ಕೇಜ್ರಿವಾಲ್​ ಜಾಮೀನು ಅವಧಿ ವಿಸ್ತರಣೆ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

kejriwal
Published on

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಾಮೀನು ಅವಧಿ ವಿಸ್ತರಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.

ದೆಹಲಿ ಲಿಕ್ಕರ್ ಹಗರಣ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಕೇಜ್ರಿವಾಲ್ ಆರೋಗ್ಯ ತಪಾಸಣೆಗಾಗಿ ಇನ್ನೂ 7 ದಿನಗಳ ಕಾಲ ಮಧ್ಯಂತರ ಜಾಮೀನು ವಿಸ್ತರಣೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ನ್ಯಾಯಾಲಯ ನಿರಾಕರಿಸಿದೆ.

ಕೇಜ್ರಿವಾಲ್ ಜೂನ್ 2 ರಂದು ಶರಣಾಗಬೇಕು. ಆದರೆ ಅವರು ಸಾಮಾನ್ಯ ಜಾಮೀನಿಗಾಗಿ ಕೆಳ ನ್ಯಾಯಾಲಯವನ್ನು ಸಂಪರ್ಕಿಸಲು ಮುಕ್ತವಾಗಿರುವುದರಿಂದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ರಿಜಿಸ್ಟ್ರಿ ಸ್ಪಷ್ಟಪಡಿಸಿದೆ.

ಆರೋಗ್ಯದ ಕಾರಣ ನೀಡಿ ಕೇಜ್ರಿವಾಲ್ ಸೋಮವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಕೂಡಲೇ ಈ ಬಗ್ಗೆ ಗಮನಹರಿಸಬೇಕು ಎಂದು ಮನವಿ ಮಾಡಿದರು. ಆದರೆ, ಅರ್ಜಿಯನ್ನು ತಕ್ಷಣವೇ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿತ್ತು. ಬಳಿಕ ಮತ್ತೆ ಮಧ್ಯಂತರ ಜಾಮೀನು ವಿಸ್ತರಿಸುವಂತೆ ಅರವಿಂದ್ ಕೇಜ್ರಿವಾಲ್ ಪರವಾಗಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ, ಮಧ್ಯಂತರ ಜಾಮೀನು ವಿಸ್ತರಿಸುವಂತೆ ರಿಜಿಸ್ಟ್ರಾರ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ತಿರಸ್ಕರಿಸಿದೆ.

ಕೇಜ್ರಿವಾಲ್ ತನ್ನ ಬಂಧನದ ನಂತರ 7 ಕೆಜಿ ತೂಕವನ್ನು ಕಳೆದುಕೊಂಡಿದ್ದೇನೆ ಎಂದು ಅರ್ಜಿಯಲ್ಲಿ ಹೇಳಿಕೊಂಡಿದ್ದಾರೆ. ಈ ಪ್ರಕ್ರಿಯೆಯಲ್ಲಿ, ಮ್ಯಾಕ್ಸ್‌ನ ವೈದ್ಯರು ಅವರ ಕೀಟೋನ್ ಮಟ್ಟವು ತುಂಬಾ ಹೆಚ್ಚಾಗಿದೆ ಮತ್ತು ಅವರಿಗೆ ಕೆಲವು ಗಂಭೀರ ಲಕ್ಷಣಗಳಿವೆ ಎಂದು ಹೇಳಿದ್ದರು. ಅದಕ್ಕಾಗಿ, ಕೇಜ್ರಿವಾಲ್ ಪಿಇಟಿ-ಸಿಟಿ ಸ್ಕ್ಯಾನ್ ಮತ್ತು ಹಲವಾರು ಪರೀಕ್ಷೆಗಳಿಗೆ ಒಳಗಾಗಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಪರೀಕ್ಷೆಗೆ 7 ದಿನಗಳ ಕಾಲಾವಕಾಶ ಕೇಳಿದ್ದರು. ಆದರೆ ಸುಪ್ರೀಂ ಕೋರ್ಟ್ ಒಪ್ಪಲಿಲ್ಲ. ಕೇಜ್ರಿವಾಲ್ ಪ್ರಸ್ತುತ ಪಂಜಾಬ್‌ನಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಮೇ 30ರ ರಾತ್ರಿ ದೆಹಲಿಗೆ ವಾಪಸಾಗಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net