ಸಿಜೆ ದಿನೇಶ್ ಮಹೇಶ್ವರಿ ಸುಪ್ರೀಂಕೋರ್ಟ್​ಗೆ

ಬೆಂಗಳೂರು: ರಾಜ್ಯ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಶಿಫಾರಸು ಮಾಡಲಾಗಿದೆ.

ಈ ಕುರಿತು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ನ್ಯಾಯಮೂರ್ತಿಗಳಾದ ಎ.ಕೆ. ಸಿಕ್ರಿ, ಎಸ್. ಎ. ಬೊಬ್ಡೆ, ಎನ್.ವಿ. ರಮಣ ಹಾಗೂ ಅರುಣ್ ಮಿಶ್ರಾ ಅವರನ್ನೊಳಗೊಂಡ ಕೊಲಿಜಿಯಂ ಜ.10ರಂದು ಈ ಕುರಿತು ತೀರ್ಮಾನ ಕೈಗೊಂಡಿದ್ದು, ಶಿಫಾರಸನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲಿದೆ.

ದೇಶದ ಎಲ್ಲ ಹೈಕೋರ್ಟ್ ಮುಖ್ಯ ನ್ಯಾಯ ನ್ಯಾಯಮೂರ್ತಿಗಳು ಹಾಗೂ ಹಿರಿಯ ನ್ಯಾಯಮೂರ್ತಿಗಳ ಸೇವಾ ಹಿರಿತನವನ್ನು ಸುಪ್ರೀಂಕೋರ್ಟ್ ಕೊಲಿಜಿಯಮ್ ಪರಿಗಣಿಸಿದೆ.

2018ರ ಫೆ.12ರಂದು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪದಗ್ರಹಣ ಮಾಡಿದ್ದ ದಿನೇಶ್ ಮಹೇಶ್ವರಿ, ಅನಧಿಕೃತ ಫ್ಲೆಕ್ಸ್ ಹಾವಳಿ, ರಸ್ತೆಗುಂಡಿಗಳ ಸಮಸ್ಯೆ, ತ್ಯಾಜ್ಯ ವಿಲೇವಾರಿ ಸಮಸ್ಯೆಗಳು ಸೇರಿ ವಿವಿಧ ಸಾರ್ವಜನಿಕ ಹಿತಾಸಕ್ತಿಯುಳ್ಳ ಪ್ರಕರಣಗಳಲ್ಲಿ ಮಹತ್ವದ ಆದೇಶಗಳನ್ನು ನೀಡಿದ್ದಾರೆ.

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರಿಗೂ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಪದನ್ನೋತಿ ನೀಡಲು ಕೊಲಿಜಿಯಂ ಶಿಫಾರಸು ಮಾಡಿದೆ.