'ನೀವು ಬೆಂಕಿಯೊಂದಿಗೆ ಆಟವಾಡುತ್ತಿದ್ದೀರಿ': ಪಂಜಾಬ್, ತಮಿಳುನಾಡು ರಾಜ್ಯಪಾಲರಿಗೆ ಸುಪ್ರೀಂ ತರಾಟೆ

suprime court
Published on

ನವದೆಹಲಿ: ಪಂಜಾಬ್ ಮತ್ತು ತಮಿಳುನಾಡು ರಾಜ್ಯಪಾಲರು ವಿಧಾನಸಭೆಯಿಂದ ಅಂಗೀಕರಿಸಿದ ಮಸೂದೆಗಳ ಮೇಲೆ ಕ್ರಮ ಕೈಗೊಳ್ಳಲು ವಿಳಂಬ ಮಾಡುತ್ತಿದ್ದಾರೆ ಎಂದು ರಾಜ್ಯ ಸರಕಾರಗಳು ಆರೋಪಿಸಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಶುಕ್ರವಾರ ತೀವ್ರ ತರಾಟೆಗೆ ತೆಗೆದುಕೊಂಡಿತು.

ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠ, ಚುನಾಯಿತ ವಿಧಾನಸಭೆಯಿಂದ ಅಂಗೀಕರಿಸಲ್ಪಟ್ಟ ಮಸೂದೆಗಳನ್ನು ವಿಳಂಬ ಮಾಡದಂತೆ ಎರಡೂ ರಾಜ್ಯಪಾಲರನ್ನು ಒತ್ತಾಯಿಸಿತು. "ದಯವಿಟ್ಟು ಚುನಾಯಿತ ಸಭೆಯು ಅಂಗೀಕರಿಸಿದ ಮಸೂದೆಗಳ ಹಾದಿಯನ್ನು ತಿರುಗಿಸಬೇಡಿ. ಇದು ಅತ್ಯಂತ ಗಂಭೀರ ಮತ್ತು ಕಾಳಜಿಯ ವಿಷಯವಾಗಿದೆ" ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು.

"ನೀವು ಬೆಂಕಿಯೊಂದಿಗೆ ಆಟವಾಡುತ್ತಿದ್ದೀರಿ. ಉದ್ದೇಶಪೂರ್ವಕವಾಗಿ ಮಸೂದೆಗಳನ್ನು ವಿಳಂಭ ಮಾಡುವುದು ಸರಿಯಲ್ಲ. ರಾಜ್ಯಪಾಲರು ಇದನ್ನು ಏನೆಂದು ಹೇಳುತ್ತಾರೆ? ಪಂಜಾಬ್‌ನಲ್ಲಿ ಏನು ನಡೆಯುತ್ತಿದೆ ಎಂಬುದರ ಬಗ್ಗೆ ನಮಗೆ ಸಂತೋಷವಿಲ್ಲ. ನಾವು ಸಂಸದೀಯ ಪ್ರಜಾಪ್ರಭುತ್ವವಾಗಿ ಮುಂದುವರಿಯುತ್ತಿದ್ದೇವೆಯೇ ಎಂಬ ಅನುಮಾನ ಮೂಡುತ್ತಿದೆ? ಭಾರತವು ಸ್ಥಾಪಿತ ಸಂಪ್ರದಾಯಗಳು ಮತ್ತು ವಿವಿಧತೆ ಮೇಲೆ ಕಾರ್ಯನಿರ್ವಹಿಸುತ್ತಿದೆ. ಅವುಗಳನ್ನು ಅನುಸರಿಸುವ ಅಗತ್ಯವಿದೆ" ಎಂದು ಪೀಠವು ಒತ್ತಿಹೇಳಿತು.

ರಾಜ್ಯ ವಿಧಾನಸಭೆ ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ಒಪ್ಪಿಗೆ ನೀಡುವಲ್ಲಿ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪಂಜಾಬ್ ಸರ್ಕಾರ ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಪಂಜಾಬ್ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, ಹಣಕಾಸು ನಿರ್ವಹಣೆ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಏಳು ಮಸೂದೆಗಳನ್ನು ರಾಜ್ಯಪಾಲರು ಹಿಂಪಡೆದಿದ್ದಾರೆ ಎಂದು ಹೇಳಿದರು. ಜುಲೈನಲ್ಲಿ ರಾಜ್ಯಪಾಲರ ಒಪ್ಪಿಗೆಗಾಗಿ ಮಸೂದೆಗಳನ್ನು ಕಳುಹಿಸಲಾಗಿದೆ. ಅವರ ನಿಷ್ಕ್ರಿಯತೆಯು ಆಡಳಿತದ ಮೇಲೆ ದುಷ್ಪರಿಣಾಮ ಬೀರಿದೆ ಎಂದು ಅವರು ಹೇಳಿದರು.

ಪಂಜಾಬ್ ರಾಜ್ಯಪಾಲರು ವಿಧಾನಸಭೆಯಲ್ಲಿ ಅಂಗೀಕರಿಸಿದ ಮಸೂದೆಗಳ ಬಗ್ಗೆ ತೆಗೆದುಕೊಂಡ ಕ್ರಮಗಳ ವಿವರಗಳನ್ನು ದಾಖಲೆಯಲ್ಲಿ ಇರಿಸುವಂತೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ನ್ಯಾಯಾಲಯ ಸೂಚಿಸಿದೆ.

ಇನ್ನು ರಾಜ್ಯಪಾಲರು ಮಸೂದೆಗಳನ್ನು ಉದ್ದೇಶಪೂರ್ವಕವಾಗಿ ವಿಳಂಬ ಮಾಡಿ "ಜನರ ಇಚ್ಛೆಗೆ ಧಕ್ಕೆ ತರುತ್ತಿದ್ದಾರೆ" ಎಂದು ಆರೋಪಿಸಿ ತಮಿಳುನಾಡು ಸರ್ಕಾರವು ಸುಪ್ರೀಂಕೋರ್ಟ್ ಮಧ್ಯಪ್ರವೇಶಿಸುವಂತೆ ಒತ್ತಾಯಿಸಿತ್ತು. ಕಳೆದ ಕೆಲವು ತಿಂಗಳುಗಳಿಂದ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರ ಮತ್ತು ತಮಿಳುನಾಡು ರಾಜ್ಯಪಾಲ ರವಿ ಅವರ ನಡುವೆ ಆಡಳುತಾತ್ಮಕವಾಗಿ ಶೀತಲ ಸಮರ ನಡೆಯುತ್ತಿರುವುದನ್ನು ಇಲ್ಲಿ ಸ್ಮರಿಸಬಹುದು.

vijayavani.net/kea-exam-scam-case-kingpin-rd-patil-arrested-by-kalaburagi-police

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net