತ್ಯ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಬೇಕು ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವಕ್ತಾರ ಎಂ.ರಮೇಶ್ ಶೆಟ್ಟಿ ಮನವಿ ಮಾಡಿದರು.

    ನೈಋತ್ಯ ಶಿಕ್ಷಕರು ಹಾಗೂ ಪದವೀಧರರ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕಾಂಗ್ರೆಸ್‌ನ 15 ಶಾಸಕರಿದ್ದಾರೆ. ಪರಿಷತ್ ಚುನಾವಣೆಯಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿದಲ್ಲಿ ಸಮಸ್ಯೆಗಳನ್ನು ಪರಿಹರಿಸಲು ಅವಕಾಶವಾಗುತ್ತದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಜಿಲ್ಲೆಯ ಐದೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಶಾಸಕರಿದ್ದಾರೆ. ಇವರು ಗೆದ್ದಿರುವುದು ಪಕ್ಷದ ಕಾರ್ಯಕರ್ತರು, ಮುಖಂಡರ ಪರಿಶ್ರಮದಿಂದ. ಆದರೆ ಕಾಂಗ್ರೆಸ್ ಗೆದ್ದಿರುವುದು ನನ್ನ ಬೆಂಬಲದಿಂದ ಎಂದು ವಿಧಾನಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಹೇಳುತ್ತಿರುವುದು ಹಾಸ್ಯಾಸ್ಪದ ಎಂದರು.
    ಈ ಬಾರಿ ವಿಧಾನಪರಿಷತ್ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಬೋಜೇಗೌಡ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದು ನಾನೇ ಎಂದು ಹೇಳುತ್ತ ಕಾಂಗ್ರೆಸ್ ಮುಖಂಡರ ಮನೆ ಮುಂದೆ ನಿಂತು ಪೋಸ್ ಕೊಡುತ್ತಿದ್ದಾರೆ. ಇನ್ನೊಂದೆಡೆ ಬಿಜೆಪಿ-ಜೆಡಿಎಸ್ ಹೊಂದಾಣಿಕೆಯಿಂದಾಗಿ ಅಭ್ಯರ್ಥಿಯಾಗಲು ಆ ಪಕ್ಷಗಳ ಮುಖಂಡರ ಮನೆಗೆ ಎಡತಾಕುತ್ತಿದ್ದಾರೆ. ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸದ ಇವರನ್ನು ಈ ಬಾರಿ ತಕ್ಕಪಾಠ ಕಲಿಸಲಿದ್ದಾರೆ ಎಂದು ಹೇಳಿದರು.
    ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಜಿಲ್ಲೆಯ ಎಲ್ಲ ಅಭ್ಯರ್ಥಿಗಳು ಸೋತರೂ ಬೋಜೇಗೌಡ ಹಾಲಿನ ಅಭಿಷೇಕ ಮಾಡಿಸಿಕೊಂಡಿದ್ದರು. ಇದು ಯಾವ ಸಾಧನೆಗಾಗಿ ಎಂದು ಪ್ರಶ್ನಿಸಿದರು. ಕಾಂಗ್ರೆಸ್‌ನಿಂದ ಗೆದ್ದವರು ತಮ್ಮ ಸಾಮರ್ಥ್ಯದಿಂದಲೇ ಹೊರತು ಬೋಜೇಗೌಡ ಅವರ ಬೆಂಬಲದಿಂದ ಅಲ್ಲ ಎಂದರು.
    ಪವಿತ್ರವಾಗಿದ್ದ ನೈಋತ್ಯ ಶಿಕ್ಷಕರ ಕ್ಷೇತ್ರ ಕಳೆದ ಬಾರಿ ಚುನಾವಣೆಯಲ್ಲಿ ಎಸ್.ಎಲ್.ಬೋಜೇಗೌಡರ ನಿಲುವಿನಿಂದ ಅಪವಿತ್ರಗೊಂಡಿದೆ. ಕಾಂಗ್ರೆಸ್ ಪಕ್ಷದ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಈ ಕ್ಷೇತ್ರವನ್ನು ಪವಿತ್ರಗೊಳಿಸಲು ಶಿಕ್ಷಕರು ಸಂಕಲ್ಪ ಮಾಡಬೇಕು ಎಂದರು.
    ಬೋಜೇಗೌಡ ಅವರು ಯಾವಾಗಲೂ ಅಂದು ಸಿಎಂ ಆಗಿದ್ದ ಎಚ್.ಡಿ.ಕುಮಾರಸ್ವಾಮಿ ಅವರ ಹಿಂದೆಯೇ ಓಡಾಡುತ್ತಿದ್ದರು. ಇದನ್ನು ಗಮನಿಸಿದ ಶಿಕ್ಷಕ ಸಮೂಹ ಬೋಜೇಗೌಡ ಗೆದ್ದರೆ ನಮ್ಮೆಲ್ಲ ಸಮಸ್ಯೆಗಳನ್ನು ಬಗೆಹರಿಸುತ್ತಾರೆ ಎಂಬ ಆಶಾಭಾವನೆಯಿಂದ ಮತ ನೀಡಿದ್ದರು. ಆದರೆ ಬೋಜೇಗೌಡರ ತಟಸ್ಥ ನಿಲುವಿನಿಂದ ಶಿಕ್ಷಕರು ಭ್ರಮನಿರಸನಗೊಂಡಿದ್ದಾರೆ. ಹಾಗಾಗಿ ಈ ಚುನಾವಣೆಯಲ್ಲಿ ಪಾಠ ಕಲಿಸಲಿದ್ದಾರೆ ಎಂದರು.
    ಕಾಂಗ್ರೆಸ್ ಪ್ರಮುಖರಾದ ಶಿವಮೊಗ್ಗದ ನಂದಕುಮಾರ್, ಎಲ್.ಹೇಮಂತ್, ಫಣಿರಾಜ್, ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ವಕ್ತಾರ ರೂಬಿನ್ ಮೊಸಸ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts