ಜಯಲಲಿತಾ ಸಾವಿನ ತನಿಖೆ ನಡೆಸುತ್ತಿರುವ ಆಯೋಗ ವಿಚಾರಣೆಗೆ ತಡೆ ನೀಡಿದ ಸುಪ್ರೀಂ ಕೋರ್ಟ್​

ನವದೆಹಲಿ: ಜಯಲಲಿತಾ ಸಾವಿನ ತನಿಖೆ ನಡೆಸಲು ತಮಿಳುನಾಡು ಸರ್ಕಾರ ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಆರ್ಮುಗಸ್ವಾಮಿ ಅವರ ನೇತೃತ್ವದಲ್ಲಿ ರಚಿಸಿರುವ ತನಿಖಾ ಆಯೋಗಕ್ಕೆ ಪ್ರಕರಣದ ವಿಚಾರಣೆ ನಡೆಸದಂತೆ ಸುಪ್ರೀಂ ಕೋರ್ಟ್​ ತಡೆ ನೀಡಿದೆ.

ತನಿಖಾ ಆಯೋಗದ ವಿಚಾರಣೆಗೆ ತಡೆ ನೀಡಬೇಕು ಎಂದು ಚೆನ್ನೈನ ಅಪೋಲೋ ಆಸ್ಪತ್ರೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್​ ಗೊಗೋಯ್​ ಅವರ ನೇತೃತ್ವದ ಪೀಠ ಈ ಆದೇಶವನ್ನು ನೀಡಿದೆ.

ಈ ಮೊದಲು ಅಪೋಲೋ ಆಸ್ಪತ್ರೆ ತನಿಖಾ ಆಯೋಗದ ವಿಚಾರಣೆಗೆ ತಡೆ ನೀಡಬೇಕು ಎಂದು ಮದ್ರಾಸ್​ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್​ ಏ. 4 ರಂದು ತನಿಖೆಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಅಪೋಲೋ ಆಸ್ಪತ್ರೆಗೆ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು.

2016ರ ಸೆ.22ರಂದು ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನ ಅಪೊಲೋ ಆಸ್ಪತ್ರೆ ಸೇರಿದ್ದ ಜಯಲಲಿತಾ ಅವರು ಸತತ 75 ದಿನಗಳ ಚಿಕಿತ್ಸೆಯ ಹೊರತಾಗಿಯೂ 2016ರ ಡಿ.5ರ ಮಧ್ಯರಾತ್ರಿ ಕೊನೆಯುಸಿರೆಳೆದಿದ್ದರು. ಅದರೆ, ಅವರ ಚಿಕಿತ್ಸಾ ಅವಧಿಯ ಘಟನಾವಳಿಯ ಕುರಿತು ರಾಜ್ಯಾದ್ಯಂತ ಅನುಮಾನಗಳು ವ್ಯಕ್ತವಾಗಿದ್ದವು. ಈ ಹಿನ್ನೆಲೆಯಲ್ಲಿ ತಮಿಳುನಾಡಿನ ಆಡಳಿತಾರೂಡ ಎಐಎಡಿಎಂಕೆ ಸರ್ಕಾರ ನಿವೃತ್ತ ನ್ಯಾಯಮೂರ್ತಿ ಆರ್ಮುಗಸ್ವಾಮಿ ಅವರ ನೇತೃತ್ವದಲ್ಲಿ ತನಿಖಾ ಆಯೋಗ ರಚನೆ ಮಾಡಿದೆ.

ತನಿಖಾ ಆಯೋಗಕ್ಕೆ ನೆರವು ನೀಡಲು ವೈದ್ಯಕೀಯ ಮಂಡಳಿಯನ್ನು ರಚಿಸಬೇಕು ಎಂದು ಅಪೋಲೋ ಆಸ್ಪತ್ರೆಗೆ ಮದ್ರಾಸ್​ ಹೈಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿಯಲ್ಲಿ ತಿಳಿಸಿತ್ತು. ಆದರೆ ಕೋರ್ಟ್​ ಆಸ್ಪತ್ರೆಯ ಮನವಿಯನ್ನು ತಿರಸ್ಕರಿಸಿತ್ತು. (ಏಜೆನ್ಸೀಸ್​)

Leave a Reply

Your email address will not be published. Required fields are marked *