

ನವದೆಹಲಿ: ಮದ್ಯ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಈ ಪ್ರಕರಣದಲ್ಲಿ ತನ್ನ ಬಂಧನ ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ವಿಸ್ತೃತ ಪೀಠಕ್ಕೆ ವರ್ಗಾಯಿಸಿತು.
ಕೇಜ್ರಿವಾಲ್ ಜಾಮೀನು ಪಡೆದಿದ್ದರೂ ಸಿಬಿಐ ಪ್ರಕರಣದಲ್ಲಿ ಅರೆಸ್ಟ್ ಆಗಿರುವುದರಿಂದ ತಿಹಾರ್ ಜೈಲಿನಲ್ಲಿಯೇ ಇರಬೇಕಾಗಿದೆ.
ಮದ್ಯ ಹಗರಣ ಪ್ರಕರಣದಲ್ಲಿ ಏಪ್ರಿಲ್ 9ರಂದು ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ,ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ದ್ವಿಸದಸ್ಯ ಪೀಠ ಮೇ 17ರಂದು ಇಡಿ ಮತ್ತು ಸಿಎಂ ವಾದ ಆಲಿಸಿ ತೀರ್ಪನ್ನು ಕಾಯ್ದಿರಿಸಿತ್ತು.
ಈಗ ಮಧ್ಯಂತರ ಜಾಮೀನು ತೀರ್ಪು ಹೊರಬಿದ್ದಿದೆ. ಈ ಸಂದರ್ಭದಲ್ಲಿ ಪೀಠ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಸಿಎಂ ಹುದ್ದೆಯಿಂದ ಕೆಳಗಿಳಿಯುವ ಬಗ್ಗೆ ನ್ಯಾಯಾಲಯ ಯಾವುದೇ ಆದೇಶ ನೀಡಿಲ್ಲ. ಜನರಿಂದ ಆಯ್ಕೆಯಾದ ಜನಪ್ರತಿನಿಧಿಯಾಗಿ ಮುಖ್ಯಮಂತ್ರಿ ಸ್ಥಾನದಲ್ಲಿದ್ದಾರೆ. ಅವರನ್ನು ಬಂಧಿಸಿರುವುದರಿಂದ ಹುದ್ದೆಯಿಂದ ಕೆಳಗಿಳಿಯುವ ನಿರ್ಧಾರ ಅವರದೇ ಆಗಿದೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.