More

    ಎಚ್‌ಡಿಕೆ ನಾಯಕತ್ವ ಉಳಿವಿಗೆ ಎನ್‌ಡಿಎ ಬೆಂಬಲಿಸಿ

    ಕೆ.ಆರ್.ನಗರ: ದೇಶದ ಅಭಿವೃದ್ಧಿ ಮತ್ತು ಎಚ್.ಡಿ.ಕುಮಾರಸ್ವಾಮಿ ನಾಯಕತ್ವದ ಉಳಿವಿಗಾಗಿ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವನ್ನು ಬೆಂಬಲಿಸಬೇಕು ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಹೇಳಿದರು.


    ಪಟ್ಟಣದ ಎಚ್.ಡಿ.ದೇವೇಗೌಡ ಸಮುದಾಯ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು, ಕಾರ್ಯಕರ್ತರ ಸಮನ್ವಯ ಸಭೆಯಲ್ಲಿ ಮಾತನಾಡಿ, ಕುಮಾರಸ್ವಾಮಿ ಚುನಾಯಿತರಾದರೆ ಕೇಂದ್ರದಲ್ಲಿ ಕೃಷಿ ಸಚಿವರಾಗಿ ಬಡವರು ಮತ್ತು ರೈತರ ಸಮಸ್ಯೆಗಳಿಗೆ ಧ್ವನಿಯಾಗಲಿದ್ದಾರೆ ಎಂದು ತಿಳಿಸಿದರು.


    ಕಾಂಗ್ರೆಸ್ ಪಕ್ಷವನ್ನು ಬುಡ ಸಮೇತ ಕಿತ್ತೊಗೆಯಲು ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಗತ್ಯವಾಗಿದ್ದು ಬಿಜೆಪಿ ಕಾರ್ಯಕರ್ತರಿಗೆ ಕಾಂಗ್ರೆಸ್‌ನವರು ಮಂಕುಬೂದಿ ಎರಚಲಿದ್ದು ಇದಕ್ಕೆ ಯಾರೂ ಸೊಪ್ಪು ಹಾಕಬಾರದು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ನೀರಾವರಿ ಸೇರಿದಂತೆ ಇನ್ನಿತರ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತರಲು ಹೋರಾಟ ಮಾಡಿದ್ದು ಇದನ್ನು ಅರಿತು ಎಲ್ಲರೂ ಮತ ನೀಡಬೇಕು ಎಂದರು.


    ಕೇಂದ್ರದಲ್ಲಿ ಎನ್‌ಡಿಎ ಮೈತ್ರಿಕೂಟ ನಿಚ್ಚಳ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಿದರೆ ಸಂವಿಧಾನ ತಿದ್ದುಪಡಿ ಮಾಡುತ್ತಾರೆ ಎಂದು ವದಂತಿ ಹಬ್ಬಿಸುತ್ತಿದ್ದಾರೆ. ವಾಸ್ತವವಾಗಿ ಕಾಲಾನುಕಾಲಕ್ಕೆ ಸಂವಿಧಾನಕ್ಕೆ ಕೆಲವು ಬದಲಾವಣೆ ಮಾಡುವುದು ಸಹಜ ಪ್ರಕ್ರಿಯೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿದ್ದರೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿರಲಿಲ್ಲ. ಈ ತಪ್ಪನ್ನು ನಾವು ಭವಿಷ್ಯದಲ್ಲಿ ಪುನರಾವರ್ತನೆ ಮಾಡುವುದಿಲ್ಲ ಎಂದು ಹೇಳಿದರು.


    ಏ.4ರಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.


    ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ನವನಗರ ಅರ್ಬನ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ಬಸಂತ್, ವಸ್ತುಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ಜಿ.ಪಂ.ಮಾಜಿ ಉಪಾಧ್ಯಕ್ಷ ಎ.ಎಸ್.ಚನ್ನಬಸಪ್ಪ, ಮಾಜಿ ಸದಸ್ಯರಾದ ಎಂ.ಟಿ.ಕುಮಾರ್, ಸಿ.ಜೆ.ದ್ವಾರಕೀಶ್, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹೊಸಹಳ್ಳಿವೆಂಕಟೇಶ್, ದಲಿತ ಮುಖಂಡ ಹನಸೋಗೆ ನಾಗರಾಜು, ಕೆ.ಆರ್.ನಗರ ತಾಲೂಕು ಬಿಜೆಪಿ ಅಧ್ಯಕ್ಷ ಧರ್ಮ ಇತರರು ಮಾತನಾಡಿದರು.


    ಪುರಸಭೆ ಸದಸ್ಯರಾದ ಕೆ.ಎಲ್.ಜಗದೀಶ್, ಉಮೇಶ್, ಸಂತೋಷ್‌ಗೌಡ, ಬಿ.ಎಸ್.ತೋಂಟದಾರ್ಯ, ಮಾಜಿ ಅಧ್ಯಕ್ಷ ವೈ.ಆರ್.ಪ್ರಕಾಶ್, ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಕಾರ್ಯದರ್ಶಿ ಎಚ್.ಡಿ.ಪ್ರಭಾಕರ್‌ಜೈನ್, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಂ.ಟಿ.ಅಣ್ಣೇಗೌಡ, ತಾಪಂ ಮಾಜಿ ಸದಸ್ಯ ಎಂ.ತಮ್ಮಣ್ಣ, ತಾಲೂಕು ಜೆಡಿಎಸ್ ವಕ್ತಾರ ಕೆ.ಎಲ್.ರಮೇಶ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts