ಚುನಾವಣಾ ಪ್ರಚಾರ ಮಾಡದಂತೆ ನಿರ್ಬಂಧಿಸುವ ಆದೇಶ ರದ್ದುಗೊಳಿಸುವ ಮಾಯ ಮನವಿ ತಿರಸ್ಕರಿಸಿದ ಸುಪ್ರೀಂಕೋರ್ಟ್​

ನವದೆಹಲಿ: ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಲ್ಲಿ ತಮ್ಮ ವಿರುದ್ಧ ಕ್ರಮ ಕೈಗೊಂಡಿರುವ ಚುನಾವಣಾ ಆಯೋಗ, 48 ತಾಸು ಚುನಾವಣಾ ಪ್ರಚಾರ ಮಾಡದಂತೆ ನಿರ್ಬಂಧಿಸಿದೆ. ಈ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್​ ತಿರಸ್ಕರಿಸಿದೆ.

ಮಂಗಳವಾರ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​, ಪ್ರಚೋದನಾಕಾರಿ ಭಾಷಣ ಮಾಡುವ ರಾಜಕಾರಣಿಗಳ ವಿರುದ್ಧ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗಕ್ಕೆ ಅಧಿಕಾರ ಇದೆ. ಈ ಅಧಿಕಾರವನ್ನು ಬಳಸಿಕೊಂಡು ಪ್ರಭಾವಿ ರಾಜಕಾರಣಿಗಳ ವಿರುದ್ಧ ಮೊದಲ ಬಾರಿ ಆಯೋಗ ಕ್ರಮ ಕೈಗೊಂಡಿದೆ. ಇದಕ್ಕಾಗಿ ಆಯೋಗವನ್ನು ಅಭಿನಂದಿಸುತ್ತೇವೆ ಎಂದು ಹೇಳಿ ಮಾಯಾವತಿ ಅರ್ಜಿಯನ್ನು ತಿರಸ್ಕರಿಸಿತು.

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್​ ಮತ್ತು ಮಾಜಿ ಸಿಎಂ ಮಾಯಾವತಿ ಪ್ರಚೋದನಕಾರಿ ಭಾಷಣ ಮಾಡಿರುವುದಾಗಿ ಆರೋಪಿಸಿ ಸುಪ್ರೀಂಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಇದರ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್​ ಇವರಿಬ್ಬರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿತ್ತು. ಅದರಂತೆ ಆಯೋಗವು ಯೋಗಿ ಆದಿತ್ಯನಾಥ್​ ಅವರಿಗೆ 72 ಗಂಟೆ ಮತ್ತು ಮಾಯಾವತಿಗೆ 48 ಗಂಟೆ ಚುನಾವಣಾ ಪ್ರಚಾರ ಮಾಡದಂತೆ ನಿರ್ಬಂಧಿಸಿ ಸೋಮವಾರ ಆದೇಶಿಸಿತ್ತು. (ಏಜೆನ್ಸೀಸ್​)

Leave a Reply

Your email address will not be published. Required fields are marked *